ಕಾರವಾರ: ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಲ್ಲಿ ಗುಡ್ಡ ಕುಸಿತ ಮತ್ತು ನೆರೆಯಿಂದ ಯಾವುದೇ ಅನಾಹುತಗಳಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಈ ಅವಧಿಯಲ್ಲಿ ಕಂಡುಬರುವ ಸಮಸ್ಯೆಗಳನ್ನು ಎದುರಿಸಲು ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು.
ಅವರು ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಳೆಗಾಲದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಎಲ್ಲಾ ತಹಶೀಲ್ದಾರ ಕಚೇರಿಗಳಲ್ಲಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಕಚೇರಿಗಳಲ್ಲಿ 24*7 ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ತೆರೆಯುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಜಿಲ್ಲಾಧಿಕಾರಿ ಕಚೇರಿಯಲ್ಲಿನ ಜಿಲ್ಲಾ ತುರ್ತು ಕಾರ್ಯಚರಣೆ ಕೇಂದ್ರದಲ್ಲಿ ಪೊಲೀಸ್, ಅಗ್ನಿಶಾಮಕ, ಅರಣ್ಯ, ಹೆಸ್ಕಾಂ, ಬಿ.ಎಸ್.ಎನ್.ಎಲ್ ಕಚೇರಿಯ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸುವಂತೆ ತಿಳಿಸಿದರು.
ಶಿರೂರುನಲ್ಲಿ ಕೈಗೊಂಡಿರುವ ಕಾಮಗಾರಿಯನ್ನು ಈ ತಿಂಗಳ ಅಂತ್ಯದಲ್ಲಿ ಮುಕ್ತಾಯಗೊಳಿಸಲಾಗುವುದು. ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಮಳೆ ನೀರು ನಿಲ್ಲದಂತೆ ಡ್ರಜ್ಜಿಂಗ್ ಕೈಗೊಳ್ಳಲಾಗುವುದು. ಅಪಾಯಕಾರಿ ಸ್ಥಳಗಳಲ್ಲಿ ನೋ ಪಾರ್ಕಿಂಗ್ ಝೋನ್ ಮಾಡಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದರು.
ನೌಕಾನೆಲೆ ವ್ಯಾಪ್ತಿಯ ಪ್ರದೇಶಗಳಲ್ಲಿನ ಗ್ರಾಮಗಳಲ್ಲಿ ಈಗಾಗಲೇ ಕೈಗೊಂಡಿರುವ ಕಾಮಗಾರಿಯನ್ನು ಮುಕ್ತಾಯಗೊಳಿಸುವಂತೆ ಮತ್ತು ಮಳೆ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಮಾಡುವಂತೆ ಸೂಚಿಸಿದರು.
ಜಿಲ್ಲೆಯ ಶಾಲೆ, ಅಂಗನವಾಡಿ, ಕಾಲೇಜುಗಳ ವ್ಯಾಪ್ತಿಯಲ್ಲಿನ ಅಪಾಯಕಾರಿ ಮರಗಳು, ವಿದ್ಯುತ್ ತಂತಿಗಳನ್ನು ತೆರವುಗೊಳಿಸುವ ಕುರಿತಂತೆ ಮತ್ತು ಶಿಥಿಲ ಕಟ್ಟಡಗಳಿದ್ದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ ಅವರು, ಸುರಕ್ಷತೆ ಕುರಿತಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ವರದಿ ನೀಡಬೇಕು. ಈ ಪ್ರದೇಶಗಳಲ್ಲಿ ಯಾವುದೇ ಅವಘಢಗಳು ಸಂಭವಿಸಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.
