Monday, September 7, 2026
Join WhatsApp Group
HomeLocal Newsಮತದಾರರ ಪಟ್ಟಿಯಲ್ಲಿ 65,330 ಮಂದಿಗೆ ನೋಟಿಸ್

ಮತದಾರರ ಪಟ್ಟಿಯಲ್ಲಿ 65,330 ಮಂದಿಗೆ ನೋಟಿಸ್

ಕಾರವಾರ: ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ–2026ರ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ನೋ ಮ್ಯಾಪಿಂಗ್ ಹಾಗೂ ತಾರ್ಕಿಕ ವ್ಯತ್ಯಾಸ ಕಂಡುಬಂದಿರುವ 65,330 ಮತದಾರರಿಗೆ ನೋಟಿಸ್ ಜಾರಿಗೊಳಿಸುವ ಪ್ರಕ್ರಿಯೆ ಆರಂಭವಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆಯ ಮೊದಲ ಹಂತದಲ್ಲಿ ಜಿಲ್ಲೆಯ ಒಟ್ಟು 12,30,037 ಮತದಾರರ ಪೈಕಿ ಶೇ.91.3ರಷ್ಟು ಎನ್ಯೂಮರೇಷನ್ ಫಾರ್ಮ್‌ಗಳನ್ನು ಸಂಗ್ರಹಿಸಿ ಡಿಜಿಟಲೀಕರಣಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಗೈರುಹಾಜರಿ, ಸ್ಥಳಾಂತರ ಅಥವಾ ಮೃತಪಟ್ಟಿರುವ 1,07,015 ಮತದಾರರನ್ನು ಹೊರತುಪಡಿಸಿ, ಉಳಿದ ಮತದಾರರ ಹೆಸರುಗಳನ್ನು ಒಳಗೊಂಡ ಕರಡು ಮತದಾರರ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದೆ. ಇದೀಗ ನೋ ಮ್ಯಾಪಿಂಗ್ ಆಗಿರುವ ಹಾಗೂ ತಾರ್ಕಿಕ ವ್ಯತ್ಯಾಸ ಕಂಡುಬಂದಿರುವ ಮತದಾರರಿಗೆ ನೋಟಿಸ್ ನೀಡುವ ಪ್ರಕ್ರಿಯೆ ಆರಂಭಿಸಲಾಗಿದೆ.

ನೋಟಿಸ್‌ಗಳನ್ನು ಮತದಾರರ ಮನೆಬಾಗಿಲಿಗೆ ತೆರಳಿ ಬೂತ್ ಮಟ್ಟದ ಅಧಿಕಾರಿಗಳು (BLO) ವಿತರಿಸಲಿದ್ದಾರೆ. ನೋಟಿಸ್ ಪಡೆದವರು ಅದರಲ್ಲಿ ಸೂಚಿಸಿರುವ ದಿನಾಂಕ, ಸಮಯ ಮತ್ತು ಸ್ಥಳದಲ್ಲಿ ಅಗತ್ಯ ದಾಖಲೆಗಳೊಂದಿಗೆ ಖುದ್ದಾಗಿ ಹಾಜರಾಗಿ ತಮ್ಮ ವಿವರಗಳನ್ನು ಪರಿಶೀಲಿಸಿಕೊಳ್ಳಬೇಕು. ಮೊದಲ ನೋಟಿಸ್‌ನಲ್ಲಿ ನೀಡಿರುವ ದಿನಾಂಕದಂದು ಹಾಜರಾಗಲು ಸಾಧ್ಯವಾಗದವರಿಗೆ ಮತ್ತೊಂದು ಅವಕಾಶ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.

ಇದರೊಂದಿಗೆ ಹೊಸದಾಗಿ ಮತದಾರರಾಗಿ ನೋಂದಣಿ ಮಾಡಿಕೊಳ್ಳಲು ಹಾಗೂ ಈಗಿರುವ ಮತದಾರರ ಪಟ್ಟಿಯಲ್ಲಿ ತಿದ್ದುಪಡಿ ಅಥವಾ ಸ್ಥಳಾಂತರ ಮಾಡಿಕೊಳ್ಳಲು ಅವಕಾಶವಿದ್ದು, ಈ ಸಂಬಂಧ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 23ರವರೆಗೆ ಕಾಲಾವಕಾಶ ಇದೆ.

ನೋಟಿಸ್ ಪಡೆದ ಮತದಾರರು ವಿಚಾರಣೆ ಸಂದರ್ಭದಲ್ಲಿ ಸಲ್ಲಿಸುವ ದಾಖಲೆಗಳನ್ನು ಪರಿಶೀಲಿಸಲು ಜಿಲ್ಲೆಯಲ್ಲಿ 145 ಹೆಚ್ಚುವರಿ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಎಚ್ಚರಿಕೆಯಿಂದ ನಡೆಸಲಾಗುತ್ತಿದ್ದು, ಅರ್ಹರಾಗಿರುವ ಯಾವುದೇ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಲಕ್ಷ್ಮೀಪ್ರಿಯಾ ಹೇಳಿದರು.

ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಹಾಗೂ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share