ಶಿರಸಿ: ತಾಲೂಕಿನ ವಿವಿಧ ಗ್ರಾಮೀಣ ಭಾಗಗಳಲ್ಲಿ ಸಂಭ್ರಮದಿಂದ ನಡೆಯುತ್ತಿರುವ ಸಾರ್ವಜನಿಕ ಗಣೇಶೋತ್ಸವದ ಹಿನ್ನೆಲೆಯಲ್ಲಿ ಶಾಸಕ ಭೀಮಣ್ಣ ನಾಯ್ಕ ಅವರು ವಿವಿಧ ಗಣೇಶೋತ್ಸವ ಮಂಟಪಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಅಚನಹಳ್ಳಿ, ಬಿಸಲಕೊಪ್ಪ, ಬ್ಯಾಗದ್ದೆ, ಬಿಕ್ನಳ್ಳಿ, ಲಂಡಕನಹಳ್ಳಿ, ನರೇಬೈಲ್, ಹೋಡ್ಸ್ಮನೆ, ಚೌಡಿಸರ, ಸಣ್ಣಕೇರಿ, ಬದ್ನಳ್ಳಿ, ಇಸಳೂರು ಹಾಗೂ ವಕ್ಕಲಕೊಪ್ಪ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಟಪಗಳಿಗೆ ಭೇಟಿ ನೀಡಿದ ಶಾಸಕರು, ಶ್ರೀ ಗಣಪತಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಕ್ಷೇತ್ರದ ಜನರಿಗೆ ಸುಖ, ಶಾಂತಿ, ನೆಮ್ಮದಿ ಹಾಗೂ ಸಕಲ ಅಭಿವೃದ್ಧಿ ದೊರೆಯಲಿ ಎಂದು ಪ್ರಾರ್ಥಿಸಿದರು.
ಈ ವೇಳೆ ಮಾತನಾಡಿದ ಭೀಮಣ್ಣ ನಾಯ್ಕ, ಗಣೇಶೋತ್ಸವ ಕೇವಲ ಧಾರ್ಮಿಕ ಆಚರಣೆಗೆ ಸೀಮಿತವಾಗದೆ, ಸಮಾಜದ ವಿವಿಧ ವರ್ಗದ ಜನರನ್ನು ಒಗ್ಗೂಡಿಸುವ ಸಾಂಸ್ಕೃತಿಕ ಹಾಗೂ ಸಾಮಾಜಿಕ ಉತ್ಸವವಾಗಿ ಬೆಳೆದಿದೆ ಎಂದರು.
ಗ್ರಾಮೀಣ ಭಾಗಗಳಲ್ಲಿ ಭಕ್ತಿಭಾವದಿಂದ ಹಾಗೂ ಸೌಹಾರ್ದತೆಯಿಂದ ಗಣೇಶೋತ್ಸವ ಆಚರಿಸುತ್ತಿರುವುದು ಸಂತಸದ ಸಂಗತಿ. ಇಂತಹ ಆಚರಣೆಗಳು ಗ್ರಾಮದ ಜನರಲ್ಲಿ ಪರಸ್ಪರ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುತ್ತವೆ ಎಂದು ಅವರು ಹೇಳಿದರು.
ಭೇಟಿಯ ಸಂದರ್ಭದಲ್ಲಿ ಶಾಸಕರು ಸ್ಥಳೀಯ ಗ್ರಾಮಸ್ಥರು ಹಾಗೂ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಕುಶಲೋಪರಿ ವಿಚಾರಿಸಿ ಉತ್ಸವಕ್ಕೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಆಯಾ ಗ್ರಾಮಗಳ ಪ್ರಮುಖರು, ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು.