Saturday, May 30, 2026
HomeStateCET ಪರೀಕ್ಷಾ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ; ಆಕ್ರೋಶ

CET ಪರೀಕ್ಷಾ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ; ಆಕ್ರೋಶ

ಬೆಂಗಳೂರು: ರಾಜ್ಯಾದ್ಯಂತ ಸಿಇಟಿ (KCET) ಪರೀಕ್ಷೆಗಳು ನಡೆಯುತ್ತಿರುವ ವೇಳೆ, ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ ಭಾರೀ ವಿವಾದಕ್ಕೆ ಕಾರಣವಾಗಿದೆ. “ಜನಿವಾರ ತೆಗೆಯದಿದ್ದರೆ ಪರೀಕ್ಷಾ ಕೇಂದ್ರದಿಂದ ಹೊರಹೋಗಿ” ಎಂದು ಸಿಬ್ಬಂದಿ ಹೇಳಿದ ಹಿನ್ನೆಲೆ, ಪೋಷಕರು ಮತ್ತು ಧಾರ್ಮಿಕ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಮಡಿವಾಳದಲ್ಲಿರುವ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಪರೀಕ್ಷೆಯ ಮೊದಲ ದಿನವೇ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಕೇಳಿಬಂದಿದೆ. ಪರೀಕ್ಷೆಗೆ ಬಂದ ವಿದ್ಯಾರ್ಥಿಗಳನ್ನು ತಪಾಸಣೆ ನೆಪದಲ್ಲಿ ಅಡ್ಡಗಟ್ಟಿದ ಸಿಬ್ಬಂದಿ, ಜನಿವಾರ ತೆಗೆದುಬಿಡುವಂತೆ ಒತ್ತಾಯಿಸಿದ್ದಾಗಿ ತಿಳಿದುಬಂದಿದೆ.

ಆನಂದ್ ಸುಧೀರ್ ರಾವ್ ಸೇರಿದಂತೆ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ವಿದ್ಯಾರ್ಥಿಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದಾಗ, ಜನಿವಾರ ತೆಗೆಯದಿದ್ದರೆ ಪರೀಕ್ಷೆಗೆ ಅವಕಾಶ ನೀಡುವುದಿಲ್ಲ ಎಂದು ಸಿಬ್ಬಂದಿ ಎಚ್ಚರಿಕೆ ನೀಡಿದರೆಂದು ಹೇಳಲಾಗಿದೆ. ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಪೋಷಕರು ಅನಿವಾರ್ಯವಾಗಿ ಜನಿವಾರ ತೆಗೆಸಿ ಪರೀಕ್ಷೆಗೆ ಕಳುಹಿಸಿದ್ದಾಗಿ ತಿಳಿಸಿದ್ದಾರೆ.

ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಪರೀಕ್ಷಾ ಕೇಂದ್ರದ ಬಳಿ ಪೋಷಕರು ಹಾಗೂ ಧಾರ್ಮಿಕ ಮುಖಂಡರು ಪ್ರತಿಭಟನೆ ನಡೆಸಿ, ಇಂತಹ ಕ್ರಮಗಳು ಧಾರ್ಮಿಕ ಹಕ್ಕಿಗೆ ಧಕ್ಕೆ ತರುತ್ತವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಇಟಿ ಪರೀಕ್ಷಾ ನಿಯಮಾವಳಿಯಲ್ಲಿ ಜನಿವಾರ ತೆಗೆಸುವ ಕುರಿತು ಯಾವುದೇ ಸೂಚನೆ ಇಲ್ಲದಿದ್ದರೂ, ಸಿಬ್ಬಂದಿಗಳು ಸ್ವಯಂಪ್ರೇರಿತವಾಗಿ ಇಂತಹ ಕ್ರಮ ಕೈಗೊಳ್ಳುತ್ತಿರುವುದು ಖಂಡನೀಯ ಎಂದು ತಿಳಿಸಿದ್ದಾರೆ.

ಇದೇ ರೀತಿಯ ಘಟನೆ ಕಳೆದ ವರ್ಷವೂ ನಡೆದಿದ್ದು, ಆಗ ನ್ಯಾಯಾಲಯ ಜನಿವಾರ ತೆಗೆಯಬಾರದು ಎಂದು ಸೂಚನೆ ನೀಡಿತ್ತು. ಆದರೂ ಮತ್ತೆ ಅದೇ ರೀತಿಯ ಘಟನೆ ಮರುಕಳಿಸಿರುವುದು ವಿಷಾದನೀಯ ಎಂದು ಪೋಷಕರು ಕಿಡಿಕಾರಿದ್ದಾರೆ. ಈ ಕುರಿತು ಸಂಬಂಧಿತ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂಬ ಆಗ್ರಹ ವ್ಯಕ್ತವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share