ಯಲ್ಲಾಪುರ: ಮದುವೆ ಸಮಾರಂಭಕ್ಕೆ ತೆರಳಿ ವಾಪಸ್ಸಾಗುತ್ತಿದ್ದ ಮಿನಿ ಬಸ್ಸೊಂದು ರಾಷ್ಟ್ರೀಯ ಹೆದ್ದಾರಿ 52ರ ಅರಬೈಲ್ ಘಟ್ಟದಲ್ಲಿ ಅಪಘಾತಕ್ಕೀಡಾಗಿ ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.
ಅರಬೈಲ್ ಗ್ರಾಮದಿಂದ ಬೆಳಗಾವಿಯಲ್ಲಿ ನಡೆದ ಮದುವೆ ಸಮಾರಂಭಕ್ಕೆ ತೆರಳಿದ್ದ ಪ್ರಯಾಣಿಕರು ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದರು. ಮನೆ ತಲುಪಲು ಇನ್ನೂ ಎರಡು ಕಿಲೋಮೀಟರ್ ಮಾತ್ರ ಬಾಕಿ ಇರುವಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ನೇರವಾಗಿ ಹೆದ್ದಾರಿ ಬದಿಯ ಗುಡ್ಡಕ್ಕೆ ಗುದ್ದಿದ ಪರಿಣಾಮ ವಾಹನದಲ್ಲಿದ್ದ ಹಲವರು ಗಾಯಗೊಂಡಿರುವ ಮಾಹಿತಿ ಲಭ್ಯವಾಗಿದ್ದು, ಅಪಘಾತದ ತೀವ್ರತೆಗೆ ಪ್ರಯಾಣಿಕರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ತಕ್ಷಣ ಸ್ಥಳೀಯರು ಹಾಗೂ ಸಾರ್ವಜನಿಕರು ಧಾವಿಸಿ ಗಾಯಾಳುಗಳನ್ನು ರಕ್ಷಣೆ ಮಾಡಿ ಸಮೀಪದ ಆಸ್ಪತ್ರೆಗೆ ಸಾಗಿಸಿದ್ದಾರೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.