Sunday, September 6, 2026
Join WhatsApp Group
HomeLocal Newsಪಿಒಪಿ ಗಣೇಶ ಮೂರ್ತಿ, ಡಿಜೆ ಸಂಪೂರ್ಣ ನಿಷೇಧ

ಪಿಒಪಿ ಗಣೇಶ ಮೂರ್ತಿ, ಡಿಜೆ ಸಂಪೂರ್ಣ ನಿಷೇಧ

ಗಣೇಶೋತ್ಸವ ಆಚರಣೆಗೆ ಜಿಲ್ಲಾಡಳಿತದ ಕಟ್ಟುನಿಟ್ಟಿನ ಮಾರ್ಗಸೂಚಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ಬಾರಿಯ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಜಿಲ್ಲಾಡಳಿತ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಪ್ಲಾಸ್ಟರ್ ಆಫ್ ಪ್ಯಾರಿಸ್ (POP) ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ಮಾರಾಟಕ್ಕೆ ಸಂಪೂರ್ಣ ನಿಷೇಧ ವಿಧಿಸಲಾಗಿದ್ದು, ಗಣೇಶೋತ್ಸವದ ಯಾವುದೇ ಕಾರ್ಯಕ್ರಮ ಅಥವಾ ವಿಸರ್ಜನಾ ಮೆರವಣಿಗೆಯಲ್ಲೂ ಡಿಜೆ ಬಳಕೆಗೆ ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸ್ಪಷ್ಟಪಡಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಸೂಚನೆಗಳನ್ನು ನೀಡಿದರು.

ಮಣ್ಣಿನ ಗಣೇಶ ಮೂರ್ತಿಗಷ್ಟೇ ಅವಕಾಶ

ಸಾರ್ವಜನಿಕರು ಮಣ್ಣಿನಿಂದ ತಯಾರಿಸಿದ ಹಾಗೂ ರಾಸಾಯನಿಕ ರಹಿತ ಬಣ್ಣಗಳನ್ನು ಬಳಸಿರುವ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನೇ ಪ್ರತಿಷ್ಠಾಪಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಜಲಮೂಲಗಳ ಮಾಲಿನ್ಯ ತಡೆಯುವ ಉದ್ದೇಶದಿಂದ ಸ್ಥಳೀಯ ಸಂಸ್ಥೆಗಳು ಗುರುತಿಸಿದ ವಿಸರ್ಜನಾ ಸ್ಥಳಗಳಲ್ಲಿ ಅಥವಾ ಕೃತಕ ಹೊಂಡಗಳಲ್ಲೇ ಮೂರ್ತಿಗಳನ್ನು ವಿಸರ್ಜಿಸಬೇಕು ಎಂದರು.

ಡಿಜೆ, ರಾತ್ರಿ ಧ್ವನಿವರ್ಧಕಕ್ಕೆ ನಿಷೇಧ

ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಯಾವುದೇ ರೀತಿಯ ಧ್ವನಿವರ್ಧಕ ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ. ಹಗಲಿನ ವೇಳೆಯಲ್ಲಿ ಶಬ್ದಮಾಲಿನ್ಯದ ಮಿತಿಯನ್ನು ಪಾಲಿಸಿಕೊಂಡು ಧ್ವನಿವರ್ಧಕ ಬಳಸಬಹುದು. ಆದರೆ ಗಣೇಶ ವಿಸರ್ಜನಾ ಮೆರವಣಿಗೆ ಸೇರಿದಂತೆ ಯಾವುದೇ ಕಾರ್ಯಕ್ರಮದಲ್ಲಿ ಡಿಜೆ ಬಳಕೆ ಸಂಪೂರ್ಣ ನಿಷೇಧವಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸ್ ಇಲಾಖೆ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಕ್ರಮ ಕೈಗೊಳ್ಳಲಿದೆ.

ಪೂರ್ವಾನುಮತಿ ಕಡ್ಡಾಯ

ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯ. ಪ್ರತಿಷ್ಠಾಪನಾ ಸ್ಥಳದಲ್ಲಿ ಸಿಸಿಟಿವಿ ಅಳವಡಿಕೆ, ಸ್ವಯಂಸೇವಕರ ನಿಯೋಜನೆ, ಪ್ರಸಾದ ಮತ್ತು ಕುಡಿಯುವ ನೀರಿನ ವಿತರಣೆಯಲ್ಲಿ ಶುಚಿತ್ವ ಕಾಪಾಡುವಂತೆ ಆಯೋಜಕರಿಗೆ ಸೂಚಿಸಲಾಗಿದೆ. ಅಗತ್ಯ ಅನುಮತಿಗಳನ್ನು ಸಿಂಗಲ್ ವಿಂಡೋ ವ್ಯವಸ್ಥೆ ಮೂಲಕ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಪೆಂಡಾಲ್‌ಗಳ ಸುರಕ್ಷತೆಯ ಪರಿಶೀಲನೆ

ಗಣೇಶ ಪೆಂಡಾಲ್‌ಗಳಲ್ಲಿ ವಿದ್ಯುತ್ ಮತ್ತು ಅಗ್ನಿ ಸುರಕ್ಷತಾ ಕ್ರಮಗಳನ್ನು ಹೆಸ್ಕಾಂ ಹಾಗೂ ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಪರಿಶೀಲಿಸಲಿದ್ದಾರೆ. ಈಗಾಗಲೇ ಅನುಮತಿ ಪಡೆದಿರುವ ವ್ಯಾಪಾರಿಗಳು ನಿಗದಿತ ಸ್ಥಳಗಳಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು ಎಂದು ಸೂಚಿಸಲಾಗಿದೆ.

ಪರಿಸರ ಸ್ನೇಹಿ ಆಚರಣೆಗೆ ಕರೆ

ಪಿಒಪಿ ಮೂರ್ತಿಗಳ ನಿಷೇಧ, ಸರಿಯಾದ ವಿಸರ್ಜನಾ ಕ್ರಮ ಹಾಗೂ ಪ್ಲಾಸ್ಟಿಕ್ ಬಳಕೆ ತಡೆಯುವ ಕುರಿತು ನಗರ ಸ್ಥಳೀಯ ಸಂಸ್ಥೆಗಳು ಸ್ವಚ್ಛತಾ ವಾಹನಗಳ ಮೂಲಕ ಜನಜಾಗೃತಿ ಮೂಡಿಸಲಿವೆ. ಸಾರ್ವಜನಿಕರು ಪ್ಲಾಸ್ಟಿಕ್, ಜಲ ಮತ್ತು ಶಬ್ದ ಮಾಲಿನ್ಯ ರಹಿತವಾಗಿ ಪರಿಸರ ಸ್ನೇಹಿ ಗಣೇಶೋತ್ಸವ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಭಟ್ಕಳ ವಿಭಾಗದ ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ರಾಣು ಗುಪ್ತಾ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಾಲೂಕಿನ ಅಧಿಕಾರಿಗಳು ವರ್ಚುವಲ್ ಮೂಲಕ ಭಾಗವಹಿಸಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share