ಕಾರವಾರ: ಗ್ರಾಮ ಆಡಳಿತ ಅಧಿಕಾರಿ ಹುದ್ದೆ ಪಡೆಯುವ ನಿರೀಕ್ಷೆಯೊಂದಿಗೆ ಸಾವಿರಾರು ಮಂದಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರೂ, ಪರೀಕ್ಷೆ ದಿನ ಮಾತ್ರ ದೊಡ್ಡ ಸಂಖ್ಯೆಯ ಅಭ್ಯರ್ಥಿಗಳು ಗೈರಾಗಿರುವುದು ಗಮನ ಸೆಳೆಯಿತು.
ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ನಡೆದ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಯಲ್ಲಿ ಬೆಳಗಿನ ಹಾಗೂ ಮಧ್ಯಾಹ್ನದ ಅವಧಿ ಸೇರಿ ಸಾವಿರಾರು ಅಭ್ಯರ್ಥಿಗಳು ಗೈರಾಗಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯಲ್ಲಿನ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆ–2026 ಅನ್ನು ಜಿಲ್ಲೆಯಾದ್ಯಂತ ಶಾಂತಿಯುತವಾಗಿ ಹಾಗೂ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಸುಸೂತ್ರವಾಗಿ ನಡೆಸಲಾಯಿತು.
ಪರೀಕ್ಷೆಯು ಎರಡು ಅವಧಿಗಳಲ್ಲಿ ನಡೆಯಿತು. ಬೆಳಗಿನ ಅವಧಿಯಲ್ಲಿ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ನಡೆದ ಪರೀಕ್ಷೆಗೆ ಒಟ್ಟು 8,222 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 5,847 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,375 ಅಭ್ಯರ್ಥಿಗಳು ಗೈರು ಹಾಜರಾಗಿದ್ದಾರೆ. ಅಂದರೆ ನೋಂದಾಯಿತರ ಪೈಕಿ ಗಮನಾರ್ಹ ಸಂಖ್ಯೆಯ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದತ್ತ ಮುಖ ಮಾಡಿರಲಿಲ್ಲ.
ಮಧ್ಯಾಹ್ನದ ಅವಧಿಯಲ್ಲೂ ಇದೇ ರೀತಿಯ ಚಿತ್ರಣ ಕಂಡುಬಂದಿದ್ದು, ಮಧ್ಯಾಹ್ನ 2.30ರಿಂದ ಸಂಜೆ 4.30ರವರೆಗೆ ನಡೆದ ಪರೀಕ್ಷೆಗೆ 8,223 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 5,824 ಅಭ್ಯರ್ಥಿಗಳು ಹಾಜರಾಗಿದ್ದು, 2,399 ಅಭ್ಯರ್ಥಿಗಳು ಗೈರು ಹಾಜರಾಗಿದ್ದಾರೆ.
ಪರೀಕ್ಷೆಯ ಸಂದರ್ಭದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಡಿಸಿದ್ದ ಎಲ್ಲಾ ಮಾರ್ಗಸೂಚಿಗಳು, ಗೌಪ್ಯತಾ ನಿಯಮಗಳು ಹಾಗೂ ಪರೀಕ್ಷಾ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಯಿತು. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಬಿಗಿ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿತ್ತು.
ಅಭ್ಯರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಪೊಲೀಸ್ ಬಂದೋಬಸ್ತ್, ವೈದ್ಯಕೀಯ ಸೌಲಭ್ಯ, ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸಲಾಗಿತ್ತು.
ಜಿಲ್ಲಾ ಆಡಳಿತದ ಸಮನ್ವಯದಲ್ಲಿ ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಹೆಸ್ಕಾಂ, ಸಾರಿಗೆ ಇಲಾಖೆ ಹಾಗೂ ಇತರೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯ ಸಹಕಾರದಿಂದ ಪರೀಕ್ಷೆಯನ್ನು ಯಾವುದೇ ತೊಂದರೆಗಳಿಲ್ಲದೆ ಯಶಸ್ವಿಯಾಗಿ ಪೂರ್ಣಗೊಳಿಸಲಾಯಿತು.
ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ ಅವರು ಅಂಕೋಲಾ ಮತ್ತು ಕುಮಟಾದ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪರೀಕ್ಷೆಯ ಸುಗಮ ಹಾಗೂ ಯಶಸ್ವಿ ನಿರ್ವಹಣೆಗಾಗಿ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ, ಉಪಮುಖ್ಯ ಅಧೀಕ್ಷಕರು ಹಾಗೂ ವೀಕ್ಷಕರನ್ನು ನೇಮಕ ಮಾಡಲಾಗಿತ್ತು.


