ಯಲ್ಲಾಪುರ: ಯಲ್ಲಾಪುರ ತಾಲೂಕಿನ ಆರತಿಬೈಲ್ ಸಮೀಪ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ಗುರುವಾರ ಪಲ್ಟಿಯಾದ ಘಟನೆ ಸಂಭವಿಸಿದೆ. ಘಟನೆಯಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದರೂ, ಟ್ಯಾಂಕರ್ನಿಂದ ಅನಿಲ ಸೋರಿಕೆಯಾಗದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಯಲ್ಲಾಪುರ ಪೊಲೀಸ್ ಠಾಣೆ ಸಿಬ್ಬಂದಿ ಹಾಗೂ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.
ಅಧಿಕಾರಿಗಳ ಪ್ರಕಾರ, ಪಲ್ಟಿಯಾಗಿರುವ ಟ್ಯಾಂಕರ್ನಿಂದ ಅನಿಲ ಸೋರಿಕೆಯಾಗದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಿಲ್ಲ. ರಸ್ತೆ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಟ್ಯಾಂಕರ್ ಅನ್ನು ಸುರಕ್ಷಿತವಾಗಿ ತೆರವುಗೊಳಿಸುವ ಕಾರ್ಯಾಚರಣೆ ನಡೆಸಲಾಯಿತು.
ಟ್ಯಾಂಕರ್ ಪಲ್ಟಿಯಾಗಲು ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.