ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಹಬ್ಬದ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ.
ಜಿಲ್ಲೆಯಾದ್ಯಂತ ಈ ಬಾರಿ ಬರೋಬ್ಬರಿ 1,492 ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ನಡೆಯುತ್ತಿದ್ದು, ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ವಿಶೇಷ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.ಹಬ್ಬದ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಲು 2 ಹೆಚ್ಚುವರಿ ಪೊಲೀಸ್ ಅಧೀಕ್ಷಕರು, 5 ಡಿವೈಎಸ್‌ಪಿ, 22 ಪೊಲೀಸ್ ನಿರೀಕ್ಷಕರು, 72 ಪಿಎಸ್‌ಐ, 125 ಎಎಸ್‌ಐ, 1,020 ಪೊಲೀಸ್ ಕಾನ್ಸ್‌ಟೇಬಲ್‌ಗಳು ಹಾಗೂ 400 ಹೋಮ್‌ಗಾರ್ಡ್‌ಗಳನ್ನು ನಿಯೋಜಿಸಲಾಗಿದೆ.
ಇದಲ್ಲದೆ 5 ಕೆಎಸ್‌ಆರ್‌ಪಿ ಮತ್ತು 15 ಡಿಎಆರ್ ತುಕಡಿಗಳನ್ನೂ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ತುರ್ತು ಸಂದರ್ಭಗಳಲ್ಲಿ ತಕ್ಷಣ ನೆರವು ಒದಗಿಸಲು ಅಗ್ನಿಶಾಮಕ ದಳ, ಕರಾವಳಿ ಕಾವಲು ಪಡೆ ಹಾಗೂ ಆಂಬುಲೆನ್ಸ್ ವ್ಯವಸ್ಥೆಯನ್ನೂ ಮಾಡಲಾಗಿದೆ.
ಹಬ್ಬ ಶಾಂತಿಯುತವಾಗಿ ನಡೆಯುವಂತೆ ಈಗಾಗಲೇ ವಿವಿಧ ಹಂತಗಳಲ್ಲಿ ಶಾಂತಿ ಸಭೆಗಳನ್ನು ನಡೆಸಲಾಗಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಧಾರ್ಮಿಕ ಮುಖಂಡರು ಹಾಗೂ ಸಾರ್ವಜನಿಕ ಗಣೇಶೋತ್ಸವ ಆಯೋಜಕರನ್ನು ಒಳಗೊಂಡ ಜಿಲ್ಲಾ ಮಟ್ಟದ ಶಾಂತಿ ಸಭೆ ನಡೆದಿದ್ದು, ಪೊಲೀಸ್ ಉಪವಿಭಾಗ ಮಟ್ಟದಲ್ಲಿ 4, ಪೊಲೀಸ್ ಠಾಣಾ ಮಟ್ಟದಲ್ಲಿ 26 ಹಾಗೂ ಬೀಟ್ ಮಟ್ಟದಲ್ಲಿ 392 ಶಾಂತಿ ಸಭೆಗಳನ್ನು ನಡೆಸಿ ಅಗತ್ಯ ಸೂಚನೆಗಳನ್ನು ನೀಡಲಾಗಿದೆ.
ಡಿಜೆ ಹಾಗೂ ಸೌಂಡ್ ಸಿಸ್ಟಂ ಮಾಲೀಕರೊಂದಿಗೂ 12 ಸಭೆಗಳನ್ನು ನಡೆಸಿ ಸುಪ್ರೀಂ ಕೋರ್ಟ್ ಹಾಗೂ ಸರ್ಕಾರದ ನಿಯಮಗಳ ಬಗ್ಗೆ ಮಾಹಿತಿ ನೀಡಲಾಗಿದೆ.ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿರುವ ಸ್ಥಳಗಳಲ್ಲಿ ಪೊಲೀಸ್ ಶ್ವಾನದಳ ಹಾಗೂ ಎಎಸ್‌ಸಿ ತಂಡಗಳಿಂದ ತಪಾಸಣೆ ನಡೆಸಲಾಗುವುದು. ಪ್ರತಿಷ್ಠಾಪನಾ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಆಯೋಜಕರಿಗೆ ಸೂಚಿಸಲಾಗಿದೆ.
ಅಲ್ಲದೆ, 24 ಗಂಟೆಯೂ ಕನಿಷ್ಠ ಒಬ್ಬ ಜವಾಬ್ದಾರಿಯುತ ಆಯೋಜಕರು ಸ್ಥಳದಲ್ಲಿರುವಂತೆ ಹಾಗೂ ಅಗತ್ಯ ಸಂಖ್ಯೆಯಲ್ಲಿ ಸ್ವಯಂಸೇವಕರನ್ನು ನಿಯೋಜಿಸುವಂತೆಯೂ ಸೂಚಿಸಲಾಗಿದೆ.ವಿಸರ್ಜನಾ ಮೆರವಣಿಗೆ ಹಾಗೂ ವಿಸರ್ಜನಾ ಸ್ಥಳಗಳಲ್ಲಿ ಸಾರ್ವಜನಿಕರ ಸುರಕ್ಷತೆಗೆ ವಿಶೇಷ ಗಮನ ನೀಡಲಾಗಿದ್ದು, ಪರಿಣಿತ ಈಜುಗಾರರನ್ನು ನಿಯೋಜಿಸುವಂತೆ ಆಯೋಜಕರಿಗೆ ಸೂಚಿಸಲಾಗಿದೆ.
ಹಬ್ಬದ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಅಥವಾ ತಪ್ಪು ಸುದ್ದಿಗಳನ್ನು ಹರಡಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವವರ ಮೇಲೂ ಪೊಲೀಸ್ ಇಲಾಖೆ ತೀವ್ರ ನಿಗಾ ಇರಿಸಿದೆ. ಇಂತಹ ಚಟುವಟಿಕೆ ಕಂಡುಬಂದರೆ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.
ಹಬ್ಬ ಎಂದರೆ ಸಂಭ್ರಮ, ಭಕ್ತಿ ಮತ್ತು ಒಗ್ಗಟ್ಟಿನ ಆಚರಣೆ. ಹೀಗಾಗಿ ಸಾರ್ವಜನಿಕರು ಹಾಗೂ ಗಣೇಶೋತ್ಸವ ಆಯೋಜಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ ಸರ್ಕಾರದ ನಿಯಮಾವಳಿಗಳನ್ನು ಪಾಲಿಸುವ ಮೂಲಕ ಗಣೇಶ ಚತುರ್ಥಿಯನ್ನು ಶಾಂತಿ, ಸೌಹಾರ್ದತೆ ಹಾಗೂ ಸುರಕ್ಷಿತ ವಾತಾವರಣದಲ್ಲಿ ಸಂಭ್ರಮದಿಂದ ಆಚರಿಸುವಂತೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಮನವಿ ಮಾಡಿದೆ.