Saturday, September 19, 2026
Join WhatsApp Group
HomeLocal News11 ಪ್ರಕರಣಗಳ ಆರೋಪಿ ಜಿಲ್ಲೆಯಿಂದ ಗಡಿಪಾರು

11 ಪ್ರಕರಣಗಳ ಆರೋಪಿ ಜಿಲ್ಲೆಯಿಂದ ಗಡಿಪಾರು

ಉತ್ತರ ಕನ್ನಡ ಬಿಟ್ಟು ಅತ್ತಿಬೆಲೆಗೆ ಕಡ್ಡಾಯ ವಾಸ!

ಶಿರಸಿ: ಕಳ್ಳತನ, ಸುಲಿಗೆ, ಅತ್ಯಾಚಾರ-ಪೋಕ್ಸೊ ಹಾಗೂ ಎನ್‌ಡಿಪಿಎಸ್ ಸೇರಿದಂತೆ ಒಟ್ಟು 11 ಕ್ರಿಮಿನಲ್ ಪ್ರಕರಣಗಳಲ್ಲಿ ಹೆಸರು ಕೇಳಿಬಂದಿದ್ದ ವ್ಯಕ್ತಿಯೊಬ್ಬನನ್ನು ಉತ್ತರ ಕನ್ನಡ ಜಿಲ್ಲೆಯಿಂದ ಆರು ತಿಂಗಳ ಕಾಲ ಗಡಿಪಾರು ಮಾಡಲಾಗಿದೆ. ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಹಾಗೂ ಜನರ ಸುರಕ್ಷತೆಯ ದೃಷ್ಟಿಯಿಂದ ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

ಬನವಾಸಿ ಪೊಲೀಸ್ ಠಾಣೆ ವ್ಯಾಪ್ತಿಯ ಬದನಗೋಡ ನಿವಾಸಿ ಸಂತೋಷ ಫಕ್ಕಿರಪ್ಪ ಬೋವಿವಡ್ಡರ (27) ವಿರುದ್ಧ ಬನವಾಸಿ, ಶಿರಸಿ ಗ್ರಾಮೀಣ ಹಾಗೂ ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿದ್ದವು. ಪೊಲೀಸ್ ದಾಖಲೆಯ ಪ್ರಕಾರ, ಆತನ ವಿರುದ್ಧ 7 ಕಳ್ಳತನ, 2 ಸುಲಿಗೆ, 1 ಅತ್ಯಾಚಾರ-ಪೋಕ್ಸೊ ಹಾಗೂ 1 ಎನ್‌ಡಿಪಿಎಸ್ ಪ್ರಕರಣ ಸೇರಿದಂತೆ ಒಟ್ಟು 11 ಪ್ರಕರಣಗಳಿವೆ. ಅವುಗಳಲ್ಲಿ 10 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, ಒಂದು ಪ್ರಕರಣ ತನಿಖೆಯ ಹಂತದಲ್ಲಿದೆ.

ಈ ಹಿನ್ನೆಲೆ ಬನವಾಸಿ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ‘ಎ’ ರೌಡಿ ಶೀಟ್‌ ತೆರೆಯಲಾಗಿತ್ತು. ಆದರೂ ಆತ ತನ್ನ ಅಪರಾಧ ಚಟುವಟಿಕೆಗಳನ್ನು ಮುಂದುವರಿಸುತ್ತಿದ್ದು, ಸಾರ್ವಜನಿಕ ಶಾಂತಿ, ನೆಮ್ಮದಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ಸಾಧ್ಯತೆ ಇದೆ ಎಂದು ಪೊಲೀಸರು ವರದಿಯಲ್ಲಿ ಉಲ್ಲೇಖಿಸಿದ್ದರು.

ಇದನ್ನಾಧರಿಸಿ ಬನವಾಸಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು, ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಗಡಿಪಾರು ಪ್ರಸ್ತಾವನೆ ಸಲ್ಲಿಸಿದ್ದರು. ವಿಚಾರಣೆ ವೇಳೆ ಅಭಿಯೋಜನೆ ಹಾಗೂ ಪ್ರತಿವಾದಿಗಳ ವಾದಗಳನ್ನು ಆಲಿಸಿ, ಸಮಗ್ರ ಪರಿಶೀಲನೆ ನಡೆಸಿದ ಬಳಿಕ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಗಡಿಪಾರು ಆದೇಶ ಹೊರಡಿಸಿದ್ದಾರೆ.

ಜುಲೈ 23, 2026ರಂದು ಹೊರಡಿಸಿರುವ ಆದೇಶದಂತೆ, ಸಂತೋಷನನ್ನು 2027ರ ಜನವರಿ 22ರವರೆಗೆ ಉತ್ತರ ಕನ್ನಡ ಜಿಲ್ಲಾ ವ್ಯಾಪ್ತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad

Most Popular

error: Content is protected !!
Share