ಯಲ್ಲಾಪುರ: ಮತದಾರರ ಪಟ್ಟಿಯ ಶುದ್ಧತೆ ಹಾಗೂ ಪ್ರಜಾಪ್ರಭುತ್ವದ ಬಲವರ್ಧನೆಗೆ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಅತ್ಯಂತ ಮಹತ್ವದ್ದಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಆರ್.ಡಿ. ಜನಾರ್ಧನ್ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಎಸ್ಐಆರ್ ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲಿಸಿ, ಅಗತ್ಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳುವ ಮೂಲಕ ಜವಾಬ್ದಾರಿಯುತ ನಾಗರಿಕರಾಗಬೇಕು ಎಂದು ಕರೆ ನೀಡಿದರು.
ಚುನಾವಣಾ ಸಾಕ್ಷರತಾ ಕ್ಲಬ್ನ ಸಂಚಾಲಕಿ ಡಾ. ರುಬೀನಾ ಖಾತೂನ್ ಮಾತನಾಡಿ, ಕ್ಲಬ್ನ ಉದ್ದೇಶಗಳು, ಮತದಾನದ ಮಹತ್ವ ಹಾಗೂ ಎಸ್ಐಆರ್ ಅಭಿಯಾನದ ಹಿನ್ನೆಲೆಯನ್ನು ವಿವರಿಸಿದರು. ವಿದ್ಯಾರ್ಥಿಗಳು ಚುನಾವಣಾ ಪ್ರಕ್ರಿಯೆಯ ಬಗ್ಗೆ ಸಮಗ್ರ ಅರಿವು ಬೆಳೆಸಿಕೊಳ್ಳುವುದು ಅಗತ್ಯ ಎಂದರು.
ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕ್ಷೇತ್ರ ಸಂಪನ್ಮೂಲ ಸಂಯೋಜಕ ಸಂತೋಷ್ ಕುಮಾರ್ ಜಿಗಲೂರ್, ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ, ಹೊಸ ಮತದಾರರ ನೋಂದಣಿ, ಹೆಸರು ಸೇರ್ಪಡೆ, ತಿದ್ದುಪಡಿ, ವಿಳಾಸ ಬದಲಾವಣೆ, ಹೆಸರು ಅಳಿಸುವಿಕೆ, ಅಗತ್ಯ ದಾಖಲೆಗಳು ಹಾಗೂ ಅರ್ಜಿ ಸಲ್ಲಿಸುವ ವಿಧಾನದ ಕುರಿತು ವಿವರವಾಗಿ ಮಾಹಿತಿ ನೀಡಿದರು. ಜೊತೆಗೆ, ಭಾರತ ಚುನಾವಣಾ ಆಯೋಗದ ನಿರ್ದೇಶನಗಳು ಮತ್ತು ಮತದಾರರ ಜಾಗೃತಿಯ ಮಹತ್ವವನ್ನು ಉದಾಹರಣೆಗಳೊಂದಿಗೆ ವಿವರಿಸಿದರು.
ಕಾರ್ಯಕ್ರಮದಲ್ಲಿ ಕು. ಶಾಂತೇರಿ ದಾಮೋದರ್ ಪೈ ಉಪಸ್ಥಿತರಿದ್ದರು. ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.