Monday, September 7, 2026
Join WhatsApp Group
HomeLocal Newsಕಸ್ತೂರಿರಂಗನ್ ವರದಿ; ಅನಗತ್ಯ ಆತಂಕ ಬೇಡ

ಕಸ್ತೂರಿರಂಗನ್ ವರದಿ; ಅನಗತ್ಯ ಆತಂಕ ಬೇಡ

ಸಿದ್ದಾಪುರ: ಕಸ್ತೂರಿರಂಗನ್ ವರದಿ ಜಾರಿಯಾದರೆ ಉತ್ತರ ಕನ್ನಡ ಜಿಲ್ಲೆಯ ಜನಜೀವನದ ಮೇಲೆ ತೀವ್ರ ಪರಿಣಾಮ ಬೀರುವ ಸಾಧ್ಯತೆಯಿದೆ. ಕೃಷಿ, ತೋಟಗಾರಿಕೆ ಸೇರಿದಂತೆ ರೈತಾಪಿ ವರ್ಗದ ಚಟುವಟಿಕೆಗಳಿಗೆ ದೊಡ್ಡ ಹೊಡೆತ ಬೀಳಲಿದೆ. ಉತ್ತರ ಕನ್ನಡ ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿರುವ ಕಸ್ತೂರಿರಂಗನ್ ವರದಿಯನ್ನು ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಜಾರಿಗೊಳಿಸುವುದಿಲ್ಲ ಎಂದು ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಸ್ಪಷ್ಟಪಡಿಸಿದರು.

ಶುಕ್ರವಾರ ಪಟ್ಟಣದ ಶಾಸಕರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಜನಜೀವನಕ್ಕೆ ಮಾರಕವಾಗಬಹುದಾದ ಇಂತಹ ವರದಿಯನ್ನು ರಾಜ್ಯ ಸರ್ಕಾರ ಸಂಪೂರ್ಣವಾಗಿ ತಿರಸ್ಕರಿಸಲಿದೆ ಎಂದು ಮುಖ್ಯಮಂತ್ರಿ ಹಾಗೂ ಅರಣ್ಯ ಸಚಿವರು ತಮ್ಮ ನಿಯೋಗಕ್ಕೆ ಈಗಾಗಲೇ ಭರವಸೆ ನೀಡಿದ್ದಾರೆ ಎಂದರು.

ಇದೀಗ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಶಾಸಕರು, ಸಾಗರ ಶಾಸಕ ಸೇರಿದಂತೆ ವರದಿಯ ಪರಿಣಾಮ ಎದುರಿಸಲಿರುವ ಪ್ರದೇಶಗಳ ಶಾಸಕರು ಹಾಗೂ ಸಚಿವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸುದೀರ್ಘವಾಗಿ ಚರ್ಚಿಸಿ ವರದಿಯಿಂದಾಗಬಹುದಾದ ಸಾಧಕ-ಬಾಧಕಗಳನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ. ವರದಿಯನ್ನು ಸಂಪೂರ್ಣವಾಗಿ ತಿರಸ್ಕರಿಸುವುದಾಗಿ ಸರ್ಕಾರ ಸ್ಪಷ್ಟಪಡಿಸಿದ್ದು, ಈ ಸಂಬಂಧ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ಉತ್ತರ ಕನ್ನಡ ಜಿಲ್ಲೆ ಕೈಗಾ, ಸೀಬರ್ಡ್ ಹಾಗೂ ವಿದ್ಯುತ್ ಉತ್ಪಾದನೆ ಸೇರಿದಂತೆ ಹಲವು ರಾಷ್ಟ್ರೀಯ ಯೋಜನೆಗಳಿಗಾಗಿ ಸಾಕಷ್ಟು ಭೂಮಿ ಹಾಗೂ ಸಂಪನ್ಮೂಲಗಳನ್ನು ತ್ಯಾಗ ಮಾಡಿದೆ. ಇದರ ನಡುವೆಯೇ ಕಸ್ತೂರಿರಂಗನ್ ವರದಿಯನ್ನು ಜಾರಿಗೊಳಿಸಿದರೆ ಜಿಲ್ಲೆಯ ಜನರು ತಮ್ಮದೇ ಭೂಮಿಯಲ್ಲಿ ಬದುಕುವುದು ಕಷ್ಟವಾಗಲಿದೆ ಎಂದು ಶಾಸಕ ಭೀಮಣ್ಣ ನಾಯ್ಕ ಆತಂಕ ವ್ಯಕ್ತಪಡಿಸಿದರು.

ವರದಿಯ ವಿರುದ್ಧ ಪಕ್ಷಭೇದ ಮರೆತು ಜಿಲ್ಲೆಯ ಎಲ್ಲಾ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ವರದಿ ಜಾರಿಗೊಳಿಸುವುದಿಲ್ಲ ಎಂದು ಸರ್ಕಾರವೇ ಸ್ಪಷ್ಟಪಡಿಸಿರುವಾಗ ಜನರಲ್ಲಿ ಅನಗತ್ಯ ಆತಂಕ ಸೃಷ್ಟಿಸುವ ಅಗತ್ಯವಿಲ್ಲ. ಜಿಲ್ಲೆಯ ಜನರ ಬದುಕು ಹಾಗೂ ಸ್ಥಳೀಯ ಪರಿಸ್ಥಿತಿಯನ್ನು ಪರಿಗಣಿಸಿಯೇ ಯಾವುದೇ ನಿರ್ಧಾರ ಕೈಗೊಳ್ಳಬೇಕು ಎಂದು ಭೀಮಣ್ಣ ನಾಯ್ಕ ಆಗ್ರಹಿಸಿದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share