ಕಳುವಾದ ಚಿನ್ನದ ಸರ ವಶಪಡಿಸಿಕೊಂಡ ಮಂಕಿ ಪೊಲೀಸರು
ಮಂಕಿ: ವೃದ್ಧೆಯೊಬ್ಬರ ಕುತ್ತಿಗೆಯಿಂದ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಆರೋಪಿಗಳನ್ನು ಕೇವಲ 24 ಗಂಟೆಯೊಳಗೆ ಬಂಧಿಸುವಲ್ಲಿ ಮಂಕಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೇ 8ರಂದು ಪಿರ್ಯಾದಿದಾರರು ತಮ್ಮ ತಾಯಿಯೊಂದಿಗೆ ನೆಲವಂಕಿಯ ಸಂಬಂಧಿಕರ ಮನೆಗೆ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳಿ ವಾಪಸ್ಸಾಗುತ್ತಿದ್ದರು. ಈ ವೇಳೆ ಗುಣವಂತೆ ಕಡೆಗೆ ಹೋಗುವ ಕಾಲುದಾರಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಹಿಂದಿನಿಂದ ಬಂದು ವೃದ್ಧೆಯ ಕುತ್ತಿಗೆಯಲ್ಲಿದ್ದ ಸುಮಾರು 15 ಗ್ರಾಂ ತೂಕದ, 1.20 ಲಕ್ಷ ರೂ ಮೌಲ್ಯದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದ.
ಈ ಕುರಿತು ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಶೇಷ ತಂಡ ರಚಿಸಿ ತನಿಖೆ ಕೈಗೊಂಡಿದ್ದರು.
ಕಾರ್ಯಾಚರಣೆ ವೇಳೆ ಗುಣವಂತೆಯ ಬೆಳಗೊಡ ನಿವಾಸಿ ನಾಗರಾಜ ಮಂಜು ಗೌಡ (36) ಹಾಗೂ ಮತ್ತೋರ್ವ ಆರೋಪಿಯನ್ನು ಹೊನ್ನಾವರದ ಕಾಸರಕೋಡ ಸಮೀಪ ಬಂಧಿಸಲಾಗಿದೆ.
ಆರೋಪಿಗಳಿಂದ ಕಳವು ಮಾಡಿದ್ದ 1.20 ಲಕ್ಷ ರೂ ಮೌಲ್ಯದ 15 ಗ್ರಾಂ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ್ದ KA-47 U-7953 ಸಂಖ್ಯೆಯ ಪಲ್ಸರ್ ಬೈಕ್ ವಶಪಡಿಸಿಕೊಳ್ಳಲಾಗಿದ್ದು, ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಈ ಕಾರ್ಯಾಚರಣೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್. ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ., ಭಟ್ಕಳ ಉಪವಿಭಾಗದ ಡಿವೈಎಸ್ಪಿ ಗಿರೀಶ್ ಬಿ. ಅವರ ಮಾರ್ಗದರ್ಶನದಲ್ಲಿ ನಡೆದಿದ್ದು, ಮುರ್ಡೇಶ್ವರ ವೃತ್ತ ನಿರೀಕ್ಷಕ ಜಗದೀಶ ಹಂಚಿನಾಳ, ಮಂಕಿ ಠಾಣೆ ಪಿಎಸ್ಐ ಕುಮಾರ ಕಾಂಬಳೆ, ಪಿಎಸ್ಐ ಅಭಿನಂದನ್ ಎಂ.ಎಸ್. ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಹಿರಿಯ ಅಧಿಕಾರಿಗಳು ಪ್ರಶಂಸಿಸಿದ್ದಾರೆ.