Friday, October 23, 2026
HomeLocal Newsಅರ್ಹ ಮತದಾರರು ಪಟ್ಟಿಯಿಂದ ಬಿಟ್ಟುಹೋಗದಂತೆ ಎಚ್ಚರವಿರಲಿ

ಅರ್ಹ ಮತದಾರರು ಪಟ್ಟಿಯಿಂದ ಬಿಟ್ಟುಹೋಗದಂತೆ ಎಚ್ಚರವಿರಲಿ

ಕಾರವಾರ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂದರ್ಭದಲ್ಲಿ ಜಿಲ್ಲೆಯ ಯಾವುದೇ ಅರ್ಹ ಮತದಾರರ ಹೆಸರು ಪಟ್ಟಿಯಿಂದ ಬಿಟ್ಟುಹೋಗದಂತೆ ಹಾಗೂ ಅನರ್ಹ ವ್ಯಕ್ತಿಗಳ ಹೆಸರು ಸೇರ್ಪಡೆಯಾಗದಂತೆ ಗರಿಷ್ಠ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲೆಯ ಮತದಾರರ ಪಟ್ಟಿಯ ವೀಕ್ಷಕ ಡಾ. ರಾಮ ಪ್ರಸಾತ್ ಮನೋಹರ್ ಸೂಚಿಸಿದರು.

ಕಾರವಾರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲೆಯ ಮತದಾರರ ನೋಂದಣಾಧಿಕಾರಿಗಳು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮತದಾರರ ಪಟ್ಟಿಯಲ್ಲಿ ಅನರ್ಹ ವ್ಯಕ್ತಿಗಳ ಹೆಸರು ಸೇರ್ಪಡೆಯಾಗದಂತೆ ತಡೆದು, ಶುದ್ಧ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು ವಿಶೇಷ ಸಮಗ್ರ ಪರಿಷ್ಕರಣೆಯ ಪ್ರಮುಖ ಉದ್ದೇಶವಾಗಿದೆ. ಇದೇ ವೇಳೆ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.

ವಿವಿಧ ಕಾರಣಗಳಿಂದ ಎನ್ಯುಮರೇಷನ್ ಫಾರಂ ನೀಡದೇ ಕರಡು ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಆಗಿರುವ ಪ್ರಕರಣಗಳಲ್ಲಿ ಅರ್ಹ ಮತದಾರರು ಇದ್ದರೆ, ಅಗತ್ಯ ದಾಖಲೆಗಳನ್ನು ಪಡೆದು ಅವರನ್ನು ಮತ್ತೆ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಅಂತಿಮ ಮತದಾರರ ಪಟ್ಟಿ ಪ್ರಕಟವಾದ ನಂತರವೂ ಹೊಸದಾಗಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಆಕ್ಷೇಪಣೆ ಸಲ್ಲಿಸಲು ಅವಕಾಶವಿದ್ದು, ಈ ಪ್ರಕ್ರಿಯೆ ನಿರಂತರವಾಗಿ ನಡೆಯಲಿದೆ ಎಂದು ತಿಳಿಸಿದರು.

ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸಂಜಯ್ ಸಾಲುಂಕೆ ಮಾತನಾಡಿ, ಜಿಲ್ಲೆಯ ಎಲ್ಲಾ ಬಿಎಲ್‌ಒಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ಗೌರವಧನವನ್ನು ಹೆಚ್ಚಿಸಬೇಕು ಎಂದು ಮನವಿ ಮಾಡಿದರು. ವಿಚಾರಣಾ ನೋಟಿಸ್‌ಗಳಿಗೆ ಅಶಕ್ತರು ಹಾಗೂ ವಿದೇಶದಲ್ಲಿರುವವರ ಪರವಾಗಿ ಕುಟುಂಬ ಸದಸ್ಯರು ಹಾಜರಾಗಲು ಅವಕಾಶ ನೀಡಿರುವುದು ಉತ್ತಮ ಕ್ರಮ ಎಂದರು.

ಸಿಪಿಐ(ಎಂ) ಪಕ್ಷದ ಯಮುನಾ ಗಾಂವಕರ್ ಮಾತನಾಡಿ, ಮಹಿಳೆಯರು, ಅಲ್ಪಸಂಖ್ಯಾತರು, ವಿಕಲಚೇತನರು ಹಾಗೂ ದುರ್ಬಲ ಸಮುದಾಯಗಳ ಅರ್ಹ ಮತದಾರರ ಹೆಸರುಗಳು ಪಟ್ಟಿಯಿಂದ ಬಿಟ್ಟುಹೋಗದಂತೆ ವಿಶೇಷ ಮುತುವರ್ಜಿ ವಹಿಸಬೇಕು ಎಂದು ಆಗ್ರಹಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಡಾ. ರಾಮ ಪ್ರಸಾತ್ ಮನೋಹರ್, ಮತದಾರರ ಪಟ್ಟಿಯಿಂದ ವಂಚಿತರಾಗಿರುವ ಮಹಿಳೆಯರು, ಅಲ್ಪಸಂಖ್ಯಾತರು, ವಿಕಲಚೇತನರು ಹಾಗೂ ದುರ್ಬಲ ಸಮುದಾಯಗಳ ಅರ್ಹ ಮತದಾರರ ಪಟ್ಟಿಯನ್ನು ನೀಡಿದಲ್ಲಿ ಅವರನ್ನು ಸೇರ್ಪಡೆಗೊಳಿಸುವಂತೆ ಬಿಎಲ್‌ಒಗಳಿಗೆ ಸೂಚಿಸಲಾಗುವುದು. ಪರಿಷ್ಕರಣೆಯ ಅವಧಿ ವಿಸ್ತರಣೆ ಕುರಿತು ಬಂದಿರುವ ಮನವಿಯನ್ನು ಚುನಾವಣಾ ಆಯೋಗದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ವಿವಿಧ ವಿಧಾನಸಭಾ ಕ್ಷೇತ್ರಗಳ ಮತದಾರರ ನೋಂದಣಾಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳಾದ ರಮ್ಯಾ, ಶ್ರವಣ ಕುಮಾರ್, ಚಂದ್ರಶೇಖರ್, ಮಹೇಶ್, ಹಳಿಯಾಳ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಶಿವಕ್ಕ ಮಾದರ, ಯಲ್ಲಾಪುರ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಪಾಂಡು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಟಿ. ನಾಯ್ಕ, ತಾಲೂಕು ಉಪಾಧ್ಯಕ್ಷ ಬಾಬು ಶೇಖ್, ಬ್ಲಾಕ್ ಅಧ್ಯಕ್ಷ ಅರವಿಂದ ಕಲಗುಟ್ಕರ್ ಹಾಗೂ ಚುನಾವಣಾ ಶಾಖೆಯ ಅಧಿಕಾರಿಗಳು ಉಪಸ್ಥಿತರಿದ್ದ

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share