Monday, September 7, 2026
Join WhatsApp Group
HomeLocal Newsಭೂಕುಸಿತ ತಡೆ ಕಾಮಗಾರಿ ವಿಳಂಬಕ್ಕೆ ಡಿಸಿ ಅಸಮಾಧಾನ

ಭೂಕುಸಿತ ತಡೆ ಕಾಮಗಾರಿ ವಿಳಂಬಕ್ಕೆ ಡಿಸಿ ಅಸಮಾಧಾನ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವನೀಯ ಭೂಕುಸಿತ ತಡೆಯಲು ₹100 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭೂಕುಸಿತ ತಡೆಗೆ ಜಿಲ್ಲೆಯಲ್ಲಿ ಒಟ್ಟು 99 ಕಾಮಗಾರಿಗಳಿಗೆ ₹100 ಕೋಟಿ ವೆಚ್ಚದಲ್ಲಿ ಅನುಮೋದನೆ ನೀಡಲಾಗಿದೆ. ಎಲ್ಲ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, 80 ಕಾಮಗಾರಿಗಳಿಗೆ ಕಾರ್ಯಾದೇಶ ನೀಡಲಾಗಿದೆ ಎಂದು ತಿಳಿಸಿದರು.

ಆದರೆ ಕಾರ್ಯಾದೇಶ ನೀಡಿದ್ದರೂ 19 ಕಾಮಗಾರಿಗಳು ಇನ್ನೂ ಆರಂಭವಾಗದಿರುವುದಕ್ಕೆ ಜಿಲ್ಲಾಧಿಕಾರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಾಮಗಾರಿಗಳು ಆರಂಭವಾಗದಿರುವುದಕ್ಕೆ ಸಂಬಂಧಪಟ್ಟ ಇಲಾಖೆಗಳು ಸಮರ್ಪಕ ಕಾರಣ ನೀಡಬೇಕು ಎಂದು ಸೂಚಿಸಿದರು.

ಈಗಾಗಲೇ ಕಾರ್ಯಾದೇಶ ನೀಡಿರುವ ಕಾಮಗಾರಿಗಳ ಪ್ರಗತಿ ವರದಿಯನ್ನು ಸಲ್ಲಿಸುವಂತೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿ, ಕಾಮಗಾರಿಗಳ ಅನುಷ್ಠಾನದಲ್ಲಿ ಯಾವುದೇ ಕಾರಣಕ್ಕೂ ವಿಳಂಬವಾಗದಂತೆ ಎಚ್ಚರಿಕೆ ವಹಿಸಬೇಕು. ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿರುವ ಮಳೆ ಮಾಪನ ಯಂತ್ರಗಳ ನಿರ್ವಹಣೆ ಕುರಿತಂತೆ ರಾಜ್ಯದಿಂದ ಗುತ್ತಿಗೆ ಪಡೆದಿರುವ ಸಂಸ್ಥೆಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಎಲ್ಲ ಮಳೆ ಮಾಪನ ಯಂತ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಶಿರೂರು ಬಳಿ ಗಂಗಾವಳಿ ನದಿಯಲ್ಲಿ ಶೇಖರಣೆಯಾಗಿರುವ ಮಣ್ಣನ್ನು ತೆರವುಗೊಳಿಸುವ ಕಾಮಗಾರಿಯನ್ನು ಮತ್ತಷ್ಟು ಚುರುಕುಗೊಳಿಸಿ ಶೀಘ್ರ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಈ ಕುರಿತು ಬಂದರು ಇಲಾಖೆಯ ಅಧಿಕಾರಿಗಳು ಪ್ರತಿಕ್ರಿಯಿಸಿ, ಮಣ್ಣು ತೆರವು ಕಾರ್ಯವನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸುವ ಗುರಿ ಹೊಂದಿರುವುದಾಗಿ ಸಭೆಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಡಾ. ದಿಲೀಷ್ ಶಶಿ ವರ್ಚುವಲ್ ಮೂಲಕ ಭಾಗವಹಿಸಿದ್ದರು. ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸೋಮಶೇಖರ ಮೇಸ್ತಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share