Thursday, October 22, 2026
HomeLocal Newsಅಪ್ರಾಪ್ತರ ವಾಹನ ಚಾಲನೆ: 131 ಪ್ರಕರಣ, ರೂ.13 ಲಕ್ಷಕ್ಕೂ ಅಧಿಕ  ದಂಡ

ಅಪ್ರಾಪ್ತರ ವಾಹನ ಚಾಲನೆ: 131 ಪ್ರಕರಣ, ರೂ.13 ಲಕ್ಷಕ್ಕೂ ಅಧಿಕ  ದಂಡ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಕರು ವಾಹನ ಚಾಲನೆ ಮಾಡುವುದು ಹಾಗೂ ಅವರಿಗೆ ವಾಹನ ಚಾಲನೆ ಮಾಡಲು ಅವಕಾಶ ನೀಡುವವರ ವಿರುದ್ಧ ಜಿಲ್ಲಾ ಪೊಲೀಸರು ಕಟ್ಟುನಿಟ್ಟಿನ ಕಾನೂನು ಕ್ರಮ ಮುಂದುವರಿಸಿದ್ದಾರೆ.

ಜನವರಿ 2026ರಿಂದ ಸೆಪ್ಟೆಂಬರ್ 2026ರವರೆಗೆ ಅಪ್ರಾಪ್ತ ವಯಸ್ಕರು ವಾಹನ ಚಾಲನೆ ಮಾಡಿದ ಹಾಗೂ ಅವರಿಗೆ ವಾಹನ ಚಾಲನೆ ಮಾಡಲು ಅವಕಾಶ ನೀಡಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೋಟಾರು ವಾಹನ ಕಾಯಿದೆ ಅಡಿಯಲ್ಲಿ ಒಟ್ಟು 131 ಪ್ರಕರಣಗಳನ್ನು ದಾಖಲಿಸಲಾಗಿದೆ.

ಈ ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಾಲಯವು ಅಪ್ರಾಪ್ತರ ಪೋಷಕರು ಹಾಗೂ ವಾಹನ ಮಾಲೀಕರಿಗೆ ಒಟ್ಟು ರೂ. 13,09,000 ದಂಡ ವಿಧಿಸಿದೆ ಎಂದು ಉತ್ತರ ಕನ್ನಡ ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.

ದಾಖಲಾದ ಪ್ರಕರಣಗಳ ಪೈಕಿ ಭಟ್ಕಳ ಶಹರ ಹಾಗೂ ಭಟ್ಕಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತಿ ಹೆಚ್ಚು 45 ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಲ್ಲಿ ನ್ಯಾಯಾಲಯವು ಒಟ್ಟು ರೂ.5,38,500 ದಂಡ ವಿಧಿಸಿದೆ.

ಅಪ್ರಾಪ್ತ ವಯಸ್ಕರಿಗೆ ವಾಹನ ಚಾಲನೆ ಮಾಡಲು ಅವಕಾಶ ನೀಡುವುದರಿಂದ ಅವರ ಜೀವಕ್ಕೆ ಮಾತ್ರವಲ್ಲದೆ, ಇತರ ರಸ್ತೆ ಬಳಕೆದಾರರ ಸುರಕ್ಷತೆಗೂ ಗಂಭೀರ ಅಪಾಯ ಉಂಟಾಗುತ್ತದೆ. ಇಂತಹ ಉಲ್ಲಂಘನೆಗಳಿಗೆ ವಾಹನ ಮಾಲೀಕರು ಹಾಗೂ ಪೋಷಕರು ಕಾನೂನು ಕ್ರಮ ಮತ್ತು ದಂಡಕ್ಕೆ ಒಳಗಾಗಬೇಕಾಗುತ್ತದೆ ಎಂದು ಪೊಲೀಸರು ಎಚ್ಚರಿಸಿದ್ದಾರೆ.

ಆದ್ದರಿಂದ ಪೋಷಕರು ತಮ್ಮ ಅಪ್ರಾಪ್ತ ಮಕ್ಕಳಿಗೆ ಯಾವುದೇ ಕಾರಣಕ್ಕೂ ದ್ವಿಚಕ್ರ ವಾಹನ, ಕಾರು ಅಥವಾ ಇತರೆ ಮೋಟಾರು ವಾಹನಗಳನ್ನು ಚಾಲನೆ ಮಾಡಲು ನೀಡಬಾರದು. ವಾಹನ ಮಾಲೀಕರು ಕೂಡ ಅಪ್ರಾಪ್ತರಿಗೆ ವಾಹನ ನೀಡದಂತೆ ಕಟ್ಟುನಿಟ್ಟಿನ ಎಚ್ಚರಿಕೆ ವಹಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.

“ಅಪ್ರಾಪ್ತರಿಗೆ ವಾಹನ ನೀಡಬೇಡಿ, ಅವರ ಸುರಕ್ಷಿತ ಭವಿಷ್ಯವನ್ನು ಕಾಪಾಡಿ” ಎಂಬ ಸಂದೇಶದೊಂದಿಗೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಜಿಲ್ಲೆಯಾದ್ಯಂತ ಅಪ್ರಾಪ್ತರ ವಾಹನ ಚಾಲನೆ ವಿರುದ್ಧ ತಪಾಸಣೆ ಹಾಗೂ ಕಾನೂನು ಕ್ರಮ ಮುಂದುವರಿಸಲಿದೆ. ಪೋಷಕರು ಮತ್ತು ವಾಹನ ಮಾಲೀಕರು ಕಾನೂನು ಪಾಲಿಸುವ ಮೂಲಕ ರಸ್ತೆ ಸುರಕ್ಷತೆಗೆ ಸಹಕರಿಸುವಂತೆ ಇಲಾಖೆ ಮನವಿ ಮಾಡಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share