Monday, September 7, 2026
Join WhatsApp Group
HomeCrime46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಕೈಗೆ ಕೋಳ!

46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಕೈಗೆ ಕೋಳ!

ಶಿರಸಿ: ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣಗಳ ಆರೋಪಿಯನ್ನು ಶಿರಸಿ ಹೊಸ ಮಾರುಕಟ್ಟೆ ಪೊಲೀಸರು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1980ರಲ್ಲಿ ದಾಖಲಾಗಿದ್ದ ಮೂರು ಪ್ರತ್ಯೇಕ ಕಳ್ಳತನ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಮಹಮ್ಮದ್ ಯೂಸುಫ್ ಅಬ್ದುಲ್ ರೆಹಮಾನ್ ಖಾಜಾ (68) ಬಂಧಿತ ಆರೋಪಿ. ಸದ್ಯ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ ಈತ ಉಡುಪಿ ಜಿಲ್ಲೆಯ ಪರ್ಕಳ ಪೋಸ್ಟ್, ಹೇರ್ಗದಲ್ಲಿ ವಾಸವಾಗಿದ್ದ.

ಹಳೆಯ ಪ್ರಕರಣವಾಗಿದ್ದರೂ ಆರೋಪಿಯ ಪತ್ತೆ ಕಾರ್ಯವನ್ನು ಕೈಬಿಡದ ಪೊಲೀಸರು ಆತನ ಪತ್ತೆಗಾಗಿ ವಿಶೇಷ ತಂಡವೊಂದನ್ನು ರಚಿಸಿದ್ದರು. ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ತಂಡ, ತಾಂತ್ರಿಕ ಮಾಹಿತಿಯನ್ನೂ ಆಧಾರವಾಗಿಸಿಕೊಂಡು ಆರೋಪಿಯ ಚಲನವಲನದ ಬಗ್ಗೆ ಸುಳಿವು ಪಡೆದುಕೊಂಡಿತ್ತು.

ಈ ಸುಳಿವಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆಗಸ್ಟ್ 14ರಂದು ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಬಳಿಕ ಕಾನೂನುಬದ್ಧ ದಸ್ತಗಿರಿ ಪ್ರಕ್ರಿಯೆ ಪೂರ್ಣಗೊಳಿಸಿ, ಸೂಕ್ತ ರಿಮಾಂಡ್ ಅರ್ಜಿಯೊಂದಿಗೆ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಕಾರ್ಯಾಚರಣೆಯನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ  ದೀಪನ್ ಎಂ.ಎನ್., ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ  ಕೃಷ್ಣಮೂರ್ತಿ ಜಿ, ಶಿರಸಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕಿ ಗೀತಾ ಪಾಟೀಲ್ ಹಾಗೂ ಶಿರಸಿ ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ಸಂಪತ್ ಇ.ಸಿ ಅವರ ಮಾರ್ಗದರ್ಶನದಲ್ಲಿ ಕೈಗೊಳ್ಳಲಾಗಿದೆ.

ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯ ಪಿಎಸ್‌ಐಗಳಾದ ಬಸವರಾಜ ಕನಶೆಟ್ಟಿ ಹಾಗೂ ಗೀತಾ ಕಲಘಟಗಿ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಅಶೋಕ ಹರಿಕಂತ್ರ, ಕೋಟೇಶ್ ನಾಗರವಳ್ಳಿ, ಸಂದೀಪ ನಿಂಬಾಯಿ, ರಾಕೇಶ್ ಎನ್.ಹೆಚ್., ಅರುಣ ಲಮಾಣಿ ಹಾಗೂ ಟೆಕ್ನಿಕಲ್ ಸೆಲ್‌ನ ಬಬನ್ ಕದಂ, ಉದಯ ಗುನಗಾ ಮತ್ತು ಮಹಾಲಿಂಗ ಸಾವಳಗಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

1980ರ ಮೂರು ಕಳ್ಳತನ ಪ್ರಕರಣಗಳ ಆರೋಪಿಯನ್ನು 46 ವರ್ಷಗಳ ಬಳಿಕ ಪತ್ತೆಹಚ್ಚಿ ಕಾನೂನಿನಡಿ ಕ್ರಮ ಕೈಗೊಂಡ ಶಿರಸಿ ಹೊಸ ಮಾರುಕಟ್ಟೆ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ ಕಾರ್ಯಕ್ಕೆ ಪೊಲೀಸ್ ಇಲಾಖೆ ಅಭಿನಂದನೆ ಸಲ್ಲಿಸಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share