ಕಾರವಾರ: ಸಾಮಾನ್ಯ ಪ್ರವೇಶ ಪರೀಕ್ಷೆಗಳು ಏಪ್ರಿಲ್ 23 ಮತ್ತು 24ರಂದು ನಡೆಯಲಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ, ಪರೀಕ್ಷೆಗಳು ಅತ್ಯಂತ ಪಾರದರ್ಶಕ ಹಾಗೂ ವ್ಯವಸ್ಥಿತ ರೀತಿಯಲ್ಲಿ ನಡೆಯುವಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೂಚನೆ ನೀಡಿದರು.
ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಒಟ್ಟು 14 ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿದ್ದು, 4,498 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ, ವಿದ್ಯುತ್, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಸೌಕರ್ಯ ಸೌಲಭ್ಯಗಳಿರುವುದನ್ನು ಕೇಂದ್ರಗಳ ಮುಖ್ಯಸ್ಥರು ಮುಂಚಿತವಾಗಿ ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದರು.
ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆ ಸಾಗಾಟದ ವಾಹನಗಳಿಗೆ ಮತ್ತು ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಭದ್ರತೆ ಒದಗಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದರು. ಪ್ರತಿಯೊಂದು ಕೇಂದ್ರದಲ್ಲೂ ಸಿಸಿಟಿವಿ ಅಳವಡಿಸಲಾಗುವುದು. ಜಿಲ್ಲಾ ಪಂಚಾಯತ್ ಕಚೇರಿಯಿಂದ ವೆಬ್ ಕಾಸ್ಟಿಂಗ್ ಮೂಲಕ ವೀಕ್ಷಣೆ ಮಾಡಲಾಗುವುದು ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್, ಬ್ಲೂಟೂತ್, ಕ್ಯಾಲ್ಕುಲೇಟರ್ ಸೇರಿದಂತೆ ಎಲ್ಲಾ ರೀತಿಯ ಎಲೆಕ್ಟ್ರಾನಿಕ್ ಸಾಧನಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ. ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.
ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಇಲಾಖೆಯಿಂದ ಸಿಬ್ಬಂದಿಯನ್ನು ನಿಯೋಜಿಸುವಂತೆ ಸೂಚಿಸಿದ ಅವರು, ಪರೀಕ್ಷಾ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಬಸ್ ಸೇವೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು. ಬೇಡಿಕೆಗನುಗುಣವಾಗಿ ಹೆಚ್ಚುವರಿ ಬಸ್ ಹಾಗೂ ನಿಲುಗಡೆ ವ್ಯವಸ್ಥೆ ಕಲ್ಪಿಸುವಂತೆ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತ ಎಲ್ಲ ಅಧಿಕಾರಿಗಳು ತಮ್ಮ ಜವಾಬ್ದಾರಿಯಲ್ಲಿ ಯಾವುದೇ ಲೋಪವಾಗದಂತೆ, ಪರಸ್ಪರ ಸಮನ್ವಯದಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸತೀಶ್ ನಾಯ್ಕ, ಜಿ.ಪಂ. ಯೋಜನಾ ನಿರ್ದೇಶಕ ಕರೀಂ ಅಸಾದಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.