ಮೈಸೂರು: ಪಶುಸಂಗೋಪನೆ ಹಾಗೂ ರೇಷ್ಮೆ ಸಚಿವರ ನೇತೃತ್ವದಲ್ಲಿ ಮೈಸೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ತಂಬಾಕು ಬೆಳೆ ದರ ಕುಸಿತದ ಹಿನ್ನೆಲೆ ರೈತರು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತು ಮಹತ್ವದ ಸಭೆ ನಡೆಯಿತು.
ಸಭೆಯಲ್ಲಿ ತಂಬಾಕು ಬೆಳೆಗಾರರು ಎದುರಿಸುತ್ತಿರುವ ಆರ್ಥಿಕ ನಷ್ಟ, ಉತ್ಪಾದನಾ ವೆಚ್ಚ ಏರಿಕೆ, ಮಾರುಕಟ್ಟೆಯಲ್ಲಿ ಸಮರ್ಪಕ ಬೆಲೆ ಸಿಗದಿರುವುದು, ಫ್ಲಾಟ್‌ಫಾರ್ಮ್‌ನಲ್ಲಿ ಖರೀದಿ ವಿಳಂಬ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಸವಿಸ್ತಾರವಾಗಿ ಚರ್ಚಿಸಲಾಯಿತು. ರೈತರು ಹೆಚ್ಚಿನ ವೆಚ್ಚದಲ್ಲಿ ಬೆಳೆ ಬೆಳೆಸಿದರೂ, ಲಾಭಾಂಶ ಕಾಣದೆ ಸಂಕಷ್ಟದಲ್ಲಿರುವುದನ್ನು ಪ್ರತಿನಿಧಿಗಳು ವಿವರಿಸಿದರು.
ಈ ಸಂದರ್ಭದಲ್ಲಿ ಮೈಸೂರು ಹಾಗೂ ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ತಂಬಾಕು ಬೆಳೆಗಾರರ ಹಿತಾಸಕ್ತಿ ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ. ರೈತರಿಗೆ ನಷ್ಟವಾಗದಂತೆ ಕನಿಷ್ಠ ಬೆಲೆ ಖಾತ್ರಿ ಹಾಗೂ ಮಾರುಕಟ್ಟೆ ವ್ಯವಸ್ಥೆ ಸುಧಾರಣೆಗಾಗಿ ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ. ರೈತರ ಸಮಸ್ಯೆಗಳನ್ನು ಕೇಂದ್ರ ಸರ್ಕಾರದ ಗಮನಕ್ಕೆ ತಂದು ಸೂಕ್ತ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು ಎಂದರಲ್ಲದೆ, ತಂಬಾಕು ದರ ಸ್ಥಿರತೆ ಮತ್ತು ಖರೀದಿ ಪ್ರಕ್ರಿಯೆ ಸುಗಮಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಸಭೆಯಲ್ಲಿ ಸಚಿವರು ಸಂಬಂಧಿತ ಅಧಿಕಾರಿಗಳಿಗೆ ಖರೀದಿ ಪ್ರಕ್ರಿಯೆಯನ್ನು ವೇಗಗೊಳಿಸಿ, ರೈತರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವಂತೆ ಸೂಚಿಸಿ, ಸರ್ಕಾರ ರೈತರೊಂದಿಗೆ ಸದಾ ನಿಲ್ಲುತ್ತದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರು, ತಂಬಾಕು ಬೆಳೆಗಾರರ ಸಂಘದ ಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಪ್ರಸನ್ನ ಕುಮಾರ್ ಬಿ.ಎಸ್.