ಭಟ್ಕಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಉತ್ತರ ಕನ್ನಡ ಜಿಲ್ಲೆಯ ಮಂಕಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ (ಪಿಎಸ್ಐ) ಅಭಿನಂದನ್ ಗೌಡ ಅವರನ್ನು ಭಟ್ಕಳ ನಗರ ಠಾಣೆ ಪೊಲೀಸರು ಬಂಧಿಸಿರುವ ಬಗ್ಗೆ ಸುದ್ದಿಯಾಗುತ್ತಿದೆ.
ಮೂಲಗಳ ಪ್ರಕಾರ, ಯಲ್ಲಾಪುರ ಮೂಲದ 16 ವರ್ಷದ ಅಪ್ರಾಪ್ತ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಸೇರಿದಂತೆ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿದೆ.
ದೂರಿನಲ್ಲಿ, ಆರೋಪಿ ಪಿಎಸ್ಐ ಅಭಿನಂದನ್ ಗೌಡ ಬಾಲಕಿಯನ್ನು ಪುಸಲಾಯಿಸಿ ಭಟ್ಕಳದ ವಸತಿ ಗೃಹವೊಂದಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಮಾಡಲಾಗಿದೆ.
ಪ್ರಕರಣ ದಾಖಲಿಸಿಕೊಂಡ ಭಟ್ಕಳ ನಗರ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ರಾಮನಗರ ಜಿಲ್ಲೆಯ ಕನಕಪುರ ಮೂಲದವರಾದ ಅಭಿನಂದನ್ ಗೌಡ ಅವರು ಕೆಲವೇ ತಿಂಗಳುಗಳ ಹಿಂದೆ ಮಂಕಿ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಆರೋಪಗಳ ಸತ್ಯಾಸತ್ಯತೆ ತನಿಖೆಯ ಬಳಿಕವೇ ಸ್ಪಷ್ಟವಾಗಬೇಕಿದ್ದು, ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗಿದೆ.