ಸಿದ್ದಾಪುರದಲ್ಲಿ ಡಿಎಚ್‌ಒ ಡಾ. ಸಂಜಯ ದೊಡ್ಡಮನಿ ಅವರಿಂದ NSV ಶಸ್ತ್ರಚಿಕಿತ್ಸೆ
ಕಾರವಾರ: ಪುರುಷ ಸಂತಾನಹರಣ ಶಸ್ತ್ರಚಿಕಿತ್ಸೆ ಎಂದರೆ ನೋವು, ಗಾಯ, ಹೊಲಿಗೆ ಎಂಬ ಆತಂಕ ಬೇಡ. ಆಧುನಿಕ No-Scalpel Vasectomy (NSV) ವಿಧಾನದಲ್ಲಿ ಶಸ್ತ್ರಚಿಕಿತ್ಸೆಯನ್ನು ಅತ್ಯಲ್ಪ ಅವಧಿಯಲ್ಲಿ, ಸಾಮಾನ್ಯವಾಗಿ ಹೊಲಿಗೆ ಇಲ್ಲದೆ ನಡೆಸಬಹುದಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮದಡಿ ಪುರುಷ ಸಂತಾನಹರಣ ಶಸ್ತ್ರಚಿಕಿತ್ಸೆಯ ಕುರಿತು ಜಾಗೃತಿ ಮೂಡಿಸಲಾಗುತ್ತಿದ್ದು, ಸಿದ್ದಾಪುರ ತಾಲೂಕು ಆಸ್ಪತ್ರೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಜಯ ದೊಡ್ಡಮನಿ ಅವರು ಓರ್ವ ಫಲಾನುಭವಿಗೆ NSV ಶಸ್ತ್ರಚಿಕಿತ್ಸೆ ನಡೆಸಿ ಇತರ ವೈದ್ಯರು ಹಾಗೂ ಆರೋಗ್ಯ ಅಧಿಕಾರಿಗಳಿಗೆ ಮಾದರಿಯಾಗಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಿನಿ ಬೋರಕರ್, ಸಿದ್ದಾಪುರ ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಲೋಕೆಶ್ ಹಾಗೂ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಪುರುಷ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸಲಾಗುವುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವ ಫಲಾನುಭವಿಗಳಿಗೆ ಸರ್ಕಾರದಿಂದ ₹1,100 ಗೌರವಧನ ನೀಡಲಾಗುತ್ತದೆ.
ಮಹಿಳೆಯರ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಹೋಲಿಸಿದರೆ ಪುರುಷರ NSV ವಿಧಾನ ಸರಳವಾಗಿದ್ದು, ಅತ್ಯಲ್ಪ ಅವಧಿಯಲ್ಲಿ ಪೂರ್ಣಗೊಳಿಸಬಹುದಾಗಿದೆ. ಈ ವಿಧಾನದಲ್ಲಿ ದೊಡ್ಡ ಗಾಯ ಅಥವಾ ಹೊಲಿಗೆ ಇರುವುದಿಲ್ಲ ಹಾಗೂ ಚಿಕಿತ್ಸೆಗಾಗಿ ದೀರ್ಘಕಾಲ ಆಸ್ಪತ್ರೆಯಲ್ಲಿ ದಾಖಲಾಗುವ ಅಗತ್ಯವೂ ಇಲ್ಲ ಎಂದು ಇಲಾಖೆ ತಿಳಿಸಿದೆ.
ಶಸ್ತ್ರಚಿಕಿತ್ಸೆಯ ಬಳಿಕ ಸಾಮಾನ್ಯ ವೃತ್ತಿ, ವ್ಯಾಪಾರ, ಕೂಲಿ ಅಥವಾ ಕೃಷಿ ಕೆಲಸಗಳಿಗೆ ತೊಂದರೆಯಾಗುವುದಿಲ್ಲ. ಪುರುಷರ ಲೈಂಗಿಕ ಸಾಮರ್ಥ್ಯ ಅಥವಾ ಸಂಭೋಗದ ತೃಪ್ತಿಯ ಮೇಲೂ ಪರಿಣಾಮ ಬೀರುವುದಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.
ಪುರುಷ ಸಂತಾನಹರಣ ಶಸ್ತ್ರಚಿಕಿತ್ಸೆಯ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಸಮೀಪದ ಸರ್ಕಾರಿ ಆಸ್ಪತ್ರೆ, ಆರೋಗ್ಯ ಸಿಬ್ಬಂದಿ ಅಥವಾ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಬಹುದು. 104 ಆರೋಗ್ಯ ಸಹಾಯವಾಣಿ ಮೂಲಕವೂ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.