ಶಾಸಕರ ನೇತೃತ್ವದಲ್ಲಿ ಜನರ ಅಹವಾಲು ಸ್ವೀಕಾರ
ಕಾರವಾರ: ಸರ್ಕಾರಿ ಕಚೇರಿಗಳಿಗೆ ಜನರು ಅಲೆದಾಡುವ ಬದಲು, ಜನರ ಬಳಿಗೇ ಆಡಳಿತ ತೆರಳಿ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ‘ಪ್ರಜಾಸೇವೆ ಆಂದೋಲನ’ ಸಭೆಗಳನ್ನು ಆಯೋಜಿಸಲಾಗಿದೆ.
ರಾಜ್ಯದ ಜನತೆಯ ಅಹವಾಲುಗಳನ್ನು ಆಲಿಸಿ, ಮನೆ ಬಾಗಿಲಿನಲ್ಲೇ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದ ಈ ಸಭೆಗಳು ಸೆ.5ರಂದು ಬೆಳಗ್ಗೆ 10.30ಕ್ಕೆ ಆಯಾ ವಿಧಾನಸಭಾ ಕ್ಷೇತ್ರಗಳ ಶಾಸಕರ ನೇತೃತ್ವದಲ್ಲಿ ನಡೆಯಲಿವೆ.
ಭಟ್ಕಳ: ವಿಧಾನಸಭಾ ಉಪಾಧ್ಯಕ್ಷ ಹಾಗೂ ಭಟ್ಕಳ-ಹೊನ್ನಾವರ ಶಾಸಕ ಮಂಕಾಳ ಎಸ್. ವೈದ್ಯ ಅವರ ನೇತೃತ್ವದಲ್ಲಿ ಭಟ್ಕಳ ತಾಲೂಕಿನ ಮಾವಳ್ಳಿ ಹೋಬಳಿಯ ಮುರ್ಡೇಶ್ವರದ ಆರ್.ಎನ್.ಎಸ್. ಸಭಾಭವನದಲ್ಲಿ ಸಭೆ ನಡೆಯಲಿದೆ.
ಹಳಿಯಾಳ: ಆಡಳಿತ ಸುಧಾರಣೆ ಆಯೋಗದ ಅಧ್ಯಕ್ಷರು ಹಾಗೂ ಹಳಿಯಾಳ-ದಾಂಡೇಲಿ-ಜೋಯಿಡಾ ಶಾಸಕ ಆರ್.ವಿ. ದೇಶಪಾಂಡೆ ಅವರ ನೇತೃತ್ವದಲ್ಲಿ ಹಳಿಯಾಳ ತಾಲೂಕಿನ ಸಂಬ್ರಾಣಿ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಪ್ರಜಾಸೇವೆ ಆಂದೋಲನ ನಡೆಯಲಿದೆ.
ಶಿರಸಿ: ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ಟಿ. ನಾಯ್ಕ ಅವರ ನೇತೃತ್ವದಲ್ಲಿ ಸಂಪಖಂಡ ಹೋಬಳಿಯ ಜಾನ್ಮನೆ ಗಜಾನನ ಪ್ರೌಢಶಾಲೆ ಸಭಾಭವನದಲ್ಲಿ ಸಭೆ ಆಯೋಜಿಸಲಾಗಿದೆ.
ಯಲ್ಲಾಪುರ: ಯಲ್ಲಾಪುರ-ಮುಂಡಗೋಡ ಶಾಸಕ ಶಿವರಾಮ ಹೆಬ್ಬಾರ್ ಅವರ ನೇತೃತ್ವದಲ್ಲಿ ಯಲ್ಲಾಪುರ ತಾಲೂಕಿನ ಮಂಚಿಕೇರಿ ಹೋಬಳಿಯ ರಾಜರಾಜೇಶ್ವರಿ ಸಮಾಜ ಮಂದಿರದಲ್ಲಿ ಸಭೆ ನಡೆಯಲಿದೆ.
ಕುಮಟಾ: ಕುಮಟಾ-ಹೊನ್ನಾವರ ಶಾಸಕ ದಿನಕರ ಕೆ. ಶೆಟ್ಟಿ ಅವರ ನೇತೃತ್ವದಲ್ಲಿ ಕುಮಟಾ ತಾಲೂಕಿನ ಕೂಜಳ್ಳಿಯ ಶಾಂತಿಕಾ ಪರಮೇಶ್ವರಿ ಸಭಾಭವನದಲ್ಲಿ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ ಆಯೋಜಿಸಲಾಗಿದೆ.
ಸಭೆಗಳಲ್ಲಿ ಸಾರ್ವಜನಿಕರು ತಮ್ಮ ವೈಯಕ್ತಿಕ ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ಅಹವಾಲು ಸಲ್ಲಿಸಬಹುದಾಗಿದೆ. ಜತೆಗೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿಗಳನ್ನು ಸಲ್ಲಿಸಿ, ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಆದ್ದರಿಂದ ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸುವುದರೊಂದಿಗೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.