91 ಕಟ್ಟಡಗಳ ನಿರ್ಮಾಣ ಶೀಘ್ರ ಪೂರ್ಣಗೊಳಿಸಲು ಡಿಸಿ ಸೂಚನೆ
ಕಾರವಾರ: ಜಿಲ್ಲೆಯಲ್ಲಿ ವಿವಿಧ ಯೋಜನೆಗಳಡಿ ಕೈಗೆತ್ತಿಕೊಂಡಿರುವ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಪ್ರಸ್ತುತ ಪ್ರಗತಿಯಲ್ಲಿರುವ 91 ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಈ ಕುರಿತು ಸಂಬಂಧಪಟ್ಟ ನಿರ್ಮಾಣ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಅಂಗನವಾಡಿ ಕೇಂದ್ರಗಳಿಗೆ ಅಗತ್ಯವಿರುವ ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳು ಸಮರ್ಪಕವಾಗಿವೆಯೇ ಎಂಬುದನ್ನು ಪರಿಶೀಲಿಸಬೇಕು. ದುರಸ್ತಿ ಅಗತ್ಯವಿರುವ ಅಂಗನವಾಡಿ ಕಟ್ಟಡಗಳ ಕಾಮಗಾರಿಗಳನ್ನು ಕೂಡ ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದರು.
ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ನಿವೇಶನದ ಕೊರತೆ ಇರುವ ಕಡೆಗಳಲ್ಲಿ ಸ್ಥಳೀಯ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಅಗತ್ಯ ನಿವೇಶನ ಒದಗಿಸುವ ಕುರಿತು ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಕುರಿತು ಹೆಚ್ಚಿನ ಸಂಖ್ಯೆಯ ಫಲಾನುಭವಿಗಳಿಗೆ ಮಾಹಿತಿ ತಲುಪಿಸುವ ಮೂಲಕ ಜಾಗೃತಿ ಮೂಡಿಸಬೇಕು. ಪೋಷಣ್ ಅಭಿಯಾನ ಕಾರ್ಯಕ್ರಮವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ನಟರಾಜ್ ಹಾಗೂ ಜಿಲ್ಲೆಯ ಎಲ್ಲ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.