ಶಿರಸಿ/ರಾಯಚೂರು: ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಬಿಜೆಪಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆಯಲ್ಲಿ ಬಿಜೆಪಿ ರೈತ ಮೋರ್ಚಾ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ ಸೇರಿದಂತೆ ಜಿಲ್ಲೆಯ ರೈತ ಮೋರ್ಚಾ ಪದಾಧಿಕಾರಿಗಳು ಭಾಗವಹಿಸಿದರು.
ಬಳ್ಳಾರಿ ಚಲೋ ಪಾದಯಾತ್ರೆಯ ಅಂಗವಾಗಿ ಗುರುವಾರ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರು ಗ್ರಾಮದಿಂದ ಸಿಂಧನೂರುವರೆಗೆ ಪಾದಯಾತ್ರೆ ನಡೆಯಿತು. ಉತ್ತರ ಕನ್ನಡ ಜಿಲ್ಲೆಯಿಂದ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ನೂರಾರು ರೈತ ಮೋರ್ಚಾ ಪದಾಧಿಕಾರಿಗಳು ಪಾಲ್ಗೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದ್ದು, ರಾಜ್ಯದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದು ಆರೋಪಿಸಿದರು. ಮುಖ್ಯಮಂತ್ರಿ ಅವರಿಗೆ ರಿಯಲ್ ಎಸ್ಟೇಟ್ ಕ್ಷೇತ್ರದ ಬಗ್ಗೆ ಇರುವ ಆಸಕ್ತಿ ರೈತರು, ಮಹಿಳೆಯರು ಹಾಗೂ ಯುವಕರ ಉದ್ಯೋಗದ ಬಗ್ಗೆ ಇಲ್ಲ ಎಂದು ಟೀಕಿಸಿದರು.
ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡದೆ ಲೂಟಿ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಮೂಡಾ ಹಗರಣ, ವಾಲ್ಮೀಕಿ ನಿಗಮದ ಹಣದ ಅಕ್ರಮ ಹಾಗೂ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಅಕ್ರಮಗಳ ಕುರಿತು ಪ್ರಸ್ತಾಪಿಸಿದರು.
ರೈತರ ಆತ್ಮಹತ್ಯೆ ಸೇರಿದಂತೆ ಹಲವು ಸಮಸ್ಯೆಗಳ ನಡುವೆಯೂ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆರೋಪಿಸಿದ ವಿಜಯೇಂದ್ರ, 2028ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ತಮ್ಮ ಹೋರಾಟಕ್ಕೆ ಜನರಿಂದ ಉತ್ತಮ ಬೆಂಬಲ ದೊರೆಯುತ್ತಿದ್ದು, ಸರ್ಕಾರದ ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದರು.
ಪಾದಯಾತ್ರೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಿಂದ ಬಿಜೆಪಿ ರೈತ ಮೋರ್ಚಾ ಪ್ರಮುಖರಾದ ಶಿವಕುಮಾರ್ ನಾಯ್ಕ್ ಕೊಂಡ್ಲಿ, ಬಸಣ್ಣ ಕುರುಬಕಟ್ಟಿ ಸೇರಿದಂತೆ ನೂರಾರು ಪದಾಧಿಕಾರಿಗಳು ಭಾಗವಹಿಸಿದ್ದರು.