Friday, July 24, 2026
Join WhatsApp Group
HomeLocal Newsಓಟದ ವೀರನಿಗೆ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಗುರಿ

ಓಟದ ವೀರನಿಗೆ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ಗುರಿ

ಅಥ್ಲೀಟ್ ಶಿವಾಜಿಗೆ ಜಿಲ್ಲಾಡಳಿತದ ಸನ್ಮಾನ

ಕಾರವಾರ: ಚೀನಾದಲ್ಲಿ ನಡೆದ 23 ವರ್ಷದೊಳಗಿನ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ 5,000 ಮೀಟರ್ ಮತ್ತು 10,000 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಗೆದ್ದು ದೇಶ, ರಾಜ್ಯ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೀರ್ತಿ ಹೆಚ್ಚಿಸಿದ ಹಳಿಯಾಳ ತಾಲೂಕಿನ ಬೆಳವಟಗಿ ಗ್ರಾಮದ ಅಥ್ಲೀಟ್ ಶಿವಾಜಿ ಪರಶುರಾಮ ಮಾದಪ್ಪನ ಗೌಡ್ರು ಅವರನ್ನು ಜಿಲ್ಲಾಡಳಿತ ಸೋಮವಾರ ಸನ್ಮಾನಿಸಿತು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ, ಹಳಿಯಾಳದಂತಹ ಗ್ರಾಮೀಣ ಪ್ರದೇಶದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ಶಿವಾಜಿ ಅವರ ಸಾಧನೆ ಜಿಲ್ಲೆಯ ಎಲ್ಲ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಬೇಕು ಎಂದು ಹೇಳಿದರು.

ಶಿಸ್ತು, ಕಠಿಣ ಪರಿಶ್ರಮ ಮತ್ತು ನಿರಂತರ ಅಭ್ಯಾಸದಿಂದ ಈ ಸಾಧನೆ ಸಾಧ್ಯವಾಗಿದೆ. ಶಿವಾಜಿ ಅವರಂತಹ ಪ್ರತಿಭೆಗಳಿಗೆ ಜಿಲ್ಲಾಡಳಿತದಿಂದ ಅಗತ್ಯ ಬೆಂಬಲ ಹಾಗೂ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಮಾತನಾಡಿ, ಜಿಲ್ಲೆಯಲ್ಲಿ ಕ್ರೀಡಾಪಟುಗಳಿಗೆ ಉತ್ತಮ ಪ್ರತಿಭೆ ಇದ್ದು, ಕಾರವಾರ ಜಿಲ್ಲಾ ಕ್ರೀಡಾಂಗಣವನ್ನು ಇನ್ನಷ್ಟು ಸುಸಜ್ಜಿತವಾಗಿ ಅಭಿವೃದ್ಧಿಪಡಿಸಲಾಗುವುದು. ಪೋಷಕರು ಮಕ್ಕಳನ್ನು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಬೇಕು ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಶಿವಾಜಿ, ಉತ್ತರ ಕನ್ನಡ ಜಿಲ್ಲೆಯ ಯುವಕರಲ್ಲಿ ಅಪಾರ ಪ್ರತಿಭೆ ಇದೆ. ಅವರಿಗೆ ಉತ್ತಮ ತರಬೇತಿ ಹಾಗೂ ಮೂಲಸೌಕರ್ಯ ಒದಗಿಸಿದರೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಇನ್ನಷ್ಟು ಸಾಧನೆ ಮಾಡಲು ಸಾಧ್ಯವಾಗುತ್ತದೆ. ಕಾಮನ್‌ವೆಲ್ತ್ ಗೇಮ್ಸ್‌, ಏಷ್ಯನ್ ಗೇಮ್ಸ್ ಹಾಗೂ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವುದು ನನ್ನ ಮುಂದಿನ ಗುರಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ನಾಯ್ಕ ಉಪಸ್ಥಿತರಿದ್ದರು.

ಶಿವಾಜಿ ಅವರ ಪ್ರತಿಭೆಯನ್ನು ಆರಂಭಿಕ ಹಂತದಲ್ಲೇ ಗುರುತಿಸಿ ತರಬೇತಿ ನೀಡಿದ ಕೋಚ್ ಪ್ರಕಾಶ್ ಅವರನ್ನು ಇದೇ ಸಂದರ್ಭದಲ್ಲಿ ಗೌರವಿಸಲಾಯಿತು. ಕಾರವಾರ ರೋಟರಿ ಸೀ ಸೈಡ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಶಿವಾಜಿ ಅವರನ್ನು ಸನ್ಮಾನಿಸಿ ನಗದು ಬಹುಮಾನ ನೀಡಿ ಅಭಿನಂದಿಸಿದವು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share