ಮುಂಡಗೋಡ: ತಾಲೂಕಿನ ಜೋಗೇಶ್ವರ ಹಳ್ಳದ ಗೌಳಿ ದಡ್ಡಿಯಲ್ಲಿ ವಿದ್ಯುತ್ ಪ್ರವಹಿಸುತ್ತಿದ್ದ ತಂತಿ ತಾಗಿ 26 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತರನ್ನು ಗ್ರಾಮದ ನಿವಾಸಿ ಜಾನು ಕೊಕರೆ (26) ಎಂದು ಗುರುತಿಸಲಾಗಿದೆ.
ಸೋಮವಾರ ನಡೆಯಲಿದ್ದ ಹುಣ್ಣಿಮೆ ಪೂಜೆಗೆ ಹೂವು ಸಂಗ್ರಹಿಸಲು ಗ್ರಾಮದ ಕಿರಿಯ ಪ್ರಾಥಮಿಕ ಶಾಲೆ ಸಮೀಪಕ್ಕೆ ತೆರಳಿದ್ದ ಜಾನು ಅವರು, ವಿದ್ಯುತ್ ಹರಿದಿದ್ದ ತಂತಿಯ ಸಂಪರ್ಕಕ್ಕೆ ಬಂದ ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಧಾವಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಘಟನೆಯ ಬಳಿಕ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಶಾಲೆಯ ಸಮೀಪದ ವಿದ್ಯುತ್ ಪರಿವರ್ತಕ (ಟಿಸಿ) ಬಳಿ ತಂತಿ ಬೇಲಿಗೆ ತಾಗಿರುವುದರಿಂದ ಸಾರ್ವಜನಿಕರ ಸುರಕ್ಷತೆಗೆ ಗಂಭೀರ ಅಪಾಯ ಎದುರಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ವಿಶೇಷವಾಗಿ ಶಾಲಾ ಮಕ್ಕಳ ಓಡಾಟ ಹೆಚ್ಚಿರುವ ಪ್ರದೇಶದಲ್ಲೇ ಈ ರೀತಿಯ ಅಪಾಯಕಾರಿ ಸ್ಥಿತಿ ಇರುವುದು ಕಳವಳಕ್ಕೆ ಕಾರಣವಾಗಿದೆ. ಶಾಲಾ ಸಮಯದಲ್ಲಿ ಇದೇ ಘಟನೆ ಸಂಭವಿಸಿದ್ದರೆ ಮತ್ತಷ್ಟು ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ವಿದ್ಯುತ್ ಇಲಾಖೆ ತಕ್ಷಣ ಸ್ಥಳ ಪರಿಶೀಲನೆ ನಡೆಸಿ ಅಪಾಯಕಾರಿ ತಂತಿಗಳನ್ನು ದುರಸ್ತಿಗೊಳಿಸಿ, ಇಂತಹ ದುರ್ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.