Monday, September 7, 2026
Join WhatsApp Group
HomeLocal News100 ದಿನಗಳಲ್ಲಿ 10 ಮಹತ್ವಾಕಾಂಕ್ಷಿ ಯೋಜನೆ: ಲಕ್ಷ್ಮಣ ಸವದಿ

100 ದಿನಗಳಲ್ಲಿ 10 ಮಹತ್ವಾಕಾಂಕ್ಷಿ ಯೋಜನೆ: ಲಕ್ಷ್ಮಣ ಸವದಿ

ಕಾರವಾರ: ಆಡಳಿತಕ್ಕೆ ವೇಗ ನೀಡುವುದರ ಜತೆಗೆ ರೈತರು, ಯುವಜನರು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಿ ಮುಂದಿನ 100 ದಿನಗಳಲ್ಲಿ 10 ಪ್ರಮುಖ ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೊಳಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹೇಳಿದರು.

ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಿದ್ದ 80ನೇ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ರೈತ ಮಿತ್ರ–ಬಡವರ ಬಂಧು, ಗ್ರಾಮಾನುಭವ, ಯುವ ಯುಗ–ಯುವ ಕರ್ನಾಟಕ, ಭಾರತ್ ಜೋಡೋ ಯುವಕ ಸಂಘ ಮಿಷನ್, ಯುವ ಉದ್ಯೋಗ ಸೇತು, ಸರ್ಕಾರಿ ಆಸ್ಪತ್ರೆಗಳ ದತ್ತು ಯೋಜನೆ, ನಶೆ ಮುಕ್ತ ಕರ್ನಾಟಕ, ಪ್ರಜಾ ಸೇವೆ, ಭೂ ಗ್ಯಾರಂಟಿ ಹಾಗೂ ಕರ್ನಾಟಕ ಮೊಬಿಲಿಟಿ ಗ್ರಿಡ್ ಮಿಷನ್ ಸೇರಿದಂತೆ ಹಲವು ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗುವುದು ಎಂದರು.

ಸರ್ಕಾರಿ ಇಲಾಖೆಗಳ ಖಾಲಿ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಕೆಪಿಎಸ್‌ಸಿ ಮತ್ತು ಕೆಇಎ ನೇಮಕಾತಿ ಪರೀಕ್ಷೆಗಳು ಪಾರದರ್ಶಕವಾಗಿ ನಡೆಯುವಂತೆ ಕ್ರಮವಹಿಸಲಾಗಿದೆ ಎಂದು ತಿಳಿಸಿದರು.

ಪ್ರಸಕ್ತ ಮುಂಗಾರಿನಲ್ಲಿ ಶೇ.16ರಷ್ಟು ಮಳೆ ಕೊರತೆಯಾಗಿದ್ದು, ಕುಡಿಯುವ ನೀರಿಗಾಗಿ 72 ಖಾಸಗಿ ಕೊಳವೆಬಾವಿಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ₹1 ಕೋಟಿ ಅನುದಾನ ನೀಡಲಾಗಿದೆ ಎಂದರು.

ಜಿಲ್ಲೆಯ 25 ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಸಿಎಸ್‌ಆರ್ ನಿಧಿ ಬಳಸಿಕೊಳ್ಳಲಾಗುವುದು. ಉದ್ಯೋಗ ಖಾತರಿ ಯೋಜನೆಯಡಿ 1.85 ಲಕ್ಷ ಮಾನವ ದಿನಗಳನ್ನು ಸೃಜಿಸಿ 10,072 ಮಂದಿಗೆ ಕೆಲಸ ನೀಡಲಾಗಿದ್ದು, ವಿ.ಬಿ.ಜಿ. ರಾಮ್‌ಜಿ ಯೋಜನೆಯಡಿ 9,000 ಮಾನವ ದಿನಗಳನ್ನು ಸೃಜಿಸಿ 1,089 ಮಂದಿಗೆ ಉದ್ಯೋಗ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ ಸುಮಾರು 12 ಸಾವಿರ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಹೇಳಿದರು.

ಜಿಲ್ಲೆಗೆ 300 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರಾಗಿದ್ದು, ಮೊದಲ ಹಂತದಲ್ಲಿ ₹100 ಕೋಟಿ ಬಿಡುಗಡೆಯಾಗಿದೆ. ಎಂಆರ್‌ಐ, ಸಿಟಿ ಸ್ಕ್ಯಾನ್ ಸೌಲಭ್ಯ ಕಲ್ಪಿಸಲಾಗಿದ್ದು, ಮುಂದಿನ ದಿನಗಳಲ್ಲಿ ಕ್ಯಾನ್ಸರ್ ಕೇರ್ ಘಟಕ ಸ್ಥಾಪಿಸಲಾಗುವುದು ಎಂದರು.

ಜಾತಿ, ಮತ, ಧರ್ಮ ಹಾಗೂ ಭಾಷೆಯ ಭೇದ ಮರೆತು ದೇಶದ ವೈವಿಧ್ಯತೆ ಮತ್ತು ಅಖಂಡತೆಯನ್ನು ಕಾಪಾಡಿ ಅಭಿವೃದ್ಧಿಯತ್ತ ಸಾಗಬೇಕು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸುವುದರ ಜತೆಗೆ ದೇಶ ನಿರ್ಮಾಣದಲ್ಲಿ ಪ್ರತಿಯೊಬ್ಬರೂ ಕೊಡುಗೆ ನೀಡಬೇಕು ಎಂದು ಸವದಿ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಸಕ ಸತೀಶ್ ಸೈಲ್, ಎಂಎಲ್‌ಸಿ ಗಣಪತಿ ಉಳ್ವೇಕರ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷಮಾ ಗೋಡಬೋಲೆ, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಪಂ ಸಿಇಒ ಡಾ. ದಿಲೀಷ್ ಶಶಿ, ಎಸ್ಪಿ ದೀಪನ್ ಎಂ.ಎನ್. ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪೊಲೀಸ್, ಅರಣ್ಯ, ಗೃಹರಕ್ಷಕ ದಳ ಹಾಗೂ ವಿದ್ಯಾರ್ಥಿಗಳ ಪಥಸಂಚಲನ ನಡೆಯಿತು. ಉತ್ತಮ ಸೇವೆ ಸಲ್ಲಿಸಿದ ನೌಕರರಿಗೆ ಪ್ರಶಸ್ತಿ, ಕ್ರೀಡಾಪಟುಗಳಿಗೆ ಸನ್ಮಾನ ಹಾಗೂ ಚದುರಂಗ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪ್ರವಾಸಿ ತಾಣಗಳ ನಕ್ಷೆ ಮತ್ತು ಕಂದಾಯ ಇಲಾಖೆಯ ಡೈರೆಕ್ಟರಿಯನ್ನೂ ಬಿಡುಗಡೆ ಮಾಡಲಾಯಿತು. ವಿದ್ಯಾರ್ಥಿಗಳಿಂದ ದೇಶಭಕ್ತಿ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share