ಹೆಸ್ಕಾಂ ವತಿಯಿಂದ ವಿದ್ಯುತ್ ಸಂಪರ್ಕ ಕಡಿತವಾದಲ್ಲಿ ತುರ್ತು ಮರು ಸಂಪರ್ಕಕ್ಕೆ ಅಗತ್ಯವಿರುವ ಉಪಕರಣಗಳು, ವಾಹನಗಳು ಮತ್ತು ಸಿಬ್ಬಂದಿಗಳನ್ನು ಸಿದ್ಧವಾಗಿಟ್ಟುಕೊಂಡಿರಬೇಕು. ತುರ್ತು ಸಂದರ್ಭದಲ್ಲಿ ಜಿಲ್ಲಾ ಕಂಟ್ರೋಲ್ ರೂಂಗೆ ತಕ್ಷಣ ಮಾಹಿತಿ ನೀಡಬೇಕು. ತುರ್ತು ಸಂದರ್ಭದಲ್ಲಿ ಎಲ್ಲಾ ರಕ್ಷಣಾ ಉಪಕರಣಗಳು ಮತ್ತು ಸಂಪನ್ಮೂಲಗಳು ನೆರವಿಗೆ ದೊರೆಯುವಂತೆ ಸಿದ್ಧತೆ ನಡೆಯಬೇಕು ಎಂದರು.
ಜಿಲ್ಲೆಯಲ್ಲಿ ಈಗಾಗಲೇ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಅಪಾಯಕಾರಿಯಾಗಿ ಕಂಡುಬAದಿರುವ 1,780 ಮರಗಳನ್ನು ಗುರುತಿಸಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ವರದಿ ನೀಡಿದ್ದು, ಅರಣ್ಯ ಇಲಾಖೆ ವತಿಯಿಂದ ಈ ಮರಗಳನ್ನು ಪರಿಶೀಲಿಸಿ, ಶೀಘ್ರದಲ್ಲಿ ಅವುಗಳನ್ನು ತೆರವುಗೊಳಿಸುವ ಅಥವಾ ಕೊಂಬೆಗಳನ್ನು ಕತ್ತರಿಸುವ ಕಾರ್ಯವನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಜಿಲ್ಲೆಯ ಸಾರ್ವಜನಿಕರು ಯಾವುದೇ ವಿಪತ್ತು ಸಂದರ್ಭದಲ್ಲಿ, ಜಿಲ್ಲಾಧಿಕಾರಿ ಕಚೇರಿಯಲ್ಲಿ ತೆರೆದಿರುವ ತುರ್ತು ಕಾರ್ಯಚರಣೆ ಕೇಂದ್ರದ ಸಹಾಯವಾಣಿ ಸಂಖ್ಯೆ 94835 11015ನ್ನು 24*7 ಸಂಪರ್ಕಿಸಿ ಅಗತ್ಯ ನೆರವು ಪಡೆಯಬಹುದು ಎಂದು ತಿಳಿಸಿದರು.
ಸಭೆಯಲ್ಲಿ ಉಪ ವಿಭಾಗಾಧಿಕಾರಿ ಶ್ರವಣ ಕುಮಾರ್, ಜಿ.ಪಂ. ಉಪ ಕಾರ್ಯದರ್ಶಿ ಅಲ್ಲಾ ಭಕ್ಷ್, ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ವರ್ಚುವಲ್ ಮೂಲಕ ಜಿ.ಪಂ. ಸಿಇಓ ಡಾ. ದಿಲೀಷ್ ಶಶಿ, ಜಿಲ್ಲೆಯ ಎಲ್ಲಾ ತಹಶೀಲ್ದಾರರು, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗಳು, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಪ್ರಸ್ತುತ ಜಿಲ್ಲೆಯಲ್ಲಿರುವ ಮಳೆ ಮಾಪನ ಯಂತ್ರಗಳ ದುರಸ್ತಿ/ ಬದಲಾವಣೆ /ಸ್ಥಳಾಂತರ ಕಾರ್ಯವನ್ನು ಕೈಗೊಳ್ಳುವ ಕುರಿತಂತೆ ರಾಜ್ಯ ಮಟ್ಟದಲ್ಲಿ ಈಗಾಗಲೇ ಟೆಂಡರ್ ಆಗಿದ್ದು, ಜಿಲ್ಲೆಗೆ ಹಂಚಿಕೆಯಾಗಿರುವ ಏಜೆನ್ಸಿಗಳೊಂದಿಗೆ ಸಮನ್ವಯ ಸಾಧಿಸಿ, ಎಲ್ಲಾ ಮಳೆ ಮಾಪನ ಯಂತ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದು ಎಲ್ಲಾ ತಹಶೀಲ್ದಾರ್‌ಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.