ಶಿರಸಿ: ಶಿರಸಿ–ಸಿದ್ದಾಪುರ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಅಕ್ರಮ ಸಾರಾಯಿ, ಗಾಂಜಾ ಹಾಗೂ ಡ್ರಗ್ಸ್ ಹಾವಳಿ ಹೆಚ್ಚಾಗುತ್ತಿದ್ದು, ಇದರಿಂದ ರೈತರು, ಕೂಲಿ ಕಾರ್ಮಿಕರು, ಬಡ ಕುಟುಂಬಗಳ ಜನರು ಹಾಗೂ ವಿದ್ಯಾರ್ಥಿಗಳು ಬಲಿಯಾಗುತ್ತಿರುವ ಹಿನ್ನೆಲೆಯಲ್ಲಿ ಇವುಗಳನ್ನು ತಕ್ಷಣ ನಿಯಂತ್ರಿಸುವಂತೆ ಆಗ್ರಹಿಸಿ ಜೂನ್ 16ರಂದು ಶಿರಸಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅನಂತ ಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅನಂತ ಮೂರ್ತಿ ಹೆಗಡೆ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕ್ಷೇತ್ರದ ಬಹುತೇಕ ಹಳ್ಳಿಗಳಲ್ಲಿ ಅಕ್ರಮ ಸಾರಾಯಿ ಸೇವನೆಯಿಂದ ಅನೇಕರು ಆರೋಗ್ಯ ಹಾನಿಗೊಳಗಾಗಿದ್ದು, ಕಿಡ್ನಿ ಮತ್ತು ಲಿವರ್ ಸಂಬಂಧಿತ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಹಲವಾರು ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆಗಳೂ ನಡೆದಿವೆ ಎಂದು ಆರೋಪಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಗಾಂಜಾ ಹಾಗೂ ಡ್ರಗ್ಸ್ ಬಳಕೆ ಕೂಡ ಹೆಚ್ಚಾಗುತ್ತಿದ್ದು, ಅದರ ಕುರಿತು ಆಗಾಗ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗುತ್ತಿವೆ. ಆದರೆ ಯುವಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಈ ಮಾದಕ ವಸ್ತುಗಳನ್ನು ಪೂರೈಸುತ್ತಿರುವ ಜಾಲವನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕಾಗಿದೆ ಎಂದು ಒತ್ತಾಯಿಸಿದ್ದಾರೆ.
ತಾಲೂಕಿನ ಅನೇಕ ಶಾಲೆ ಹಾಗೂ ಕಾಲೇಜುಗಳ ಸುತ್ತಮುತ್ತ ಗಾಂಜಾ ಮತ್ತು ಡ್ರಗ್ಸ್ ಹಾವಳಿ ಹೆಚ್ಚುತ್ತಿರುವುದು ಪಾಲಕರಲ್ಲಿ ಆತಂಕ ಮೂಡಿಸಿದೆ. ಕಳೆದ ಎರಡು ವರ್ಷಗಳಿಂದ ಹೆಚ್ಚುತ್ತಿರುವ ಇಂತಹ ಅನೈತಿಕ ಚಟುವಟಿಕೆಗಳನ್ನು ತಕ್ಷಣ ನಿಲ್ಲಿಸುವಂತೆ ಆಗ್ರಹಿಸಿ, ಅನಂತ ಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್, ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಜೂನ್ 16ರಂದು ಬೆಳಿಗ್ಗೆ 11 ಗಂಟೆಗೆ ಶಿರಸಿ ಸಹಾಯಕ ಆಯುಕ್ತರ ಕಚೇರಿ ಎದುರು ಪ್ರತಿಭಟನೆ ನಡೆಸಿ, ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.