ಕಾರವಾರ: ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಕಾರ್ಯಕರ್ತರು ಇದೇ ಉತ್ಸಾಹದಿಂದ ತೊಡಗಿಸಿಕೊಳ್ಳಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಕಾರವಾರ-ಅಂಕೋಲಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಕರೆ ನೀಡಿದರು.
ಕಾರವಾರ ನಗರದ ಮುರಳೀಧರ ಮಠದ ಇಂದಿರಾಕಾಂತ ಸಭಾಭವನದಲ್ಲಿ ಬಿಜೆಪಿ ವತಿಯಿಂದ ಎಸ್‌ಐಆರ್ ಕುರಿತು ಆಯೋಜಿಸಿದ್ದ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.
ಈಗಾಗಲೇ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಶ್ರಮಿಸುತ್ತಿರುವ ಎಲ್ಲರಿಗೂ ಧನ್ಯವಾದ ತಿಳಿಸಿದ ಅವರು, ಪ್ರಕ್ರಿಯೆ ಇನ್ನೂ ಮುಂದುವರಿದಿರುವುದರಿಂದ ಕಾರ್ಯಕರ್ತರು ಅದೇ ಉತ್ಸಾಹ ಮತ್ತು ಬದ್ಧತೆಯೊಂದಿಗೆ ಕೆಲಸ ಮುಂದುವರಿಸಬೇಕು ಎಂದು ತಿಳಿಸಿದರು.
ದೆಹಲಿಯಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ಪ್ರಸ್ತಾಪಿಸಿದ ರೂಪಾಲಿ ನಾಯ್ಕ, ವಿದ್ಯಾರ್ಥಿಗಳಿಗೆ ಅನ್ಯಾಯವಾದರೆ ನಮಗೂ ನೋವಾಗುತ್ತದೆ. ವಿದ್ಯಾರ್ಥಿಗಳ ಹಿತರಕ್ಷಣೆ ಅತ್ಯಂತ ಮುಖ್ಯವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಕೂಡ ವಿದ್ಯಾರ್ಥಿಗಳ ನೋವಿಗೆ ಸ್ಪಂದಿಸಿದ್ದಾರೆ. ಆದರೆ ಕೆಲವು ರಾಜಕೀಯ ಪಕ್ಷಗಳು ವಿದ್ಯಾರ್ಥಿಗಳನ್ನು ದಾರಿತಪ್ಪಿಸುವ ಪ್ರಯತ್ನ ನಡೆಸುತ್ತಿವೆ ಎಂದು ಆರೋಪಿಸಿದರು.
ಭಾರತೀಯ ಜನತಾ ಪಕ್ಷದ ಶಕ್ತಿಯೇ ಅದರ ಸಂಘಟನೆ ಮತ್ತು ಕಾರ್ಯಕರ್ತರು ಎಂದು ಹೇಳಿದ ಅವರು, ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಲು ಪ್ರತಿಯೊಬ್ಬ ಕಾರ್ಯಕರ್ತರೂ ಸಮರ್ಪಣಾ ಮನೋಭಾವದಿಂದ ಶ್ರಮಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ ನಾಯ್ಕ, ಜಿಲ್ಲಾ ಉಪಾಧ್ಯಕ್ಷರಾದ ಸಂಜಯ ಸಾಳುಂಕೆ ಹಾಗೂ ಗಜಾನನ ಗುನಗಾ, ನಗರ ಮಂಡಲ ಅಧ್ಯಕ್ಷ ನಾಗೇಶ ಕುರ್ಡೇಕರ, ಗ್ರಾಮೀಣ ಮಂಡಲ ಅಧ್ಯಕ್ಷ ಸುಭಾಷ ಗುನಗಿ, ನಗರಸಭೆಯ ಮಾಜಿ ಅಧ್ಯಕ್ಷ ರವಿರಾಜ ಅಂಕೋಲೆಕರ, ಬಿಎಲ್‌ಎ-1 ರಾಘವೇಂದ್ರ ಭಟ್, ನಗರ ಪ್ರಭಾರಿ ರಾಜು ಭಂಡಾರಿ, ಸುನೀಲ ಸೋನಿ, ಬಿಎಲ್‌ಎ-2, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಬೂತ್ ಅಧ್ಯಕ್ಷರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.