ಮುಂಡಗೋಡ: ಲಂಚ ಸ್ವೀಕರಿಸುತ್ತಿದ್ದ ವೇಳೆ ಹೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಧರ್ಮರಾಜ ಬೆಡಸಗಾಂವ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ಬಂಧಿಸಿರುವ ಘಟನೆ ಮುಂಡಗೋಡದಲ್ಲಿ ನಡೆದಿದೆ.
ವಿದ್ಯುತ್ ಗುತ್ತಿಗೆದಾರ ಶಿವಯೋಗಿ ಕೂಡಲಮಠ ನೀಡಿದ ದೂರಿನ ಆಧಾರದ ಮೇಲೆ ಕಾರವಾರ ಮತ್ತು ಧಾರವಾಡ ಲೋಕಾಯುಕ್ತ ಘಟಕಗಳ ಎರಡು ತಂಡಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿವೆ.
ಮಾಹಿತಿಯ ಪ್ರಕಾರ, ಬಿಸಿಎಂ ವಸತಿ ನಿಲಯದ ವಿದ್ಯುತ್ ಕಾಮಗಾರಿ ಸೇರಿದಂತೆ ಇತರ ಕಾಮಗಾರಿಗಳಿಗೆ ಸಂಬಂಧಿಸಿದ ಬಾಕಿ ಪ್ರಕ್ರಿಯೆ ಪೂರ್ಣಗೊಳಿಸಲು ಧರ್ಮರಾಜ ಬೆಡಸಗಾಂವ್ ಅವರು ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ದೂರುದಾರರಿಂದ ಮುಂಗಡವಾಗಿ ₹65 ಸಾವಿರ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ಮುಂಡಗೋಡಿನ ಹೆಸ್ಕಾಂ ಕಚೇರಿಯಲ್ಲೇ ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ.
ಘಟನೆ ಬಳಿಕ ಹೆಸ್ಕಾಂ ಕಚೇರಿಯಲ್ಲಿ ಕೆಲಕಾಲ ಪರಿಶೀಲನೆ ನಡೆಸಿದ ಅಧಿಕಾರಿಗಳು ಅಗತ್ಯ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರೆದಿದ್ದು, ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.