ಮುರುಡೇಶ್ವರ: ಪ್ರವಾಸಿಗರ ನೆಚ್ಚಿನ ತಾಣವಾಗಿರುವ ಮುರುಡೇಶ್ವರ ಕಡಲ ತೀರದ ಸ್ವಚ್ಛತೆ ಹಾಗೂ ಮೂಲಸೌಕರ್ಯಗಳ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಡಾ. ದಿಲೀಷ್ ಶಶಿ ಅವರು ಸ್ಥಳ ಪರಿಶೀಲನೆ ನಡೆಸಿದರು.
ಮುರುಡೇಶ್ವರ ಕಡಲ ತೀರಕ್ಕೆ ಭೇಟಿ ನೀಡಿದ ಅವರು, ಅಲ್ಲಿನ ಸ್ವಚ್ಛತಾ ವ್ಯವಸ್ಥೆ, ಪ್ರವಾಸಿಗರಿಗೆ ಕಲ್ಪಿಸಲಾಗಿರುವ ಸೌಲಭ್ಯಗಳು ಹಾಗೂ ಮೂಲಸೌಕರ್ಯಗಳ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಈ ವೇಳೆ ಕಡಲ ತೀರದ ನಿರ್ವಹಣೆ, ಪರಿಸರ ಸ್ವಚ್ಛತೆ ಮತ್ತು ಸಾರ್ವಜನಿಕರಿಗೆ ಲಭ್ಯವಿರುವ ಸೌಲಭ್ಯಗಳ ಕುರಿತು ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಪ್ರವಾಸಿಗರಿಗೆ ಉತ್ತಮ ಅನುಭವ ಕಲ್ಪಿಸುವುದು ಪ್ರಮುಖ ಆದ್ಯತೆಯಾಗಿದ್ದು, ಕಡಲ ತೀರದ ಸ್ವಚ್ಛತೆ, ನಿರ್ವಹಣೆ ಹಾಗೂ ಅಗತ್ಯ ಸೌಲಭ್ಯಗಳ ಸುಧಾರಣೆಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಡಾ. ದಿಲೀಷ್ ಶಶಿ ಸೂಚನೆ ನೀಡಿದರು.
ಇದಾದ ಬಳಿಕ ಅವರು ಕುಮಟಾ ತಾಲೂಕಿನ ತಾಲೂಕು ಪಂಚಾಯತ್ ಕಚೇರಿ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಮಾವಳ್ಳಿ ಗ್ರಾಮ ಪಂಚಾಯತ್ಗೆ ಭೇಟಿ ನೀಡಿ ವಿವಿಧ ಇಲಾಖೆಗಳ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿದರು.
ಭೇಟಿಯ ಸಂದರ್ಭದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ, ಕಚೇರಿ ಆಡಳಿತ ವ್ಯವಸ್ಥೆ, ಸ್ವಚ್ಛತೆ ಹಾಗೂ ಪ್ರಮುಖ ದಾಖಲೆಗಳ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು.
ಅಭಿವೃದ್ಧಿ ಕಾಮಗಾರಿಗಳನ್ನು ಗುಣಮಟ್ಟ ಕಾಪಾಡಿಕೊಂಡು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಅವರು, ಸಾರ್ವಜನಿಕ ಸೇವೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಇಲಾಖೆಗಳ ನಡುವೆ ಸಮನ್ವಯ ಹಾಗೂ ಜವಾಬ್ದಾರಿಯುತ ಕಾರ್ಯನಿರ್ವಹಣೆಗೆ ಒತ್ತು ನೀಡುವಂತೆ ತಿಳಿಸಿದರು.
ಪರಿಶೀಲನಾ ಕಾರ್ಯಕ್ರಮದಲ್ಲಿ ಭಟ್ಕಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಸುನೀಲ್, ಸಹಾಯಕ ನಿರ್ದೇಶಕರು, ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.