ಕಾರವಾರ: ಜನವಸತಿ ಪ್ರದೇಶದಲ್ಲಿ ಪದೇಪದೇ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ಸೆರೆಹಿಡಿದಿದೆ.
ಅ.4ರ ರಾತ್ರಿ 10.30ರ ಸುಮಾರಿಗೆ ಕಾರವಾರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕಾರವಾರ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಗೋಪಶಿಟ್ಟಾ ವಲಯದ ವಲಯ ಅರಣ್ಯಾಧಿಕಾರಿಗಳ ಮಾರ್ಗದರ್ಶನದಲ್ಲಿ ಗೋಪಶಿಟ್ಟಾ ವಲಯದ ಚಿತ್ತಾಕುಲ ಶಹರ ಶಾಖೆಯ ಹಳೇಭಾಗ ಗ್ರಾಮದಲ್ಲಿ ಚಿರತೆ ಸೆರೆ ಕಾರ್ಯಾಚರಣೆ ನಡೆಯಿತು.
ಕಳೆದ ಕೆಲ ದಿನಗಳಿಂದ ಗ್ರಾಮದಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಿರಂತರ ನಿಗಾ ವಹಿಸಿದ್ದರು. ಸೂಕ್ತ ಕಾರ್ಯತಂತ್ರ ರೂಪಿಸಿ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ, ಚಿರತೆಯನ್ನು ಬೋನಿನಲ್ಲಿ ಸುರಕ್ಷಿತವಾಗಿ ಸೆರೆಹಿಡಿಯುವಲ್ಲಿ ಯಶಸ್ವಿಯಾದರು.
ಸೆರೆಹಿಡಿದ ಬಳಿಕ ಚಿರತೆಯ ಆರೋಗ್ಯವನ್ನು ಪರಿಶೀಲಿಸಲಾಯಿತು. ಚಿರತೆ ಆರೋಗ್ಯವಾಗಿರುವುದು ಖಚಿತವಾದ ನಂತರ ಅದನ್ನು ಸುರಕ್ಷಿತ ಅರಣ್ಯ ಪ್ರದೇಶಕ್ಕೆ ರವಾನಿಸಲಾಯಿತು.
ಕಾರ್ಯಾಚರಣೆ ವೇಳೆ ಗೋಪಶಿಟ್ಟಾ ವಲಯದ ವಲಯ ಅರಣ್ಯಾಧಿಕಾರಿಗಳು ಗ್ರಾಮಸ್ಥರಿಗೆ ವನ್ಯಜೀವಿಗಳೊಂದಿಗೆ ಸಹಬಾಳ್ವೆ, ಚಿರತೆಗಳ ಸಂರಕ್ಷಣೆ ಹಾಗೂ ಜನವಸತಿ ಪ್ರದೇಶಗಳಲ್ಲಿ ವನ್ಯಜೀವಿಗಳು ಕಾಣಿಸಿಕೊಂಡಾಗ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಾಹಿತಿ ನೀಡಿದರು.
ಅರಣ್ಯ ಇಲಾಖೆ ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆ ಹಾಗೂ ಸ್ಥಳೀಯ ಗ್ರಾಮಸ್ಥರ ಸಹಕಾರದಿಂದ ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿದು ಸೂಕ್ತ ಅರಣ್ಯ ಪ್ರದೇಶಕ್ಕೆ ರವಾನಿಸಲಾಗಿದ್ದು, ಇದರಿಂದ ಗ್ರಾಮಸ್ಥರ ಆತಂಕವೂ ದೂರವಾಗಿದೆ.


