ಬನವಾಸಿ: ವಿದ್ಯಾರ್ಥಿ ಜೀವನದಲ್ಲಿ ಆರೋಗ್ಯ ಮತ್ತು ಶಿಸ್ತನ್ನು ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯವಾಗಿದ್ದು, ವ್ಯಸನಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಬನವಾಸಿ ಪೊಲೀಸ್ ಠಾಣೆಯ ಪಿಎಸ್ಐ ಮಹಾಂತಪ್ಪ ಕುಂಬಾರ ಹೇಳಿದರು.
ಸಮೀಪದ ಭಾಶಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಜನಜಾಗೃತಿ ವೇದಿಕೆ ಹಾಗೂ ಪೊಲೀಸ್ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಬಾಲ್ಯದಿಂದಲೇ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಮದ್ಯಪಾನ, ಧೂಮಪಾನ, ತಂಬಾಕು ಹಾಗೂ ಮಾದಕ ವಸ್ತುಗಳಂತಹ ದುಶ್ಚಟಗಳಿಂದ ಸಂಪೂರ್ಣ ದೂರವಿರಬೇಕು. ಇವುಗಳು ಆರೋಗ್ಯದ ಮೇಲೆ ಮಾತ್ರವಲ್ಲದೆ ವಿದ್ಯಾಭ್ಯಾಸ, ಭವಿಷ್ಯ ಮತ್ತು ಕುಟುಂಬದ ಮೇಲೂ ಗಂಭೀರ ಪರಿಣಾಮ ಬೀರುತ್ತವೆ. ಸ್ನೇಹಿತರ ಒತ್ತಾಯ ಅಥವಾ ಕುತೂಹಲಕ್ಕೆ ಯಾವುದೇ ದುಶ್ಚಟಕ್ಕೆ ಒಳಗಾಗಬಾರದು ಎಂದು ಅವರು ಸಲಹೆ ನೀಡಿದರು.
ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡು ಕ್ರೀಡೆ, ಓದು ಹಾಗೂ ಸೃಜನಾತ್ಮಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧಗಳ ಬಗ್ಗೆಯೂ ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಮಹಾಂತಪ್ಪ ಕುಂಬಾರ ಹೇಳಿದರು.
ಬನವಾಸಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಗಜಾನನ ಗೌಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಂದಿನ ಮಕ್ಕಳೇ ನಾಳಿನ ಪ್ರಜೆಗಳು. ಭಾರತ ಸದೃಢ ದೇಶವಾಗಬೇಕಾದರೆ ಯುವಶಕ್ತಿಯ ಪಾತ್ರ ಪ್ರಮುಖವಾಗಿದೆ. ವಿದ್ಯಾರ್ಥಿಗಳ ಇಂದಿನ ಸಂಕಲ್ಪವೇ ನಾಳೆಯ ವ್ಯಸನಮುಕ್ತ ಸಮಾಜದ ಶಕ್ತಿಯಾಗಲಿದೆ ಎಂದರು.
ಜಿಲ್ಲಾ ಜನಜಾಗೃತಿ ವೇದಿಕೆಯ ಜಿಲ್ಲಾ ಸಂಘಟನಾ ಉಪಾಧ್ಯಕ್ಷ ಸುಧೀರ ನಾಯರ್ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಆರೋಗ್ಯ ಮತ್ತು ಶಿಸ್ತು ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಜಿಲ್ಲಾ ಜನಜಾಗೃತಿ ವೇದಿಕೆಯ ಮೂಲಕ ವಿವಿಧ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸುತ್ತಿದೆ ಎಂದರು.
ಮುಖ್ಯೋಪಾಧ್ಯಾಯ ಚಂದ್ರಶೇಖರ ಬೈಲೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಲಯ ಮೇಲ್ವಿಚಾರಕಿ ಸುನಂದಾ ಎಸ್., ಸೇವಾ ಪ್ರತಿನಿಧಿಗಳಾದ ಸವಿತಾ ನಾಯ್ಕ್, ಶಿಲ್ಪಾ, ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಲಯ ಮೇಲ್ವಿಚಾರಕಿ ಸುನಂದಾ ಎಸ್. ನಿರೂಪಿಸಿದರು. ಶಿಕ್ಷಕ ದಯಾನಂದ ನಾಯ್ಕ್ ಸ್ವಾಗತಿಸಿದರು. ಸೇವಾ ಪ್ರತಿನಿಧಿ ಸವಿತಾ ವಂದಿಸಿದರು.