ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಗಾಂಜಾ ಸೇವನೆ ವಿರುದ್ಧ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು, ದಾಂಡೇಲಿ, ರಾಮನಗರ ಹಾಗೂ ಗೋಕರ್ಣ ಭಾಗಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದ ಮೇಲೆ ಆರೋಪಿತರನ್ನು ಪೊಲೀಸರು ವಶಕ್ಕೆ ಪಡೆದು ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ದಾಂಡೇಲಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಮೊದಲ ಪ್ರಕರಣದಲ್ಲಿ ಗಾಂಧಿನಗರದ 19 ವರ್ಷದ ಪವನ್ ಗೌಂಡರ ಎಂಬಾತನು ರೈಲು ನಿಲ್ದಾಣದ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
ಆತನಿಂದ ಅರ್ಧ ಸೇದಿದ ಸಿಗರೇಟ್ ಹಾಗೂ ಕಡ್ಡಿಪಟ್ಟಿಯನ್ನು ವಶಪಡಿಸಿಕೊಳ್ಳಲಾಗಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ದೃಢಪಟ್ಟ ಹಿನ್ನೆಲೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಗಾಂಧಿನಗರದ ಚಂದ್ರಕಾಂತ ನಾಯ್ಕೋಡಿ ಎಂಬಾತ ಸುದರ್ಶನ ನಗರ ರೈಲು ಹಳಿ ಸಮೀಪ ಗಾಂಜಾ ಸೇವನೆ ಮಾಡುತ್ತಿದ್ದ ವೇಳೆ ಪೊಲೀಸರ ಕೈಗೆ ಸಿಕ್ಕಿದ್ದಾನೆ. ವೈದ್ಯಕೀಯ ಪರೀಕ್ಷೆಯ ಬಳಿಕ ಆತನ ಮೇಲೂ ಪ್ರಕರಣ ದಾಖಲಾಗಿದೆ.
ಇದೇ ವೇಳೆ ಜೋಯಿಡಾ ತಾಲೂಕಿನ ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಣೇಶಗುಡಿ ಕ್ಯಾಂಪ್-1 ಬಸ್ ನಿಲ್ದಾಣದ ಬಳಿ ಐವರು ರಾಪ್ಟಿಂಗ್ ಗೈಡ್ಗಳು ಗಾಂಜಾ ಸೇವನೆ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ಉತ್ತರಾಖಂಡ ಮೂಲದ ಮೂವರು ಸೇರಿದಂತೆ ದಾಂಡೇಲಿ ಹಾಗೂ ಯಲ್ಲಾಪುರ ಮೂಲದ ಆರೋಪಿಗಳು ಸಾರ್ವಜನಿಕ ಸ್ಥಳದಲ್ಲೇ ಅಮಲಿನಲ್ಲಿ ಇದ್ದರು ಎನ್ನಲಾಗಿದೆ. ಸ್ಥಳದಿಂದ ಅರ್ಧ ಸೇದಿದ ಬೀಡಿ ಹಾಗೂ ಸಿಗರೇಟ್ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯ ಬಂಗ್ಲೇಗುಡ್ಡ ಭಾಗದಲ್ಲಿಯೂ ಗಾಂಜಾ ಸೇವನೆ ಪ್ರಕರಣ ಬೆಳಕಿಗೆ ಬಂದಿದೆ. ಚಿಕ್ಕಮಗಳೂರು ಮೂಲದ ಯುವಕನೊಬ್ಬ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಪರೀಕ್ಷೆಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಆತನ ವಿರುದ್ಧವೂ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ಪ್ರವಾಸಿ ತಾಣಗಳು, ರೈಲು ನಿಲ್ದಾಣಗಳ ಸುತ್ತಮುತ್ತ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಸೇವನೆ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಯುವಕರು ಮಾದಕ ವ್ಯಸನದ ಕಡೆ ಆಕರ್ಷಿತರಾಗುತ್ತಿರುವುದು ಸಮಾಜಕ್ಕೆ ಅಪಾಯಕಾರಿ ಬೆಳವಣಿಗೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.