ಕಾರವಾರ: ಕಾರವಾರ ತಾಲೂಕಿನ ರಾಜ್ಯ ಹೆದ್ದಾರಿ–6ರ ಕಾರವಾರ–ದೇವಳಮಕ್ಕಿ–ಕೆರವಾಡಿ–ಬೋಳ್ವೆ–ಇರಪಾಗೆ–ಮಲ್ಲಾಪುರ ರಸ್ತೆಯಲ್ಲಿ 30 ಟನ್ಗಿಂತ ಹೆಚ್ಚಿನ ಭಾರ ಹೊಂದಿರುವ ಸರಕು ಹಾಗೂ ಬೃಹತ್ ವಾಹನಗಳ ಸಂಚಾರವನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಬೃಹತ್ ಹಾಗೂ ಅಧಿಕ ಭಾರದ ವಾಹನಗಳ ನಿರಂತರ ಸಂಚಾರದಿಂದ ರಸ್ತೆಯಲ್ಲಿ ದೊಡ್ಡ ಗುಂಡಿಗಳು ಉಂಟಾಗಿ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಇದರಿಂದ ಸಾರ್ವಜನಿಕರು, ವಾಹನ ಸವಾರರು ಹಾಗೂ ಶಾಲಾ ಮಕ್ಕಳ ಸುರಕ್ಷತೆಗೆ ಅಪಾಯ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಹಾಳಾಗಿರುವ ರಸ್ತೆಯನ್ನು ತಕ್ಷಣ ದುರಸ್ತಿಗೊಳಿಸಿ, ಸಾರ್ವಜನಿಕರ ಲಘು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಸಂಬಂಧಪಟ್ಟ ಯೋಜನಾ ನಿರ್ದೇಶಕರಿಗೆ ಸೂಚಿಸಲಾಗಿದೆ.
ರಸ್ತೆಯಲ್ಲಿ ವಾಹನ ನಿಷೇಧದ ಕುರಿತು ಅಗತ್ಯ ಎಚ್ಚರಿಕೆ ಫಲಕಗಳನ್ನು ಅಳವಡಿಸುವಂತೆ ಲೋಕೋಪಯೋಗಿ ಇಲಾಖೆಗೆ ಸೂಚಿಸಲಾಗಿದೆ. ರಸ್ತೆ ದುರಸ್ತಿ ಪೂರ್ಣಗೊಂಡ ಬಳಿಕ ಬೃಹತ್ ವಾಹನಗಳ ಸಂಚಾರಕ್ಕೆ ರಸ್ತೆ ಯೋಗ್ಯವಾಗಿದೆ ಎಂಬುದನ್ನು ದೃಢಪಡಿಸುವ ರಸ್ತೆ ಸುರಕ್ಷತಾ ಪ್ರಮಾಣಪತ್ರವನ್ನು ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಅಲ್ಲದೆ, ಅಗತ್ಯ ಸ್ಥಳಗಳಲ್ಲಿ ಬ್ಯಾರಿಕೇಡ್ಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದ್ದು, ಸಂಚಾರ ದಟ್ಟಣೆ ಉಂಟಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ದುರಸ್ತಿ ಕಾಮಗಾರಿ ಪೂರ್ಣಗೊಳ್ಳುವವರೆಗೆ ಯಾವುದೇ ಅಪಘಾತ ಸಂಭವಿಸದಂತೆ ನಿರಂತರ ನಿಗಾ ವಹಿಸುವಂತೆಯೂ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ.