ಬೆಂಗಳೂರು: ಜೆಡಿಎಸ್ ಎಂಎಲ್‌ಸಿ ಸೂರಜ್ ರೇವಣ್ಣ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಕೈಬಿಡುವಂತೆ ಕೋರಿ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿದೆ.
ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ತಮ್ಮನ್ನು ಕೈಬಿಡುವಂತೆ ಮನವಿ ಸಲ್ಲಿಸಿದ್ದ ಸೂರಜ್ ರೇವಣ್ಣರ ಅರ್ಜಿಯನ್ನು ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ತಳ್ಳಿಹಾಕಿದ್ದಾರೆ.
ಜೆಡಿಎಸ್ ಕಾರ್ಯಕರ್ತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಡಾ. ಸೂರಜ್ ರೇವಣ್ಣರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲುಗೆ ಕಳುಹಿಸಲಾಗಿತ್ತು. ಬಳಿಕ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, ಸುಮಾರು ಒಂದು ತಿಂಗಳ ನಂತರ ಅವರು ಜೈಲಿನಿಂದ ಬಿಡುಗಡೆಯಾಗಿದ್ದರು.
ಸಂತ್ರಸ್ತರು 2024ರ ಜೂನ್ 22ರಂದು ದೂರು ನೀಡಿದ ನಂತರ, ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಾಗಿತ್ತು. ಆರಂಭದಲ್ಲಿ ಹಾಸನ ಜಿಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲು ಪ್ರಯತ್ನಿಸಲಾಗಿದ್ದರೂ, ಬಳಿಕ ಅದನ್ನು ಹೊಳೆನರಸೀಪುರ ಠಾಣೆಗೆ ವರ್ಗಾಯಿಸಲಾಗಿತ್ತು. ಅದರಂತೆ ಜೂನ್ 23ರಂದು ಸೂರಜ್ ರೇವಣ್ಣರನ್ನು ಬಂಧಿಸಲಾಗಿತ್ತು.
ಇನ್ನೊಂದೆಡೆ, ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ ಎಂದು ಸೂರಜ್ ರೇವಣ್ಣರ ಆಪ್ತ ಶಿವಕುಮಾರ್ ಸಂತ್ರಸ್ತನ ವಿರುದ್ಧ ಪ್ರತಿದೂರು ನೀಡಿದ್ದಾರೆ. ಐದು ಕೋಟಿ ರೂಪಾಯಿ ಹಣ ನೀಡದಿದ್ದರೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಬೆಳವಣಿಗೆಗಳ ಹಿನ್ನೆಲೆ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿದೆ.