Monday, September 7, 2026
Join WhatsApp Group
HomeLocal Newsಅತಿವೃಷ್ಟಿ-ಬರಕ್ಕೆ ತುರ್ತು ಪರಿಹಾರ

ಅತಿವೃಷ್ಟಿ-ಬರಕ್ಕೆ ತುರ್ತು ಪರಿಹಾರ

ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ದಿನ ಸಚಿವ ಲಕ್ಷ್ಮಣ ಸವದಿ ಫೀಲ್ಡ್ ರಿವ್ಯೂ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಉಂಟಾಗಿರುವ ಬೆಳೆ ಹಾನಿ, ರಸ್ತೆ ಹಾನಿ, ಕುಡಿಯುವ ನೀರಿನ ಸಮಸ್ಯೆ ಹಾಗೂ ಹೆಸ್ಕಾಂಗೆ ಸಂಬಂಧಿಸಿದ ಸಮಸ್ಯೆಗಳನ್ನು ಎರಡು ದಿನಗಳ ಕಾಲ ಸ್ಥಳ ಪರಿಶೀಲನೆ ನಡೆಸಿ, ತುರ್ತು ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ಸಂಪುಟ ದರ್ಜೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಅತಿವೃಷ್ಟಿ-ಬರ ಪರಿಸ್ಥಿತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಶಾಸಕರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದು, ಸಮಸ್ಯೆಗಳ ಕುರಿತು ಸ್ಥಳ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದರು.

ಅತಿವೃಷ್ಟಿ ಮತ್ತು ಬರದಿಂದ ರೈತರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಅವರಿಗೆ ತಕ್ಷಣದ ಪರಿಹಾರದ ಜೊತೆಗೆ ಅಲ್ಪಾವಧಿ, ಮಧ್ಯಂತರ ಹಾಗೂ ದೀರ್ಘಾವಧಿ ಯೋಜನೆಗಳ ಮೂಲಕ ಶಾಶ್ವತ ಪರಿಹಾರ ಕಲ್ಪಿಸುವ ದಿಸೆಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಅಡಿಕೆ ತೋಟಗಳಲ್ಲಿ ವ್ಯಾಪಕವಾಗಿ ಕಾಣಿಸಿಕೊಂಡಿರುವ ಎಲೆಚುಕ್ಕಿ ಹಾಗೂ ಕೊಳೆರೋಗ ನಿಯಂತ್ರಣ ಕುರಿತು ತಜ್ಞರೊಂದಿಗೆ ಚರ್ಚಿಸಿ ವೈಜ್ಞಾನಿಕ ಪರಿಹಾರ ಕಂಡುಹಿಡಿಯಲಾಗುವುದು ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ಮಾತನಾಡಿದ ಕಾರವಾರ ಶಾಸಕ ಸತೀಶ ಸೈಲ್, ಮಳೆಯಿಂದ ಹಾಳಾಗಿರುವ ಗ್ರಾಮೀಣ ರಸ್ತೆಗಳು ಹಾಗೂ ಕೈಗಾ ರಸ್ತೆಯನ್ನು ತುರ್ತಾಗಿ ದುರಸ್ತಿಗೊಳಿಸಬೇಕೆಂದು ಒತ್ತಾಯಿಸಿದರು.

ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ಟಿ. ನಾಯ್ಕ, ಶಿರಸಿ ಭಾಗದಲ್ಲಿ ಗ್ರಾಮೀಣ ರಸ್ತೆಗಳು ಅವೈಜ್ಞಾನಿಕ ಕಾಮಗಾರಿಯಿಂದ ಹಾಳಾಗಿದ್ದು, ಅಡಿಕೆ ಕೊಳೆರೋಗಕ್ಕೆ ಪರಿಣಾಮಕಾರಿ ಔಷಧಿ ಒದಗಿಸಬೇಕು ಹಾಗೂ ಮನೆ ಹಾನಿಗೊಳಗಾದ ಸಂತ್ರಸ್ತರಿಗೆ ಗರಿಷ್ಠ ಪ್ರಮಾಣದ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ಹಾರವಾಡ ಭಾಗದಲ್ಲಿ ಹೆಚ್ಚುತ್ತಿರುವ ಕಡಲ ಕೊರೆತಕ್ಕೆ ಶಾಶ್ವತ ತಡೆಗೋಡೆ ನಿರ್ಮಾಣ ಸೇರಿದಂತೆ ದೀರ್ಘಾವಧಿಯ ಪರಿಹಾರ ಯೋಜನೆ ರೂಪಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಸಭೆಯಲ್ಲಿ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್, ಕುಮಟಾ ಶಾಸಕ ದಿನಕರ ಶೆಟ್ಟಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ ನಾಯ್ಕ, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share