ಹೊನ್ನಾವರ: ರಾಷ್ಟ್ರೀಯ ಹೆದ್ದಾರಿಯ ಆರೋಳ್ಳಿ ತಿರುವಿನ ಮುಗ್ವಾ ಚರ್ಚ್ ಕ್ರಾಸ್ ಸಮೀಪ ಟೆಂಪೋ ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಟೆಂಪೋ ಚಾಲಕ ಸೇರಿದಂತೆ ಕೆಲವರು ಗಾಯಗೊಂಡ ಘಟನೆ ವರದಿಯಾಗಿದೆ.
ಹೊನ್ನಾವರದಿಂದ ಗೇರುಸೊಪ್ಪ ಕಡೆಗೆ ತೆರಳುತ್ತಿದ್ದ ಟೆಂಪೋ, ಎದುರಿನಿಂದ ಹಡಿನಬಾಳದಿಂದ ಹೊನ್ನಾವರದತ್ತ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ರಸ್ತೆ ಮಧ್ಯದಲ್ಲೇ ಪಲ್ಟಿಯಾಗಿದೆ. ಅಪಘಾತದಲ್ಲಿ ಟೆಂಪೋದ ಮುಂಭಾಗ ಹಾಗೂ ಬಸ್ನ ಎಡಭಾಗ ಜಖಂಗೊಂಡಿವೆ ಎನ್ನಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಟೆಂಪೋ ಚಾಲಕನ ನಿಯಂತ್ರಣ ತಪ್ಪಿದ ಕಾರಣ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಟೆಂಪೋ ಚಾಲಕ ಸೇರಿದಂತೆ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯರು ಹಾಗೂ ಪೊಲೀಸರು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಬಳಿಕ ಹೊನ್ನಾವರ ಠಾಣೆ ಪೊಲೀಸರು ಕ್ರೇನ್ ಸಹಾಯದಿಂದ ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಿದರು.