Saturday, May 30, 2026
HomeLocal Newsಸಾರ್ವಜನಿಕರೊಂದಿಗೆ ಅಧಿಕಾರಿಗಳು ಸೌಜನ್ಯತೆಯಿಂದ ವರ್ತಿಸಿ

ಸಾರ್ವಜನಿಕರೊಂದಿಗೆ ಅಧಿಕಾರಿಗಳು ಸೌಜನ್ಯತೆಯಿಂದ ವರ್ತಿಸಿ

ಕಾರವಾರ: ಪ್ರತಿಯೊಬ್ಬ ವ್ಯಕ್ತಿಯೂ ಗೌರವದಿಂದ, ಸುರಕ್ಷಿತವಾಗಿ ಮತ್ತು ಸಂತೋಷದಿಂದ ಬದುಕಲು ಹೊಂದಿರುವ ಮೂಲಭೂತ ಹಕ್ಕುಗಳೇ ಮಾನವ ಹಕ್ಕುಗಳು. ಇವುಗಳನ್ನು ಕಾಪಾಡುವುದು ಕೇವಲ ಕಾನೂನುಬದ್ಧ ಕರ್ತವ್ಯವಲ್ಲ, ಪ್ರತಿಯೊಬ್ಬ ಸರ್ಕಾರಿ ಅಧಿಕಾರಿಯ ನೈತಿಕ ಜವಾಬ್ದಾರಿಯೂ ಆಗಿದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ. ಟಿ. ಶ್ಯಾಮ್ ಭಟ್ ಹೇಳಿದರು.

ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಕುರಿತ ಪ್ರಕರಣಗಳ ವಿಚಾರಣೆ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಸಂವಾದದಲ್ಲಿ ಅವರು ಮಾತನಾಡಿದರು.

ಸರ್ಕಾರ ಜಾರಿಗೆ ತರುವ ಜನೋಪಯೋಗಿ ಯೋಜನೆಗಳು ಹಾಗೂ ಸಾರ್ವಜನಿಕ ಸೇವೆಗಳು ವಿಳಂಬವಿಲ್ಲದೆ ಜನರಿಗೆ ತಲುಪಬೇಕು. ಕಚೇರಿಗಳಿಗೆ ಬರುವ ಸಾರ್ವಜನಿಕರೊಂದಿಗೆ ಅಧಿಕಾರಿಗಳು ತಾಳ್ಮೆ, ಸೌಜನ್ಯ ಮತ್ತು ಮಾನವೀಯತೆಯಿಂದ ವರ್ತಿಸಬೇಕು. ಯಾವುದೇ ಒತ್ತಡ ಇದ್ದರೂ ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ನೆರವು ನೀಡುವುದು ಅಧಿಕಾರಿಗಳ ಮುಖ್ಯ ಕರ್ತವ್ಯ ಎಂದು ಅವರು ತಿಳಿಸಿದರು.

ರಾಜ್ಯ ಮಾನವ ಹಕ್ಕುಗಳ ಆಯೋಗವು ಬೆಂಗಳೂರಿನಲ್ಲಿ ಮಾತ್ರ ಕಚೇರಿ ಹೊಂದಿದ್ದು, ಆಯೋಗದ ಹೆಸರನ್ನು ದುರುಪಯೋಗಪಡಿಸಿಕೊಂಡು ಕೆಲವು ಸಂಘ-ಸಂಸ್ಥೆಗಳು ವಿವಿಧ ಕಚೇರಿಗಳಿಗೆ ಭೇಟಿ ನೀಡುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಅಂತಹ ಸಂಸ್ಥೆಗಳ ವಿರುದ್ಧ ತಕ್ಷಣ ಪೊಲೀಸ್ ಇಲಾಖೆ ಹಾಗೂ ಆಯೋಗಕ್ಕೆ ದೂರು ಸಲ್ಲಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಪ್ರತಿ ತಿಂಗಳು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಸುಮಾರು 500ಕ್ಕೂ ಹೆಚ್ಚು ದೂರುಗಳು ಬರುತ್ತಿವೆ. ದೂರುಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ ನೇರ ವಿಚಾರಣೆ ನಡೆಸಲಾಗುತ್ತಿದೆ. ಈಗಾಗಲೇ ರಾಜ್ಯದ 29 ಜಿಲ್ಲೆಗಳಿಗೆ ಭೇಟಿ ನೀಡಲಾಗಿದೆ. ಹಿಂದೆ ದಾಖಲಾಗಿದ್ದ ಸುಮಾರು 8000 ಪ್ರಕರಣಗಳಲ್ಲಿ ಈಗ 3000 ಪ್ರಕರಣಗಳಷ್ಟೇ ಬಾಕಿ ಉಳಿದಿವೆ ಎಂದು ಮಾಹಿತಿ ನೀಡಿದರು.

