ಇ-ಸ್ವತ್ತು 2.0 ಸಮಸ್ಯೆ: ಭೀಮಣ್ಣ ನಾಯ್ಕ, ಶಿವರಾಮ ಹೆಬ್ಬಾರ್ ಮನವಿಗೆ ಸಚಿವರ ಸ್ಪಂದನೆ
ಬೆಂಗಳೂರು: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಇಲಾಖೆಯು “ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಶುಲ್ಕಗಳು” ನಿಯಮಗಳು–2025ರ ಅನ್ವಯ ತೆರಿಗೆ ನಿರ್ಧರಣೆ ಹಾಗೂ ಇ-ಸ್ವತ್ತು 2.0 ತಂತ್ರಾಂಶದಿಂದ ಆಸ್ತಿಗಳನ್ನು ಕೈಬಿಡುವ ಕುರಿತು ಹೊರಡಿಸಿರುವ ಮಾರ್ಗಸೂಚಿಯಿಂದ ಗ್ರಾಮೀಣ ಭಾಗದ ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಶಾಸಕರಾದ ಶಿವರಾಮ ಹೆಬ್ಬಾರ್ ಹಾಗೂ ಭೀಮಣ್ಣ ಟಿ. ನಾಯ್ಕ ಅವರು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಇ-ಸ್ವತ್ತು 2.0 ತಂತ್ರಾಂಶದಲ್ಲಿ ಆಸ್ತಿಗಳ ತೆರಿಗೆ ನಿರ್ಧರಣೆ ಹಾಗೂ ಆಸ್ತಿಗಳನ್ನು ಕೈಬಿಡುವ ಪ್ರಕ್ರಿಯೆಯಿಂದ ಗ್ರಾಮೀಣ ಪ್ರದೇಶದ ಜನರು ಎದುರಿಸುತ್ತಿರುವ ಪ್ರಾಯೋಗಿಕ ಸಮಸ್ಯೆಗಳ ಕುರಿತು ಶಾಸಕರು ಸಚಿವರ ಗಮನ ಸೆಳೆದರು. ವಿಶೇಷವಾಗಿ ಅತಿಕ್ರಮಣ ಜಾಗಗಳಲ್ಲಿ ಹಲವು ವರ್ಷಗಳಿಂದ ವಾಸಿಸುತ್ತಿರುವ ಬಡ ಹಾಗೂ ಸಾಮಾನ್ಯ ಜನರ ಮನೆಗಳ ನಂಬರ್‌ಗಳನ್ನು ರದ್ದುಗೊಳಿಸುವ ಕ್ರಮದಿಂದ ಸಾರ್ವಜನಿಕರಿಗೆ ಉಂಟಾಗಬಹುದಾದ ತೊಂದರೆಗಳ ಬಗ್ಗೆಯೂ ವಿವರಿಸಿದರು.
ವರ್ಷಗಳಿಂದ ಮನೆ ನಿರ್ಮಿಸಿಕೊಂಡು ವಾಸಿಸುತ್ತಿರುವ ಕುಟುಂಬಗಳ ಮನೆ ನಂಬರ್‌ಗಳು ರದ್ದಾದರೆ, ತೆರಿಗೆ ಪಾವತಿ ಸೇರಿದಂತೆ ವಿವಿಧ ಸರ್ಕಾರಿ ಸೇವೆಗಳನ್ನು ಪಡೆಯಲು ಹಾಗೂ ಮೂಲಭೂತ ಸೌಕರ್ಯಗಳನ್ನು ಪಡೆಯಲು ಸಮಸ್ಯೆಯಾಗುವ ಸಾಧ್ಯತೆ ಇದೆ. ಹೀಗಾಗಿ ಗ್ರಾಮೀಣ ಭಾಗದ ಜನರ ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸಿ ಪ್ರಸ್ತುತ ನಿಯಮಾವಳಿಗಳನ್ನು ಸಡಿಲಗೊಳಿಸುವುದರ ಜೊತೆಗೆ, ಮನೆಗಳ ನಂಬರ್ ರದ್ದುಪಡಿಸುವ ಆದೇಶವನ್ನು ಹಿಂಪಡೆಯಬೇಕು ಎಂದು ಶಾಸಕರು ಸಚಿವರಲ್ಲಿ ಮನವಿ ಮಾಡಿದರು.
ಸಾರ್ವಜನಿಕರಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ಇ-ಸ್ವತ್ತು 2.0ರಲ್ಲಿನ ತೆರಿಗೆ ನಿರ್ಧರಣೆ ಮತ್ತು ಆಸ್ತಿ ಕೈಬಿಡುವ ಪ್ರಕ್ರಿಯೆಯನ್ನು ಸರಳಗೊಳಿಸುವುದು ಸೇರಿದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಇಬ್ಬರೂ ಶಾಸಕರು ಒತ್ತಾಯಿಸಿದರು.
ಶಾಸಕರ ಮನವಿಯನ್ನು ಆಲಿಸಿದ ಸಚಿವ ಈಶ್ವರ ಖಂಡ್ರೆ ಅವರು, ಗ್ರಾಮೀಣ ಭಾಗದ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಮುಂಬರುವ ವಿಧಾನಸಭಾ ಅಧಿವೇಶನದ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಶಾಸಕರ ಸಭೆ ಕರೆದು ಈ ವಿಚಾರದ ಕುರಿತು ಕೂಲಂಕುಷವಾಗಿ ಚರ್ಚಿಸಲಾಗುವುದು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಮನೆಗಳ ನಂಬರ್ ರದ್ದುಪಡಿಸುವ ಆದೇಶವನ್ನು ಹಿಂಪಡೆಯುವ ನಿಟ್ಟಿನಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.