Friday, July 24, 2026
Join WhatsApp Group
HomeLocal Newsಓವರ್‌ಲೋಡ್ ವಾಹನಗಳ ವಿರುದ್ಧ ಕಠಿಣ ಕ್ರಮ

ಓವರ್‌ಲೋಡ್ ವಾಹನಗಳ ವಿರುದ್ಧ ಕಠಿಣ ಕ್ರಮ

ಸಾರಿಗೆ ಅಧಿಕಾರಿಗಳಿಗೆ ಡಿಸಿ ಖಡಕ್ ಸೂಚನೆ

ಕಾರವಾರ: ಜಿಲ್ಲೆಯಲ್ಲಿ ಓವರ್‌ಲೋಡ್ ಸರಕು ಸಾಗಣೆ ವಾಹನಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡು, ನಿಗದಿತ ಮಿತಿಗಿಂತ ಹೆಚ್ಚು ಸರಕು ಸಾಗಿಸುತ್ತಿರುವ ವಾಹನಗಳ ವಿರುದ್ಧ ಕೂಡಲೇ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

 ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಒಂದೇ ರಸ್ತೆಯಲ್ಲಿ ತಪಾಸಣೆ ನಡೆಸುವ ಬದಲು ಜಿಲ್ಲೆಯ ಎಲ್ಲಾ ಪ್ರಮುಖ ರಸ್ತೆಗಳಲ್ಲಿ ನಿಯಮಿತವಾಗಿ ವಾಹನಗಳ ತಪಾಸಣೆ ನಡೆಸುವಂತೆ ಸೂಚಿಸಿದರು.

ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಕರ ಲಗೇಜ್‌ ಹೊರತುಪಡಿಸಿ ಇತರೆ ಸರಕು ಸಾಗಾಣಿಕೆ ನಡೆಯುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು. ದೂರದ ಮಾರ್ಗಗಳಲ್ಲಿ ಸಂಚರಿಸುವ ಬಸ್‌ಗಳಲ್ಲಿ ಇಬ್ಬರು ಚಾಲಕರಿರುವುದನ್ನು ಖಚಿತಪಡಿಸಿಕೊಳ್ಳುವಂತೆ ನಿರ್ದೇಶನ ನೀಡಿದರು.

ಕಾರವಾರದ ಫ್ಲೈಓವರ್ ಕೆಳಭಾಗದಲ್ಲಿ ಅಂಗಡಿಗಳು ಹಾಗೂ ಜನವಸತಿ ಇರುವ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ಎನ್‌ಎಚ್‌ಎಐ ಮಾರ್ಗಸೂಚಿಯಂತೆ ಫ್ಲೈಓವರ್ ಕೆಳಭಾಗದಲ್ಲಿ ಅಗತ್ಯ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಸೂಚಿಸಿದರು.

ಇತ್ತೀಚೆಗೆ ಕುಮಟಾ ಭಾಗದಲ್ಲಿ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಗತ್ಯವಿರುವ ಸ್ಥಳಗಳಲ್ಲಿ ಬೀದಿದೀಪ, ರಸ್ತೆ ಲೈನ್ ಮಾರ್ಕಿಂಗ್, ಕ್ಯಾಟ್‌ ಐ ಅಳವಡಿಕೆ ಸೇರಿದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು. ಹೆದ್ದಾರಿ ಬದಿಯ ಗುಡ್ಡಗಳಿಂದ ಜಲಪಾತದಂತೆ ನೀರು ಬೀಳುವ ಸ್ಥಳಗಳಲ್ಲಿ ವಾಹನ ನಿಲ್ಲಿಸಿ ಫೋಟೋ ತೆಗೆಯುವ ಪ್ರವೃತ್ತಿಯಿಂದ ಅಪಘಾತ ಸಂಭವಿಸುವ ಸಾಧ್ಯತೆ ಇರುವುದರಿಂದ ಅಂತಹ ಪ್ರದೇಶಗಳಲ್ಲಿ ಎಚ್ಚರಿಕೆ ಫಲಕ, ಪಾರ್ಕಿಂಗ್ ವ್ಯವಸ್ಥೆ ಹಾಗೂ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ಘಟ್ಟ ಪ್ರದೇಶದಿಂದ ಬರುವ ಚಾಲಕರಿಗೆ ಮುಂದಿನ ತಿರುವುಗಳ ಮಾಹಿತಿ ತಿಳಿಯದ ಕಾರಣ ಅಪಘಾತಗಳು ಸಂಭವಿಸುತ್ತಿವೆ. ಹೀಗಾಗಿ ಇಳಿಜಾರು ಆರಂಭವಾಗುವ ಸ್ಥಳದಿಂದಲೇ ಮುಂದಿನ ತಿರುವುಗಳ ಸಂಖ್ಯೆಯನ್ನು ಸೂಚಿಸುವ ಫಲಕಗಳನ್ನು ಅಳವಡಿಸಬೇಕು. ಜೊತೆಗೆ ಎಲ್ಲಾ ಸೇತುವೆಗಳ ಬಳಿ ಸೂಚನಾ ಫಲಕ ಹಾಗೂ ರಾತ್ರಿ ವೇಳೆ ಸ್ಪಷ್ಟವಾಗಿ ಗೋಚರಿಸುವ ವ್ಯವಸ್ಥೆ ಕಲ್ಪಿಸುವಂತೆ ನಿರ್ದೇಶನ ನೀಡಿದರು.

ಪೊಲೀಸ್ ಇಲಾಖೆಯ ಸಲಹೆಯಂತೆ ಅಗತ್ಯವಿರುವ ಸ್ಥಳಗಳಲ್ಲಿ ಎಎನ್‌ಪಿಆರ್ ಕ್ಯಾಮೆರಾಗಳನ್ನು ಅಳವಡಿಸುವುದು, ಅಪಘಾತ ಹೆಚ್ಚಾಗುವ ‘ಬ್ಲ್ಯಾಕ್ ಸ್ಪಾಟ್’ ಪ್ರದೇಶಗಳಲ್ಲಿ ಹೆಚ್ಚುವರಿ ಸುರಕ್ಷತಾ ಕ್ರಮ, ವೇಗಮಿತಿ ಸೂಚನಾ ಫಲಕ ಹಾಗೂ ಬ್ಯಾರಿಕೇಡ್‌ಗಳನ್ನು ಅಳವಡಿಸುವಂತೆ ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಲೀಪ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಉಪ ವಿಭಾಗಾಧಿಕಾರಿ ಶ್ರವಣಕುಮಾರ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share