ಉತ್ತರ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಆಯೋಗದಲ್ಲಿ 30 ಪ್ರಕರಣಗಳು ವಿಚಾರಣೆಗೆ ಬಾಕಿ ಇದ್ದು, ಬುಧವಾರ ನಡೆದ ಸಭೆಯಲ್ಲಿ ಎಲ್ಲಾ ಪ್ರಕರಣಗಳ ಸಂಪೂರ್ಣ ವಿಚಾರಣೆ ನಡೆಸಲಾಗಿದೆ. ಜಿಲ್ಲಾಡಳಿತವು ವಿವರವಾದ ವರದಿ ಸಲ್ಲಿಸಿದ್ದು, ಬಹುತೇಕ ಪ್ರಕರಣಗಳು ಇತ್ಯರ್ಥ ಹಂತ ತಲುಪಿವೆ. ಅಂತಿಮ ವರದಿ ಶೀಘ್ರದಲ್ಲೇ ಸಲ್ಲಿಸಲಾಗುವುದು ಎಂದು ಹೇಳಿದರು.

ಪ್ರಕರಣಗಳ ತ್ವರಿತ ಇತ್ಯರ್ಥಕ್ಕಾಗಿ ಆಯೋಗದೊಂದಿಗೆ ಸಮನ್ವಯ ಸಾಧಿಸಿದ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯತ್ ಸಿಇಒ ಡಾ. ದಿಲೀಷ್ ಶಶಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರನ್ನು ಡಾ. ಶ್ಯಾಮ್ ಭಟ್ ಅಭಿನಂದಿಸಿದರು.

ಆಯೋಗದ ನ್ಯಾಯಾಂಗ ಸದಸ್ಯ ಎಸ್.ಕೆ. ವಂಟಿಗೋಡಿ ಮಾತನಾಡಿ, ಪ್ರತಿಯೊಬ್ಬ ವ್ಯಕ್ತಿಗೂ ಉತ್ತಮ ಜೀವನ ನಡೆಸಲು ಸಮಾನ ಅವಕಾಶಗಳು ದೊರೆಯಬೇಕು ಎನ್ನುವುದೇ ಆಯೋಗದ ಉದ್ದೇಶವಾಗಿದೆ ಎಂದರು.

ಮಾನವ ಹಕ್ಕು ಉಲ್ಲಂಘನೆ ಕುರಿತ ದೂರುಗಳಲ್ಲಿ ಪೊಲೀಸ್ ಇಲಾಖೆಗೆ ಸಂಬಂಧಿಸಿದವು ಹೆಚ್ಚು ಕಂಡುಬರುತ್ತಿದ್ದು, ನಂತರ ಕಾರಾಗೃಹ, ಕಂದಾಯ, ಅರಣ್ಯ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವಿರುದ್ಧದ ದೂರುಗಳು ಹೆಚ್ಚಿವೆ. ದೂರುಗಳ ಪರಿಶೀಲನೆಯಲ್ಲಿ ಲೋಪಗಳು ಕಂಡುಬಂದರೆ ಸಂಬಂಧಿತ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಹಾಗೂ ನೊಂದ ವ್ಯಕ್ತಿಗೆ ಪರಿಹಾರ ನೀಡಲು ಸರ್ಕಾರಕ್ಕೆ ಶಿಫಾರಸು ಮಾಡಲಾಗುತ್ತದೆ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad

Most Popular

Recent Comments

error: Content is protected !!
Share