Sunday, September 6, 2026
Join WhatsApp Group
HomeLocal Newsಪೊಲೀಸ್ ನೇಮಕಾತಿ ಗೊಂದಲ: ಗೃಹ ಸಚಿವರು ರಾಜೀನಾಮೆ ನೀಡಲಿ

ಪೊಲೀಸ್ ನೇಮಕಾತಿ ಗೊಂದಲ: ಗೃಹ ಸಚಿವರು ರಾಜೀನಾಮೆ ನೀಡಲಿ

ಶಿರಸಿ: ಪೊಲೀಸ್ ನೇಮಕಾತಿ ಪರೀಕ್ಷೆಗಳಲ್ಲಿನ ಗೊಂದಲದ ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೀಡಿರುವ ಹೇಳಿಕೆ ಅಕ್ಷಮ್ಯವಾಗಿದ್ದು, ಇಲಾಖೆಯನ್ನು ಸಮರ್ಪಕವಾಗಿ ನಿರ್ವಹಿಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಉತ್ತರ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಹರ್ತೆಬೈಲ್ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪೊಲೀಸ್ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ಕುರಿತು ಸಚಿವರು ನೀಡಿರುವ ಹೇಳಿಕೆ ಸಾವಿರಾರು ಯುವಕರಿಗೆ ಅಪಮಾನ ಮಾಡಿದಂತಾಗಿದೆ ಎಂದು ಆರೋಪಿಸಿದ್ದಾರೆ.

ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ಮತ್ತು ಗೊಂದಲದಿಂದ ಉದ್ಯೋಗಾಕಾಂಕ್ಷಿಗಳು ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಗೃಹ ಸಚಿವರು ಸಂವೇದನಾಶೀಲವಾಗಿ ನಡೆದುಕೊಳ್ಳುವ ಬದಲು ಬೇಜವಾಬ್ದಾರಿಯ ಹೇಳಿಕೆ ನೀಡಿದ್ದಾರೆ ಎಂದು ಟೀಕಿಸಿದ್ದಾರೆ.

ತಮ್ಮದೇ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವಂತೆ ಗೃಹ ಸಚಿವರು ಕರೆ ನೀಡಿರುವುದು ರಾಜ್ಯದ ರಾಜಕೀಯ ಇತಿಹಾಸದಲ್ಲೇ ಅಪರೂಪದ ಬೆಳವಣಿಗೆಯಾಗಿದೆ. ಪರೀಕ್ಷಾ ಗೊಂದಲವನ್ನು ಪರಿಹರಿಸುವ ಬದಲು ಹೋರಾಟ ಮಾಡಲು ಹೇಳಿರುವುದು ಸರ್ಕಾರದ ವೈಫಲ್ಯವನ್ನು ತೋರಿಸುತ್ತದೆ.

ಕಾನೂನು ಸುವ್ಯವಸ್ಥೆ ಕಾಪಾಡುವ ಇಲಾಖೆಯ ಸಚಿವರು ಒಂದೆಡೆ ಪ್ರತಿಭಟನೆಗೆ ಪ್ರೋತ್ಸಾಹ ನೀಡುವಂತೆಯೂ, ಮತ್ತೊಂದೆಡೆ ಕಾನೂನು ಕೈಗೆತ್ತಿಕೊಂಡರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡುತ್ತಿರುವುದು ದ್ವಂದ್ವ ನಿಲುವಿಗೆ ಸಾಕ್ಷಿಯಾಗಿದೆ ಎಂದು ಗುರುಪ್ರಸಾದ ಹೆಗಡೆ ಹೇಳಿದ್ದಾರೆ.

ಹಿಂದೆಯೂ ಹಿಂದುತ್ವ ಹಾಗೂ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಿಚಾರಗಳಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ನೀಡಿರುವ ಪ್ರಿಯಾಂಕ್ ಖರ್ಗೆ, ಈಗ ಗೃಹ ಇಲಾಖೆಯನ್ನೂ ಸಮರ್ಪಕವಾಗಿ ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಯುವಕರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ರಾಜಕೀಯ ಹೇಳಿಕೆಗಳನ್ನು ನೀಡುತ್ತಿರುವ ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಹರ್ತೆಬೈಲ್ ಆಗ್ರಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share