ಕಾರವಾರ: ಮಳೆಗಾಲದಲ್ಲಿ ಸಂಭವಿಸಬಹುದಾದ ನೆರೆ, ಗುಡ್ಡ ಕುಸಿತ ಸೇರಿದಂತೆ ವಿವಿಧ ಪ್ರಾಕೃತಿಕ ವಿಕೋಪಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಜಿಲ್ಲೆಯ ಎಲ್ಲಾ ಇಲಾಖೆಗಳು ಈಗಿನಿಂದಲೇ ಸನ್ನದ್ಧರಾಗಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಳೆಗಾಲದ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿ ಹಾಗೂ ಸೀಬರ್ಡ್ ನೌಕಾನೆಲೆ ಸುತ್ತಮುತ್ತ ನೆರೆ ಪರಿಸ್ಥಿತಿ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಮಳೆ ನೀರು ಸರಾಗವಾಗಿ ಹರಿದುಹೋಗುವ ವ್ಯವಸ್ಥೆ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ನೆರೆ ಹಾಗೂ ಗುಡ್ಡ ಕುಸಿತ ಸಂಭವಿಸುವ ಪ್ರದೇಶಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಅಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ ಪಕ್ಕದ ಗುಡ್ಡ ಕುಸಿತ ಅಪಾಯವಿರುವ ಪ್ರದೇಶಗಳಲ್ಲಿ ಅತಿಕ್ರಮಣ ಮಾಡಿ ನಿರ್ಮಿಸಿರುವ ಮಳಿಗೆಗಳನ್ನು ತೆರವುಗೊಳಿಸುವಂತೆ ಉಪವಿಭಾಗಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅಲ್ಲದೇ, ಅಪಾಯದ ಪ್ರದೇಶಗಳಲ್ಲಿ ವಾಹನ ನಿಲುಗಡೆ ನಿಷೇಧಿಸಿ ಎಚ್ಚರಿಕೆ ಫಲಕಗಳನ್ನು ಅಳವಡಿಸಲು ಸೂಚಿಸಿದರು.
ಮಳೆಗಾಲದಲ್ಲಿ ವಿದ್ಯುತ್ ವ್ಯತ್ಯಯದ ಸಮಸ್ಯೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಹೆಸ್ಕಾಂ ಅಧಿಕಾರಿಗಳು 24×7 ಕಾರ್ಯನಿರ್ವಹಿಸಿ ತುರ್ತು ಪರಿಸ್ಥಿತಿಗಳಿಗೆ ಸ್ಪಂದಿಸಬೇಕು. ಜಿಲ್ಲಾ ವಿಪತ್ತು ನಿರ್ವಹಣಾ ನಿಯಂತ್ರಣ ಕೊಠಡಿಗೆ ಹೆಸ್ಕಾಂ ಸಿಬ್ಬಂದಿಯನ್ನು ನಿಯೋಜಿಸುವಂತೆಯೂ ಸೂಚಿಸಿದರು.
ಅಂಗನವಾಡಿ, ಶಾಲೆ, ವಿದ್ಯಾರ್ಥಿನಿಲಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸುತ್ತಮುತ್ತ ಅಪಾಯಕಾರಿ ಮರಗಳನ್ನು ತೆರವುಗೊಳಿಸಿ, ವಿದ್ಯುತ್ ಕಂಬ, ತಂತಿ ಹಾಗೂ ಕಾಂಪೌಂಡ್ಗಳ ಸುರಕ್ಷತೆ ಕುರಿತು ಪರಿಶೀಲನೆ ನಡೆಸಬೇಕು. ಈ ಬಗ್ಗೆ ಪಿಡಿಒಗಳು ಸಂಬಂಧಿತ ಅಧಿಕಾರಿಗಳಿಂದ ಮಾಹಿತಿ ಪಡೆದು ವರದಿ ಸಲ್ಲಿಸಬೇಕು ಎಂದರು.
ಮಾನ್ಸೂನ್ ಆರಂಭದ ಹಿನ್ನೆಲೆಯಲ್ಲಿ ಪ್ರಕೃತಿ ವಿಕೋಪ ಸಂಭವಿಸುವ ಪ್ರದೇಶಗಳಲ್ಲಿ ಸ್ಥಳೀಯ ಸ್ಪಾಟರ್ಗಳ ಪಟ್ಟಿಯನ್ನು ಸಿದ್ಧಪಡಿಸಿ ಅವರಿಗೆ ಸೂಕ್ತ ತರಬೇತಿ ನೀಡಬೇಕು. ಸಂತ್ರಸ್ತರಿಗಾಗಿ ಕಾಳಜಿ ಕೇಂದ್ರಗಳನ್ನು ತೆರೆಯಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಪಿಡಿಒಗಳು, ತಹಶೀಲ್ದಾರರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಕಾಳಜಿ ಕೇಂದ್ರಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ಸೀಬರ್ಡ್ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.