ಹಳಿಯಾಳ: ಸಾರ್ವಜನಿಕರಿಗೆ ತೊಂದರೆ ನೀಡಿ ಹಲ್ಲೆ ನಡೆಸಿದ ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಹಳಿಯಾಳ ಪೊಲೀಸ್ ಠಾಣೆಯ ರೌಡಿಶೀಟರ್ ಮಂಜುನಾಥ ಅಲಿಯಾಸ್ ‘ಮಚ್ ಮಂಜ’ನನ್ನು ಪೊಲೀಸರು ಬಂಧಿಸಿದ್ದಾರೆ.
ನಿರ್ಲಗಾ ಗ್ರಾಮದ ನಿವಾಸಿಯಾಗಿರುವ ಮಂಜುನಾಥ @ ಮಚ್ಚಾ ಮಂಜಾ ಸುಬ್ರಾಯ ಬೆಕಾನಿ ವಿರುದ್ಧ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು. ಸಾರ್ವಜನಿಕರಿಗೆ ಉಪದ್ರವ ನೀಡಿ ಹೊಡೆದಾಟ ನಡೆಸಿದ ಹಾಗೂ ಪೊಲೀಸರಿಗೆ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ಆರೋಪಗಳು ಆತನ ವಿರುದ್ಧ ಕೇಳಿಬಂದಿದ್ದವು.
ಆರೋಪಿಯ ಬಂಧನಕ್ಕಾಗಿ ಮೇಲಾಧಿಕಾರಿಗಳ ನಿರ್ದೇಶನದಂತೆ ಎರಡು ವಿಶೇಷ ತನಿಖಾ ತಂಡಗಳನ್ನು ರಚಿಸಿ ನಿರಂತರ ಕಾರ್ಯಾಚರಣೆ ನಡೆಸಲಾಯಿತು. ತಾಂತ್ರಿಕ ಮಾಹಿತಿ ಹಾಗೂ ಖಚಿತ ಸುಳಿವಿನ ಆಧಾರದ ಮೇಲೆ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ತಾಸಗಾಂ ಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದರು.
ಬಳಿಕ ಆರೋಪಿಯನ್ನು ಹಳಿಯಾಳಕ್ಕೆ ಕರೆತಂದು ವಿಚಾರಣೆಗೆ ಒಳಪಡಿಸಿ, ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಸಮಾಜದ ಶಾಂತಿ-ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಹಾಗೂ ಸಾರ್ವಜನಿಕರಿಗೆ ಉಪದ್ರವ ನೀಡುವ ರೌಡಿಶೀಟರ್ಗಳ ವಿರುದ್ಧ ಮುಂದೆಯೂ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.