Friday, July 24, 2026
Join WhatsApp Group
HomeLocal Newsಪತ್ರಿಕೋದ್ಯಮದಲ್ಲಿ ಪರಿವರ್ತನೆ ಕಾಣುತ್ತಿಲ್ಲ; ಶಾಸಕ ಹೆಬ್ಬಾರ್

ಪತ್ರಿಕೋದ್ಯಮದಲ್ಲಿ ಪರಿವರ್ತನೆ ಕಾಣುತ್ತಿಲ್ಲ; ಶಾಸಕ ಹೆಬ್ಬಾರ್

ಯಲ್ಲಾಪುರ: ಪ್ರಜಾಪ್ರಭುತ್ವದ ಎಲ್ಲ ಅಂಗಗಳೂ ಇಂದು ಟೀಕೆಗೆ ಗುರಿಯಾಗುತ್ತಿವೆ. ಇದಕ್ಕೆ ಕಾರಣೀಕರ್ತರು ಯಾರು ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.

ಅವರು ಮಂಗಳವಾರ ತಾಲೂಕಿನ ಸವಣಗೇರಿಯ ಹಿರಿಯ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಹಾಗೂ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಪತ್ರಿಕಾ ಬರಹಗಳು ಸಮಾಜದಲ್ಲಿ ಬದಲಾವಣೆಗೆ ಕಾರಣವಾಗಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಆ ರೀತಿಯ ಪರಿವರ್ತನೆ ಕಾಣುತ್ತಿಲ್ಲ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

ಸಂಕಲ್ಪ ಸಂಸ್ಥೆಯ ಅಧ್ಯಕ್ಷ ಪ್ರಮೋದ ಹೆಗಡೆ ಅಭಿನಂದನಾ ನುಡಿಗಳನ್ನಾಡಿ, ದೀರ್ಘಕಾಲ ಪತ್ರಿಕೋದ್ಯಮವನ್ನು ಹೋರಾಟದ ಹಾದಿಯನ್ನಾಗಿಸಿಕೊಂಡು ಸಮಾಜಮುಖಿ ಸೇವೆ ಸಲ್ಲಿಸಿದ ಹಿರಿಯರನ್ನು ಸನ್ಮಾನಿಸಿರುವುದು ಅಭಿನಂದನೀಯ ಕಾರ್ಯ ಎಂದರು.

ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ನರಸಿಂಹ ಅಡಿ ಮಾತನಾಡಿ, ಪತ್ರಿಕೋದ್ಯಮವು ಸಮಾಜಮುಖಿ ವೃತ್ತಿಯಾಗಿದ್ದರೂ, ಕೆಲವರು ಅದರ ಮೌಲ್ಯವನ್ನು ಕುಲಗೆಡಿಸುತ್ತಿದ್ದು, ತಮ್ಮದೇ ಪ್ರಪಂಚವನ್ನು ನಿರ್ಮಿಸಿಕೊಂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಪತ್ರಿಕೋದ್ಯಮ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತರಾದ ನರಸಿಂಹ ಸಾತೊಡ್ಡಿ, ನಾಗೇಂದ್ರ ಯಲ್ಲಾಪುರ ಹಾಗೂ ಕೆ.ಎಸ್. ಭಟ್ಟ ಆನಗೋಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಶಮಾ ಭಾರತ ಗ್ಯಾಸ್ ಏಜೆನ್ಸಿಯ ಮಾಲೀಕ ಅಬ್ದುಲ್ ಖಾದರ್ ಎ.ಶೇಖ್, ಲಯನ್ಸ್ ಕ್ಲಬ್ ಅಧ್ಯಕ್ಷ ಶೇಷಗಿರಿ ಪ್ರಭು, ಕ್ಷೇತ್ರ ಶಿಕ್ಷಣಾಧಿಕಾರಿ ರೇಖಾ ನಾಯ್ಕ, ನೌಕರರ ಸಂಘದ ಅಧ್ಯಕ್ಷ ಸಂಜೀವಕುಮಾರ ಹೊಸ್ಕೇರಿ, ಎಸ್‌ಡಿಎಂಸಿ ಅಧ್ಯಕ್ಷ ಗೋಪಾಲಕೃಷ್ಣ ಭಟ್ಟ, ಉಪಾಧ್ಯಕ್ಷೆ ಶಿಲ್ಪಾ ರವಿ ನಾಯ್ಕ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಪ್ರಭಾ ಜೈರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಾಯ ಬಿದ್ರೆಮನೆ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಪತ್ರಕರ್ತ ಬೀರಣ್ಣ ನಾಯಕ ಮೊಗಟಾ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ವಿದ್ಯಾರ್ಥಿನಿಯರಾದ ವೈಷ್ಣವಿ ಹಾಗೂ ಪವಿತ್ರಾ ಮರಾಠಿ ಪ್ರಾರ್ಥಿಸಿದರು. ಸಂಘದ ಉಪಾಧ್ಯಕ್ಷ ಶ್ರೀಧರ ಅಣಲಗಾರ ಸ್ವಾಗತಿಸಿದರು. ಖಜಾಂಚಿ ದತ್ತಾತ್ರಯ ಕಣ್ಣಿಪಾಲ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ಪವಿತ್ರಾ ಆಚಾರಿ ಹಾಗೂ ಪೂರ್ಣಿಮಾ ನಾಯ್ಕ ಸನ್ಮಾನ ಪತ್ರ ವಾಚಿಸಿದರು. ಕಾರ್ಯದರ್ಶಿ ವಿಜಯಕುಮಾರ ನಾಯ್ಕ ವಂದಿಸಿದರು.

ಇದಕ್ಕೂ ಮುನ್ನ ಶಾಲಾ ಆವರಣದಲ್ಲಿ ಶಾಸಕ ಶಿವರಾಮ ಹೆಬ್ಬಾರ್ ಗಿಡ ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share