ಮುಂಡಗೋಡ: ಪಟ್ಟಣದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಹಾಗೂ ಸಾರ್ವಜನಿಕರಿಗೆ ಅಗತ್ಯವಿರುವ ಮೂಲಸೌಕರ್ಯಗಳ ಕುರಿತು ಯಲ್ಲಾಪುರ-ಮುಂಡಗೋಡ ಶಾಸಕ ಶಿವರಾಮ ಹೆಬ್ಬಾರ್ ಅವರು ಬುಧವಾರ ಮುಂಡಗೋಡ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಈಗಾಗಲೇ ಕೈಗೆತ್ತಿಕೊಂಡಿರುವ ಹಾಗೂ ಪ್ರಗತಿಯಲ್ಲಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಅಧಿಕಾರಿಗಳಿಂದ ಶಾಸಕರು ಸಮಗ್ರ ಮಾಹಿತಿ ಪಡೆದುಕೊಂಡರು. ಕಾಮಗಾರಿಗಳು ಯಾವ ಹಂತದಲ್ಲಿವೆ, ಎದುರಾಗಿರುವ ಸಮಸ್ಯೆಗಳೇನು ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಪಟ್ಟಣದ ಅಭಿವೃದ್ಧಿಗೆ ಸಂಬಂಧಿಸಿದ ಕಾಮಗಾರಿಗಳು ವಿಳಂಬವಾಗದಂತೆ ನಿಗದಿತ ಅವಧಿಯೊಳಗೆ ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಶಾಸಕ ಶಿವರಾಮ ಹೆಬ್ಬಾರ್ ಸೂಚಿಸಿದರು.
ಅಭಿವೃದ್ಧಿ ಕಾಮಗಾರಿಗಳ ಜತೆಗೆ ಸಾರ್ವಜನಿಕರಿಗೆ ಅಗತ್ಯವಿರುವ ಮೂಲಸೌಕರ್ಯಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು. ಪಟ್ಟಣದ ಜನರಿಂದ ಬಂದಿರುವ ಸಮಸ್ಯೆಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ಸಲಹೆ ನೀಡಿದರು.
ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು. ಕಾಮಗಾರಿಗಳ ಗುಣಮಟ್ಟದ ಮೇಲೂ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕರು, ಪಟ್ಟಣದ ಅಭಿವೃದ್ಧಿಗೆ ಸಂಬಂಧಿಸಿದ ಅಗತ್ಯ ಕ್ರಮಗಳನ್ನು ಸಮನ್ವಯದಿಂದ ಕೈಗೊಳ್ಳುವಂತೆ ತಿಳಿಸಿದರು.