ಕುಮಟಾ: ದೇವಿಮನೆ ಘಟ್ಟದಲ್ಲಿ ಕುಮಟಾ ತಾಲೂಕಿನ ಮಾಸ್ತಿಹಳ್ಳದ ಸಮೀಪ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸೊಂದು ರಸ್ತೆ ಬದಿಯಿಂದ ಕೆಳಕ್ಕೆ ಉರುಳಿ ಕಂದಕಕ್ಕೆ ಬಿದ್ದ ಪರಿಣಾಮ 12 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಕುರಿತು ವರದಿಯಾಗಿದೆ.
ಬಾಗಲಕೋಟೆಯಿಂದ ಧರ್ಮಸ್ಥಳಕ್ಕೆ ಶಿರಸಿ ಮಾರ್ಗವಾಗಿ ತೆರಳುತ್ತಿದ್ದ ಬಸ್ ಮಾಸ್ತಿಹಳ್ಳದ ಬಳಿ ಬಂದಾಗ ಚಾಲಕನ ನಿಯಂತ್ರಣ ತಪ್ಪಿದೆ ಎನ್ನಲಾಗಿದೆ. ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬದಿಯ ಕಂದಕಕ್ಕೆ ಉರುಳಿದ್ದು, ಬಸ್‌ನಲ್ಲಿದ್ದ ಪ್ರಯಾಣಿಕರಲ್ಲಿ ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ತೆರಳಿ ಗಾಯಾಳುಗಳ ರಕ್ಷಣೆಗೆ ಮುಂದಾದರು. ಬಳಿಕ ಕುಮಟಾ ಪೊಲೀಸ್ ಠಾಣೆಯ ಪಿಎಸ್‌ಐ ಖಾದರ್ ಕೂಡ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಸ್ಥಳೀಯರು ಮತ್ತು ಪೊಲೀಸರು ಸೇರಿ ಬಸ್‌ನಲ್ಲಿದ್ದ ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗೆ ಕಳುಹಿಸುವ ವ್ಯವಸ್ಥೆ ಮಾಡಿದರು.
ಗಂಭೀರವಾಗಿ ಗಾಯಗೊಂಡಿರುವ 12 ಪ್ರಯಾಣಿಕರು ಸೇರಿದಂತೆ ಗಾಯಾಳುಗಳನ್ನು ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅಪಘಾತಕ್ಕೆ ಕಾರಣವಾದ ಅಂಶಗಳ ಕುರಿತು ಕುಮಟಾ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


