Monday, September 7, 2026
Join WhatsApp Group
HomeUncategorizedಹೋರಿಗಳ ಕಾದಾಟಕ್ಕೆ ಬಲಿಯಾದ ಜೀವ

ಹೋರಿಗಳ ಕಾದಾಟಕ್ಕೆ ಬಲಿಯಾದ ಜೀವ

ಬಿಡಾಡಿ ದನಗಳ ಹಾವಳಿಗೆ ಕಡಿವಾಣ ಯಾವಾಗ?

ಕಾರವಾರ: ಮಲ್ಲಾಪುರದಲ್ಲಿ ಹೋರಿಗಳ ಕಾದಾಟದ ನಡುವೆ ಸಿಲುಕಿದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿರುವ ದಾರುಣ ಘಟನೆ ವರದಿಯಾಗಿದೆ.

ತಾಲೂಕಿನ ಮಲ್ಲಾಪುರ ಗ್ರಾಮದ ಸುಭದ್ರ ಹೋಟೆಲ್‌ ಬಳಿ ಮಂಗಳವಾರ ಈ ಘಟನೆ ನಡೆದಿದ್ದು, ರಾಜೇಶ್ವರಿ (29) ಮೃತಪಟ್ಟವರು. ಎಂದಿನಂತೆ ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ರಾಜೇಶ್ವರಿಗೆ ರಸ್ತೆಯಲ್ಲಿ ಕಾದಾಡುತ್ತಿದ್ದ ಹೋರಿಯೊಂದು ಏಕಾಏಕಿ ಡಿಕ್ಕಿ ಹೊಡೆದಿದೆ. ರಭಸದ ಹೊಡೆತಕ್ಕೆ ರಸ್ತೆಗೆ ಬಿದ್ದ ಅವರು ಗಂಭೀರವಾಗಿ ಗಾಯಗೊಂಡಿದ್ದರು.

ಘಟನೆ ಕಂಡ ಸ್ಥಳೀಯರು ಕೂಡಲೇ ಅವರನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು. ಗಾಯದ ಗಂಭೀರತೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರ ಪ್ರಯತ್ನಗಳ ನಡುವೆಯೂ ಚಿಕಿತ್ಸೆ ಫಲಿಸದೆ ಗುರುವಾರ ರಾಜೇಶ್ವರಿ ಮೃತಪಟ್ಟಿದ್ದಾರೆ.

ಈ ಘಟನೆ, ಸಾರ್ವಜನಿಕ ಸ್ಥಳಗಳಲ್ಲಿ ಬಿಡಾಡಿ ದನಗಳ ಹಾವಳಿ ಎಷ್ಟು ಗಂಭೀರ ಸಮಸ್ಯೆಯಾಗುತ್ತಿದೆ ಎಂಬುದನ್ನು ಮತ್ತೆ ನೆನಪಿಸಿದೆ.

ರಸ್ತೆ ಬದಿಯಲ್ಲಿ ಬೇಕಾಬಿಟ್ಟಿ ಓಡಾಡುವ ದನಗಳು ವಾಹನ ಸವಾರರಿಗೆ ಅಪಾಯ ತಂದೊಡ್ಡುತ್ತಿರುವ ಘಟನೆಗಳು ಆಗಾಗ್ಗೆ ನಡೆಯುತ್ತಲೇ ಇವೆ. ಆದರೆ ಹೋರಿಗಳು ಪರಸ್ಪರ ಕಾದಾಡುವ ಸಂದರ್ಭದಲ್ಲಿ ದಾರಿಹೋಕರೇ ಗುರಿಯಾಗುವ ಪರಿಸ್ಥಿತಿ ನಿರ್ಮಾಣವಾದರೆ, ಅದು ಕೇವಲ ‘ದನಗಳ ಹಾವಳಿ’ಯಾಗಿ ಉಳಿಯದೆ ಸಾರ್ವಜನಿಕರ ಜೀವಕ್ಕೆ ಅಪಾಯ ತಂದೊಡ್ಡುತ್ತದೆ.

ರಾಜೇಶ್ವರಿ ಅವರ ಸಾವಿನ ಬಳಿಕವಾದರೂ ಸಂಬಂಧಪಟ್ಟ ಸ್ಥಳೀಯ ಆಡಳಿತ ಹಾಗೂ ಅಧಿಕಾರಿಗಳು ಸಾರ್ವಜನಿಕ ಸ್ಥಳಗಳಲ್ಲಿ ಬಿಡಾಡಿ ದನ, ಹೋರಿಗಳ ಹಾವಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂಬ ಒತ್ತಾಯ ಕೇಳಿಬಂದಿದೆ. ಇಂತಹ ಘಟನೆಗಳು ಮತ್ತೆ ಮರುಕಳಿಸುವ ಮುನ್ನವೇ ಕ್ರಮ ಕೈಗೊಳ್ಳಬೇಕಿದೆ ಎಂಬುದು ಸಾರ್ವಜನಿಕರ ಆಗ್ರಹ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share