ಕಾರವಾರ: ಕಾರವಾರದಲ್ಲಿ ಕಲಾತ್ಮಕ ಹಾಗೂ ಆಕರ್ಷಕ ವಿನ್ಯಾಸದ ನೂತನ ರಂಗಮಂದಿರ ನಿರ್ಮಾಣಕ್ಕೆ ಹೊಸ ಪ್ರಸ್ತಾವನೆ ಸಲ್ಲಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಂಗಮಂದಿರ ಅಭಿವೃದ್ಧಿ ಮತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರವಾರದಲ್ಲಿ ನೂತನ ರಂಗಮಂದಿರ ನಿರ್ಮಾಣಕ್ಕೆ ಮೂರು ವರ್ಷಗಳ ಹಿಂದೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈ ನಡುವೆ ಕಟ್ಟಡ ನಿರ್ಮಾಣದ ದರಗಳು ಪರಿಷ್ಕೃತಗೊಂಡಿರುವ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಹೊಸದಾಗಿ ಅಂದಾಜು ಪಟ್ಟಿ ಪಡೆದು ಸರ್ಕಾರಕ್ಕೆ ಪರಿಷ್ಕೃತ ಪ್ರಸ್ತಾವನೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ನೂತನ ರಂಗಮಂದಿರ ನಿರ್ಮಾಣಕ್ಕಾಗಿ ಹೊಸ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸುಮಾರು 20 ಗುಂಟೆ ಜಾಗವನ್ನು ಗುರುತಿಸಲಾಗಿದೆ. ಈ ಜಾಗವನ್ನು ರಂಗಮಂದಿರ ನಿರ್ಮಾಣಕ್ಕೆ ಮೀಸಲಿಡುವ ಸಂಬಂಧ ಅಗತ್ಯ ದಾಖಲೆಗಳನ್ನು ಪಡೆದು ಮುಂದಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ಎನ್. ವಾಸರೆ ಮಾತನಾಡಿ, ನೂತನ ರಂಗಮಂದಿರವನ್ನು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಮರ್ಪಕವಾಗಿ ಬಳಕೆಯಾಗುವ ರೀತಿಯಲ್ಲಿ ನಿರ್ಮಿಸಬೇಕು. ರಂಗಮಂದಿರದಲ್ಲಿ ಆರ್ಟ್ ಗ್ಯಾಲರಿ, ಗ್ರಂಥಾಲಯ, ಉತ್ತಮ ಧ್ವನಿ ಮತ್ತು ಬೆಳಕಿನ ವ್ಯವಸ್ಥೆ, ಪಾರ್ಕಿಂಗ್ ಸೇರಿದಂತೆ ಅಗತ್ಯ ಎಲ್ಲ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ, ತಹಸೀಲ್ದಾರ್ ನಿಶ್ಚಲ್ ನರೋನಾ, ಪೌರಾಯುಕ್ತ ಜಗದೀಶ ಹುಲಗಜ್ಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ನಾಯ್ಕ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರಾಮಾನಾಯ್ಕ ಸೇರಿದಂತೆ ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು ಉಪಸ್ಥಿತರಿದ್ದರು.