Friday, October 23, 2026
HomeLocal Newsಸಂಕನೂರರನ್ನು ಗೆಲ್ಲಿಸುವ ಸಂಕಲ್ಪ: ಸಂಸದ ಕಾಗೇರಿ

ಸಂಕನೂರರನ್ನು ಗೆಲ್ಲಿಸುವ ಸಂಕಲ್ಪ: ಸಂಸದ ಕಾಗೇರಿ

ಯಲ್ಲಾಪುರ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಎಸ್.ವಿ. ಸಂಕನೂರರನ್ನು ಮತ್ತೊಮ್ಮೆ ವಿಧಾನಪರಿಷತ್ ಸದಸ್ಯರನ್ನಾಗಿ ಗೆಲ್ಲಿಸುವ ಗುರಿಯೊಂದಿಗೆ ಎರಡೂ ಪಕ್ಷಗಳು ಒಗ್ಗಟ್ಟಾಗಿ ಕಾರ್ಯನಿರ್ವಹಿಸಲಿವೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಯಲ್ಲಾಪುರದ ಅಡಿಕೆ ಭವನದಲ್ಲಿ ನಡೆದ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಸಂಕನೂರರು ಮತ್ತೊಮ್ಮೆ ಎಂಎಲ್‌ಸಿ ಆಗಿಯೇ ಆಗುತ್ತಾರೆ ಎಂಬ ವಿಶ್ವಾಸವಿದೆ. ನಮ್ಮ ಸಂಕಲ್ಪ ಎಂದರೆ ಬಹುಪಾಲು ಮತ ನಮ್ಮ ಜಿಲ್ಲೆಯದ್ದೇ ಆಗಿರಬೇಕು. ಕ್ಷೇತ್ರದ ಮತದಾರರು ಪ್ರಜ್ಞಾವಂತರಾಗಿದ್ದು, ಸಂಕನೂರರನ್ನು ಗೆಲ್ಲಿಸಲಿದ್ದಾರೆ ಎಂದರು.

ಜೆಡಿಎಸ್‌ನ ಬಲವೂ ಬಿಜೆಪಿಯೊಂದಿಗೆ ಸೇರಿದ್ದು, ಲೋಕಸಭಾ ಚುನಾವಣೆಯಲ್ಲಿ ದಾಖಲೆಯ ಮತಗಳೊಂದಿಗೆ ಗೆಲುವು ಸಾಧಿಸಿದ ರೀತಿಯಲ್ಲೇ ಈ ಚುನಾವಣೆಯಲ್ಲೂ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಕಾಗೇರಿ ಹೇಳಿದರು.

ಹೊರಟ್ಟಿ ಅವರಿಂದ ಕಾಂಗ್ರೆಸ್ ರಾಜೀನಾಮೆ ಪಡೆದಿರುವ ವಿಚಾರವನ್ನು ಪ್ರಸ್ತಾಪಿಸಿದ ಅವರು, ಕಾಂಗ್ರೆಸ್ ಅತ್ಯಂತ ಹೀನ ಮಟ್ಟದಲ್ಲಿ ಹೊರಟ್ಟಿ ಅವರಿಂದ ರಾಜೀನಾಮೆ ಪಡೆದಿದ್ದು, ಇದು ಜಿಲ್ಲೆಯ ಪದವೀಧರ ಮತದಾರರಿಗೆ ಮಾಡಿದ ಅಪಮಾನ ಎಂದು ಆರೋಪಿಸಿದರು.

 ಅಕ್ಟೋಬರ್ 23ರಂದು ಮತದಾನ ನಡೆಯಲಿದ್ದು, ಸಂಕನೂರರನ್ನು ಗೆಲ್ಲಿಸಲು ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಕಾಗೇರಿ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ತನ್ನ ಮೂಲ ವೈಚಾರಿಕತೆಯನ್ನು ಮರೆತು ಮುನ್ನಡೆಯುತ್ತಿದೆ ಎಂದು ಆರೋಪಿಸಿದರು. ಸಂವಿಧಾನಬದ್ಧ ಸಂಸ್ಥೆಗಳನ್ನು ಅಗೌರವದಿಂದ ಕಾಣಲಾಗುತ್ತಿದೆ. ಚುನಾವಣಾ ಆಯೋಗದ ಆಂತರಿಕ ವಿಚಾರಗಳನ್ನು ಕಾಂಗ್ರೆಸ್ ದೊಡ್ಡದಾಗಿಸುತ್ತಿದೆ. ಇದರಿಂದ ಯಾರ ಹಕ್ಕಿಗೂ ಹಾನಿಯಾಗಿಲ್ಲ ಎಂದರು.

ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಹಾಗೂ ಆಡಳಿತದ ವಿರುದ್ಧವೂ ಆರೋಪ ಮಾಡಿದ ಅವರು, ಸರ್ಕಾರಕ್ಕೆ ಸಕಾಲದಲ್ಲಿ ಸಂಬಳ ನೀಡಲು ಸಾಧ್ಯವಾಗುತ್ತಿಲ್ಲ, ಗೃಹಲಕ್ಷ್ಮಿ ಹಣ ನೀಡುತ್ತಿಲ್ಲ ಹಾಗೂ ಭ್ರಷ್ಟಾಚಾರ ಮಿತಿಮೀರಿದೆ. ರಾಜ್ಯ ಸರ್ಕಾರ ಆಡಳಿತ ನಡೆಸುವಲ್ಲಿ ವಿಫಲವಾಗಿದೆ ಎಂದು ಕಾಗೇರಿ ಆರೋಪಿಸಿದರು.

ಶಾಸಕ ದಿನಕರ ಶೆಟ್ಟಿ ಮಾತನಾಡಿ, ಎಸ್.ವಿ. ಸಂಕನೂರರು ಎರಡು ಬಾರಿ ಎಂಎಲ್‌ಸಿಯಾಗಿ ಸೇವೆ ಸಲ್ಲಿಸಿದ್ದು, ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ವಿಶೇಷವಾಗಿ ಶಿಕ್ಷಕರಿಗೆ ಹಲವು ರೀತಿಯಲ್ಲಿ ಕೊಡುಗೆ ನೀಡಿರುವ ಅವರನ್ನು ಈ ಬಾರಿ ಗೆಲ್ಲಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.

ಅಭ್ಯರ್ಥಿ ಎಸ್.ವಿ. ಸಂಕನೂರು ಮಾತನಾಡಿ, ರಾಜ್ಯದ ಶಿಕ್ಷಣ ಇಲಾಖೆಯಲ್ಲಿ ಸುಮಾರು 79 ಸಾವಿರ ಹುದ್ದೆಗಳು ಖಾಲಿ ಇವೆ. ಉತ್ತಮ ಶಿಕ್ಷಣದ ಬಗ್ಗೆ ಸರ್ಕಾರ ಮಾತನಾಡುತ್ತಿದೆಯಾದರೂ, ಹುದ್ದೆಗಳನ್ನು ಭರ್ತಿ ಮಾಡುವ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದರು. ಪದವೀಧರರು ಆಕ್ರೋಶಗೊಂಡಿದ್ದು, ನೌಕರರ ಸಮಸ್ಯೆಗಳಿಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ ಎಂದರು.

ಸಭೆಯ ಆರಂಭದಲ್ಲಿ ಎನ್.ಎಸ್. ಹೆಗಡೆ ಕರ್ಕಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಪಶ್ಚಿಮ ಪದವೀಧರ ಕ್ಷೇತ್ರದ ನಾಲ್ಕೂ ಜಿಲ್ಲೆಗಳಲ್ಲಿ ಗೆಲುವು ಸಾಧಿಸುವ ಉದ್ದೇಶದಿಂದ ಪೂರ್ವಭಾವಿ ಸಭೆ ನಡೆಸಲಾಗುತ್ತಿದೆ. ಬಿಜೆಪಿ ಹಾಗೂ ಜೆಡಿಎಸ್ ಒಗ್ಗಟ್ಟಾಗಿ ಚುನಾವಣೆಯನ್ನು ಎದುರಿಸಿ ಗೆಲುವು ಸಾಧಿಸುವ ಗುರಿ ಹೊಂದಿವೆ. ಕ್ಷೇತ್ರದಲ್ಲಿ 23 ಮತಗಟ್ಟೆಗಳಿದ್ದು, ಕಾರ್ಯಕರ್ತರು ಸಂಘಟಿತವಾಗಿ ಕಾರ್ಯನಿರ್ವಹಿಸಬೇಕು ಎಂದರು.

ಸಭೆಯಲ್ಲಿ ಆರ್.ಡಿ. ಹೆಗಡೆ, ವೆಂಕಟೇಶ ನಾಯ್ಕ, ಕೆ.ಜಿ. ನಾಯ್ಕ, ಪ್ರಶಾಂತ್ ನಾಯ್ಕ, ಸುನೀಲ್ ನಾಯ್ಕ, ಮಾಜಿ ಶಾಸಕ ಸುನೀಲ್ ಹೆಗಡೆ, ರಾಜ್ಯ ವಕ್ತಾರ, ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣಾ ಉಸ್ತುವಾರಿ ಹರಿಪ್ರಕಾಶ ಕೋಣೆಮನೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಹೆಗಡೆ ಹರ್ತೆಬೈಲ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. ಪ್ರಶಾಂತ್ ನಾಯ್ಕ ನಿರೂಪಿಸಿದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share